ಮಂಡ್ಯ: ಟ್ರಾಫಿಕ್ ಪೊಲೀಸರ ಎಡವಟ್ಟಿನಿಂದ 3 ವರ್ಷದ ಮಗು ಮೃತಪಟ್ಟ ದಾರುಣ ಘಟನೆ ಮಂಡ್ಯದಲ್ಲಿ ಸೋಮವಾರ ನಡೆದಿದೆ.
ಮಂಡ್ಯದ ನಂದ ಸರ್ಕಲ್ ಬಳಿ ಟ್ರಾಫಿಕ್ ಪೊಲೀಸರು ಹೆಲ್ಮೆಟ್ ತಪಾಸಣೆ ನಡೆಸುತ್ತಿದ್ದ ಈ ವೇಳೆ ದುರ್ಘಟನೆ ಸಂಭವಿಸಿದೆ. ದಂಪತಿ ಮತ್ತು ಮಗು ಪ್ರಯಾಣಿಸುತ್ತಿದ್ದ ಬೈಕ್ ಅನ್ನು ಪೊಲೀಸರು ದಿಢೀರ್ ಅಡ್ಡಗಟ್ಟಿದ ಪರಿಣಾಮ ಬೈಕ್ ಸ್ಕಿಡ್ ಆಗಿ ಕೆಳಗೆ ಬಿದ್ದಿದೆ.
ಈ ವೇಳೆ ಬೈಕ್ ನಲ್ಲಿದ್ದ ಮಗು ಕೂಡ ಕೆಳಗೆ ಬಿದ್ದಿದ್ದು, ಮಗು ಮೇಲೆ ಹಿಂದಿನಿಂದ ಬಂದ ಟೆಂಪೋ ಹರಿದಿದೆ. ಗಂಭೀರ ಪೆಟ್ಟಾಗಿ ಮಗು ಸ್ಥಳದಲ್ಲೇ ಸಾವನ್ನಪ್ಪಿದೆ ಎಂದು ಹೇಳಲಾಗಿದೆ.
ಮಗುವಿನ ಸಾವಿಗೆ ಪೊಲೀಸರ ಕಾರಣ ಎಂದು ಸ್ಥಳೀಯರು ಆಕ್ರೋಶ ವ್ಯಕ್ತಪಡಿಸುತ್ತಿದ್ದು, ಮಗುವಿನ ಮೃತದೇಹವನ್ನು ರಸ್ತೆ ಮಧ್ಯೆ ಇಟ್ಟು ಪೊಷಕರೊಂದಿಗೆ ಪ್ರತಿಭಟನೆ ನಡೆಸಿದ್ದಾರೆ.
ಮೂವರು ಅಧಿಕಾರಿಗಳ ಅಮಾನತು
ಇನ್ನು ಈ ಪ್ರಕರಣ ತೀವ್ರ ಸ್ವರೂಪ ಪಡೆಯುತ್ತಿದ್ದಂತೆಯೇ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರು ಎಎಸ್ಐಗಳನ್ನು ಅಮಾನತು ಮಾಡಲಾಗಿದೆ. ಮಗು ಸಾವಿಗೆ ಮಂಡ್ಯ ಟ್ರಾಫಿಕ್ ಪೊಲೀಸರು ಕಾರಣವೆಂದು ಕುಟುಂಬಂಸ್ಥರು ಹೆದ್ದಾರಿಯಲ್ಲಿ ಪ್ರತಿಭಟನೆ ಕುಳಿತ್ತಿದ್ದು, ಈ ಪ್ರಕರಣ ತೀವ್ರ ಸ್ವರೂಪ ಪಡೆದುಕೊಳ್ಳುತ್ತಿದ್ದಂತೆಯೇ ಎಚ್ಚೆತ್ತುಕೊಂಡು ಮಂಡ್ಯ ಎಸ್ಪಿ ಮಲ್ಲಿಕಾರ್ಜುನ ಬಾಲದಂಡಿ, ಹೆಲ್ಮೆಟ್ ತಪಾಸಣೆ ಮಾಡುತ್ತಿದ್ದ ಮೂವರು ಎಎಸ್ಐಗಳನ್ನು ಅಮಾನತು ಮಾಡಿದ್ದಾರೆ.
ಏನಿದು ಘಟನೆ?
ಮದ್ದೂರು ತಾಲ್ಲೂಕಿನ ಗೊರವನಹಳ್ಳಿಗೆ ಸೇರಿದ ಅಶೋಕ್ ಮತ್ತು ವಾಣಿ ದಂಪತಿ, ತಮ್ಮ ಮಗಳು ಹೃತೀಕ್ಷಗೆ (3 ವರ್ಷ) ನಾಯಿ ಕಚ್ಚಿದ್ದ ಹಿನ್ನೆಲೆಯಲ್ಲಿ ತುರ್ತು ಚಿಕಿತ್ಸೆಗಾಗಿ ಮಂಡ್ಯದ ಮಿಮ್ಸ್ ಆಸ್ಪತ್ರೆಗೆ ಬೈಕ್ನಲ್ಲಿ ಕರೆದುಕೊಂಡು ಹೋಗುತ್ತಿದ್ದರು. ಈ ವೇಳೆ ಮಂಡ್ಯ ನಗರದ ನಂದ ಸರ್ಕಲ್ ಬಳಿ ಟ್ರಾಫಿಕ್ ಪೊಲೀಸರು ಹೆಲ್ಮೆಟ್ ತಪಾಸಣೆಗಾಗಿ ಬೈಕ್ ಅನ್ನು ಅಡ್ಡಗಟ್ಟಿದ್ದಾರೆ.
ಏಕಾಏಕಿ ಹಠಾತ್ ಅಡ್ಡಗಟ್ಟಿದ ಪರಿಣಾಮ, ಅಶೋಕ್ ಚಾಲನೆ ಮಾಡುತ್ತಿದ್ದ ಬೈಕ್ ನಿಯಂತ್ರಣ ತಪ್ಪಿ ರಸ್ತೆಗೆ ಬಿದ್ದಿದ್ದಾರೆ. ಇದೇ ವೇಳೆ ಹಿಂದಿನಿಂದ ಬಂದ ಟೆಂಪೋ ಮಗು ಹೃತೀಕ್ ಮೇಲೆ ಹರಿದಿದೆ. ಪರಿಣಾಮ ಮಗು ಸ್ಥಳದಲ್ಲೇ ಮೃತಪಟ್ಟಿದೆ.
ಇದರಿಂದ ಸಿಡಿದೆದ್ದ ಕುಟುಂಬಸ್ಥರು ಟ್ರಾಫಿಕ್ ಪೊಲೀಸರ ವಿರುದ್ಧ ಆಕ್ರೋಶಗೊಂಡಿದ್ದು, ಹೆದ್ದಾರಿಯಲ್ಲಿ ಮಗುವಿನ ಶವವಿಟ್ಟು ಪ್ರತಿಭಟನೆಗಿಳಿದಿದ್ದಾರೆ.
