Spread the love

ಬೆಂಗಳೂರು: ಮಾಜಿ ಬಿಜೆಪಿ ಶಾಸಕ ರಾಮಣ್ಣ ಲಮಾಣಿ ಕಾಂಗ್ರೆಸ್ ಸೇರ್ಪಡೆಯಾಗಿದ್ದು, ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಅವರು ಲಮಾಣಿ ಅವರನ್ನು ಪಕ್ಷಕ್ಕೆ ಸೇರ್ಪಡೆಗೊಳಿಸಿಕೊಂಡರು.

ಬೆಂಗಳೂರಿನ ಕೆಪಿಸಿಸಿ ಕಚೇರಿಯಲ್ಲಿ ನಡೆದ ಪಕ್ಷ ಸೇರ್ಪಡೆ ಕಾರ್ಯಕ್ರಮದಲ್ಲಿ ರಾಮಣ್ಣ ಲಮಾಣಿ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್, ಮಾಜಿ ಸಿಎಂ ಜಗದೀಶ್ ಶೆಟ್ಟರ್, ಕೆಪಿಸಿಸಿ ಕಾರ್ಯಾಧ್ಯಕ್ಷರಾದ ಸಲೀಂ ಅಹ್ಮದ್. ಚಂದ್ರಪ್ಪ, ಸಚಿವರಾದ ಹೆಚ್ ಕೆ ಪಾಟೀಲ್, ಮಾಜಿ ಡಿಸಿಎಂ ಲಕ್ಷ್ಮಣ್ ಸವದಿ, ಮಾಜಿ ಸಚಿವರಾದ ವಿನಯ್ ಕುಲಕರ್ಣಿ ಸೇರಿದಂತೆ ಹಲವರು ಉಪಸ್ಥಿತರಿದ್ದರು.

ಈ ವೇಳೆ ಮಾತನಾಡಿದ ರಾಮಪ್ಪ ಲಮಾಣಿ, ‘ಯಾವುದೇ ಷರತ್ತು ಇಲ್ಲದೇ ನಾನು ಕಾಂಗ್ರೆಸ್  ಸೇರುತ್ತಿದ್ದೇನೆ. ಬಿಜೆಪಿಯಲ್ಲಿ ಆಗಿರುವ ನೋವಿನಿಂದ ಆ ಪಕ್ಷ ತೊರೆದಿದ್ದೇನೆ. ಕಾಂಗ್ರೆಸ್ ಪಕ್ಷದ ನಾಯಕರು ಯಾರನ್ನು ಅಭ್ಯರ್ಥಿಯನ್ನಾಗಿ ಮಾಡುತ್ತಾರೋ ಅವರನ್ನು ಗೆಲ್ಲಿಸಲು ನಾನು ಶ್ರಮಿಸುತ್ತೇನೆ’ ಎಂದರು.

‘ಜಗದೀಶ ಶೆಟ್ಟರ್ ಹಾಗೂ ಡಿ.ಕೆ. ಶಿವಕುಮಾರ್ ಅವರು ಉತ್ತರ ಕರ್ನಾಟಕ ಭಾಗದ ಅನೇಕ ನಾಯಕರಿಗೆ ಗಾಳ ಹಾಕಿದ್ದಾರೆ. ಮುಂದಿನ ದಿನಗಳಲ್ಲಿ ಅನೇಕರು ಕಾಂಗ್ರೆಸ್ ಸೇರಲಿದ್ದಾರೆ. ಮುಂದಿನ 10 ವರ್ಷಗಳ ಕಾಲ ರಾಜ್ಯದಲ್ಲಿ ಕಾಂಗ್ರೆಸ್ ಆಡಳಿತ ಮಾಡಲಿದೆ. ಈ ಬಾರಿಯ ಚುನಾವಣೆಯಲ್ಲಿ ಬಿಜೆಪಿಯ ಅನೇಕ ಶಾಸಕರು ಕೇವಲ 1,500ಕ್ಕಿಂತ ಕಡಿಮೆ ಮತಗಳ ಅಂತರದಿಂದ ಗೆದ್ದಿದ್ದಾರೆ. ಇಲ್ಲದಿದ್ದರೆ, ಬಿಜೆಪಿ 40 ಸ್ಥಾನಗಳಿಗೆ ನಿಲ್ಲುತ್ತಿತ್ತು. ಮುಂದಿನ ದಿನಗಳಲ್ಲಿ ಬಿಜೆಪಿ ಇನ್ನಷ್ಟು ದೂಳೀಪಟ ಆಗಲಿದೆ’ ಎಂದರು.

‘ಸಿದ್ದರಾಮಯ್ಯ ಮತ್ತು ಡಿ.ಕೆ. ಶಿವಕುಮಾರ್ ಅವರು ಜನರಿಗೆ ಗ್ಯಾರಂಟಿ ಯೋಜನೆ ಜಾರಿ ಮಾಡಿದ್ದಾರೆ. ಜನರು ಕೂಡ ಕಾಂಗ್ರೆಸ್ ಸರ್ಕಾರದ ಮೇಲೆ ಹೆಚ್ಚಿನ ವಿಶ್ವಾಸ ಇಟ್ಟಿದ್ದಾರೆ. ಮುಂದಿನ ದಿನಗಳಲ್ಲಿ ಬಿಜೆಪಿ ಕಾರ್ಯಕರ್ತರೂ ಕೂಡ ಪಕ್ಷ ತೊರೆದು ಕಾಂಗ್ರೆಸ್ ಸೇರುವುದಾಗಿ ಮಾತು ನೀಡಿದ್ದಾರೆ. ಅದಕ್ಕಾಗಿ ಪ್ರತ್ಯೇಕ ಕಾರ್ಯಕ್ರಮ ಮಾಡುತ್ತೇವೆ’ ಎಂದರು.

ಪಕ್ಷ ಸೇರಲು ಕಾಯುತ್ತಿರುವ 42 ಮುಖಂಡರ ಅರ್ಜಿ ಇದೆ: ಡಿಕೆ ಶಿವಕುಮಾರ್

ಪಕ್ಷ ಸೇರ್ಪಡೆ ಬಳಿಕ ಮಾತನಾಡಿದ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಅವರು, ಜಗದೀಶ್ ಶೆಟ್ಟರ್ ಮತ್ತು ಲಕ್ಷ್ಮಣ ಸವದಿ ಅವರು ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆ ಮಾಡಿಕೊಳ್ಳಬಹುದಾದ ಉತ್ತರ ಮತ್ತು ದಕ್ಷಿಣ ಕರ್ನಾಟಕದ ನಾಯಕರ ದೊಡ್ಡ ಪಟ್ಟಿಯನ್ನೇ ತಂದು ಚರ್ಚೆ ಮಾಡಿದ್ದಾರೆ. ವಿವಿಧ ಪಕ್ಷಗಳ 42 ಕ್ಕೂ ಹೆಚ್ಚು ಮುಖಂಡರ ಅರ್ಜಿಗಳು ನನ್ನ ಮುಂದಿದೆ. ಆ ಹೆಸರುಗಳನ್ನು ಈಗ ಬಹಿರಂಗ ಮಾಡುವುದಿಲ್ಲ” ಎಂದು ತಿಳಿಸಿದರು.

“ಸ್ಥಳೀಯ ನಾಯಕರುಗಳ ಜತೆ ಚರ್ಚೆ ಮಾಡಿ, ಒಮ್ಮತ ಮೂಡಿಸಿ ಅನ್ಯ ಪಕ್ಷಗಳ ನಾಯಕರುಗಳನ್ನು ಸೇರ್ಪಡೆ ಮಾಡಿಕೊಳ್ಳುವ ಪ್ರಕ್ರಿಯೆ ನಡೆಯುತ್ತಿದೆ. ವಿರೋಧ ಪಕ್ಷಗಳ ಮೈತ್ರಿಯನ್ನು ವಿರೋಧಿಸಿ ಕಾಂಗ್ರೆಸ್ ಪಕ್ಷವನ್ನು ಸೇರುತ್ತಿರುವುದರಿಂದ ರಾಜ್ಯ, ರಾಷ್ಟ್ರಮಟ್ಟದಲ್ಲಿ ನಮ್ಮ ಪಕ್ಷ ಹಾಗೂ ಕಾರ್ಯಕರ್ತರಿಗೆ ಶಕ್ತಿ ತುಂಬಿದಂತಾಗಿದೆ. ಕೆಲವರು 2024 ರಲ್ಲಿ ವಿಧಾನಸಭಾ ಚುನಾವಣೆ ನಡೆಯುತ್ತದೆ ಎಂದು ಹೇಳುತ್ತಿದ್ದಾರೆ. ಅದರ ವಿವರಣೆಗೆ ನಾನು ಹೋಗುವುದಿಲ್ಲ. ಆಮ್ ಆದ್ಮಿ ಪಕ್ಷದಿಂದ ಸ್ಪರ್ಧೆ ಮಾಡಿದ 100ಕ್ಕೂ ಹೆಚ್ಚು ಜನ ಅಭ್ಯರ್ಥಿಗಳು ನನ್ನನ್ನು ಭೇಟಿ ಮಾಡಿ, ನಾವು ʼಇಂಡಿಯಾʼದಲ್ಲಿ ಗುರುತಿಸಿಕೊಂಡಿದ್ದು, ನಿಮ್ಮ ಜೊತೆ ಕೈ ಜೋಡಿಸುತ್ತೇವೆ ಎಂದು ಹೇಳಿದ್ದಾರೆ ಎಂದು ಹೇಳಿದರು.

 

Leave a Reply

Your email address will not be published. Required fields are marked *