Spread the love

ಬೆಂಗಳೂರು: ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರಿಗೆ ಮತ್ತೆ ಸಿಬಿಐ ಕಂಟಕ ಆರಂಭವಾಗಿದೆ. ಆದಾಯ ಮೀರಿ ಆಸ್ತಿ ಗಳಿಕೆ ಪ್ರಕರಣದ ತನಿಖೆ ನಡೆಸದಂತೆ ಹೈಕೋರ್ಟ್ ಮೆಟ್ಟಿಲೇರಿದ್ದ ಡಿಕೆ ಶಿವಕುಮಾರ್ ಅವರಿಗೆ ಹಿನ್ನಡೆಯಾಗಿದೆ. ಡಿಕೆಶಿ ವಿರುದ್ಧದ ಪ್ರಕರಣವನ್ನು ಸಿಬಿಐ ತನಿಖೆ ಮಾಡಬಹುದು ಎಂದು ಹೈಕೋರ್ಟ್ ಹೇಳಿದೆ.

ಡಿಕೆ ಶಿವಕುಮಾರ್‌ ಅವರು ತಡವಾಗಿ ಅರ್ಜಿ ಸಲ್ಲಿಸಿದ್ದಾರೆ ಎಂದು ಅವರ ಅರ್ಜಿಯನ್ನು ಹೈಕೋರ್ಟ್‌ ವಜಾಗೊಳಿಸಿದೆ. ಅದಲ್ಲದೇ ಸಿಬಿಐ ತನಿಖೆಗೆ ಈ ಹಿಂದೆ ನೀಡಿದ್ದ ತಡೆಯಾಜ್ಞೆಯನ್ನು ನ್ಯಾಯಾಲಯ ತೆರವುಗೊಳಿಸಿದೆ. ಅಲ್ಲದೆ ಮೂರು ತಿಂಗಳಲ್ಲಿ ತನಿಖೆ ಪೂರ್ಣಗೊಳಿಸಲು ಹೈಕೋರ್ಟ್ ಆದೇಶ ನೀಡಿದೆ.

ಗೊತ್ತುಪಡಿಸಿದ ಆದಾಯ ಮೂಲಕ್ಕಿಂತ ಹೆಚ್ಚು ಆಸ್ತಿ ಹೊಂದಿದ್ದಾರೆ ಎಂಬ ಆಪಾದನೆ ಸಂಬಂಧ ಸಿಬಿಐ ತನಿಖೆಗೆ ಶಿಫಾರಸ್ಸು ಮಾಡಿದ ರಾಜ್ಯ ಸರ್ಕಾರದ ಅಧಿಸೂಚನೆ ಪ್ರಶ್ನಿಸಿ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಸಲ್ಲಿಸಿರುವ ಅರ್ಜಿ ವಿಚಾರಣೆ ಏಪ್ರಿಲ್‌ನಲ್ಲಿ ಪೂರ್ಣಗೊಂಡಿತ್ತು.ವಾದ ಪ್ರತಿವಾದ ಆಲಿಸಿದ್ದ ನ್ಯಾ. ಕೆ ನಟರಾಜನ್ ಅವರಿದ್ದ ಏಕಸದಸ್ಯ ಪೀಠ ಆದೇಶವನ್ನು ಕಾಯ್ದಿರಿಸಿತ್ತು.

2014- 2018ರ ಸಮಯದಲ್ಲಿ ಆಸ್ತಿ ಗಳಿಕೆಯಲ್ಲಿ ಭಾರಿ ಅಕ್ರಮ ನಡೆದಿದೆ ಎಂದು ಡಿಕೆ ಶಿವಕುಮಾರ್ ವಿರುದ್ಧ ಸಿಬಿಐ ಕೇಸ್ ದಾಖಲಿಸಿ ತನಿಖೆ ಆರಂಭಿಸಿತ್ತು. ಈ ಸಂಬಂಧ ಡಿಕೆಶಿ ಸಿಬಿಐ ತನಿಖೆ ರದ್ದು ಕೋರಿದ್ದರು. ಡಿಕೆ ಶಿವಕುಮಾರ್ ಪರ ಉದಯ್‌ ಹೊಳ್ಳ, ಸಂದೇಶ್ ಚೌಟ ಹಾಗೂ ಸಿಬಿಐ ಪರ ಪ್ರಸನ್ನ ಕುಮಾರ್ ವಾದ ಮಂಡಿಸಿದ್ದರು.

Leave a Reply

Your email address will not be published. Required fields are marked *