ಬೆಂಗಳೂರು: ಜನಗಣತಿ ಜೊತೆಯಲ್ಲಿ ಜಾತಿ ಗಣತಿಯನ್ನೂ ನಡೆಸುವ ಕೇಂದ್ರ ಸರ್ಕಾರದ ತೀರ್ಮಾನವನ್ನು ನಮ್ಮ ಸರ್ಕಾರ ಹೃತ್ಪೂರ್ವಕವಾಗಿ ಸ್ವಾಗತಿಸುತ್ತದೆ. ಇದೇ ಸಂದರ್ಭದಲ್ಲಿ ಜಾತಿ ಗಣತಿ ಜೊತೆ ಸಾಮಾಜಿಕ, ಆರ್ಥಿಕ ಮತ್ತು ಶೈಕ್ಷಣಿಕ ಸಮೀಕ್ಷೆಯನ್ನೂ ನಡೆಸಬೇಕೆಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಆಗ್ರಹಿಸಿದ್ದಾರೆ.
ಕರ್ನಾಟಕದಲ್ಲಿ ನಾವು ಕೇವಲ ಜಾತಿ ಗಣತಿ ನಡೆಸದೇ ಅದರ ಜೊತೆ ಸಾಮಾಜಿಕ, ಆರ್ಥಿಕ ಮತ್ತು ಶೈಕ್ಷಣಿಕ ಸ್ಥಿತಿಗತಿಗಳ ಸಮೀಕ್ಷೆಯನ್ನು ನಡೆಸಿದ್ದೇವೆ. ಈ ದತ್ತಾಂಶಗಳ ಆಧಾರದಲ್ಲಿ ಈಗಿನ ಮೀಸಲಾತಿ ನೀತಿಯನ್ನು ಪರಿಷ್ಕರಿಸಿ ಅದರ ಮಿತಿಯನ್ನು ಹೆಚ್ಚಿಸುವ ಪ್ರಯತ್ನ ಕೂಡಾ ನಡೆದಿದೆ. ಜಾತಿ ಗಣತಿಯ ಜೊತೆಯಲ್ಲಿ ಈ ಪ್ರಕ್ರಿಯೆಯನ್ನು ಕೂಡಾ ಕೇಂದ್ರ ಸರ್ಕಾರ ಪೂರ್ಣಗೊಳಿಸಲಿದೆ ಎಂದು ನಂಬಿದ್ದೇನೆ ತಮ್ಮ ಮಾಧ್ಯಮ ಹೇಳಿಕೆಯಲ್ಲಿ ತಿಳಿಸಿದ್ದಾರೆ.
ವೈಜ್ಞಾನಿಕವಾದ ಮೀಸಲಾತಿ ನೀತಿಯನ್ನು ರೂಪಿಸುವುದೇ ಜಾತಿ ಆಧಾರಿತ ಸಾಮಾಜಿಕ, ಆರ್ಥಿಕ ಮತ್ತು ಶೈಕ್ಷಣಿಕ ಸಮೀಕ್ಷೆಯ ಮೂಲ ಉದ್ದೇಶ. ಪ್ರತೀ ಬಾರಿ ಮೀಸಲಾತಿಗೆ ಸಂಬಂಧಿಸಿದ ಪ್ರಕರಣಗಳು ವಿಚಾರಣೆಗೆ ಬಂದಾಗೆಲ್ಲ ಸುಪ್ರೀಂ ಕೋರ್ಟ್ ಇಂತಹದ್ದೊಂದು ಸಮೀಕ್ಷೆ ನಡೆಸುವ ಅಗತ್ಯವನ್ನು ಒತ್ತಿ ಒತ್ತಿ ಹೇಳುತ್ತಾ ಬಂದಿದೆ ಎನ್ನುವುದನ್ನು ಕೇಂದ್ರ ಸರ್ಕಾರ ಗಮನಿಸಬೇಕಾಗುತ್ತದೆ ಎಂದು ಹೇಳಿದ್ದಾರೆ.
ನಮ್ಮ ಪಕ್ಷದ ಪಂಚ ಗ್ಯಾರಂಟಿ ಯೋಜನೆಗಳನ್ನು ಟೀಕಿಸುತ್ತಲೇ ಕೊನೆಗೆ ಅದನ್ನು ತಮ್ಮ ಪಕ್ಷದ ಕಾರ್ಯಕ್ರಮವನ್ನಾಗಿ ಮಾಡಿಕೊಂಡ ರೀತಿಯಲ್ಲಿಯೇ ಇದೀಗ ನಮ್ಮ ಜಾತಿಗಣತಿ ಕಾರ್ಯಕ್ರಮವನ್ನು ಕೂಡಾ ಪ್ರಧಾನಿ ನರೇಂದ್ರ ಮೋದಿ ಅವರ ಸರ್ಕಾರ ಕೈಗೆತ್ತಿಕೊಂಡಿರುವುದು ಕಾಂಗ್ರೆಸ್ ಪಕ್ಷದ ನೀತಿ ಮತ್ತು ಕಾರ್ಯಕ್ರಮಗಳು ಜನಪರವಾಗಿರುವುದಕ್ಕೆ ಸಾಕ್ಷಿಯಾಗಿದೆ ಎಂದು ಹೇಳಿದ್ದಾರೆ.
ಕರ್ನಾಟಕ ಸರ್ಕಾರ ನಡೆಸಿರುವ ಜಾತಿ ಆಧಾರಿತ ಸಾಮಾಜಿಕ, ಆರ್ಥಿಕ ಮತ್ತು ಶೈಕ್ಷಣಿಕ ಸಮೀಕ್ಷೆ ಒಂದು ಪರಿಪೂರ್ಣ ಮಾದರಿಯಾಗಿದ್ದು ಈ ಬಗ್ಗೆ ಕೇಂದ್ರ ಸರ್ಕಾರಕ್ಕೆ ಯಾವುದೇ ಸಲಹೆ-ಸಹಕಾರ ನೀಡಲು ರಾಜ್ಯ ಸರ್ಕಾರ ಸಿದ್ಧ ಇದೆ ಎಂದು ಸಿಎಂ ತಿಳಿಸಿದ್ದಾರೆ.
