ಬೆಂಗಳೂರು: ಗೋವಿಂದರಾಜನಗರ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ವಿಜಯನಗರದ ಎಂ.ಸಿ.ಲೇಔಟ್‌ನ ಬಿಜಿಎಸ್ ಆಟದ ಮೈದಾನದಲ್ಲಿ ಶುಕ್ರವಾರ ಫ್ಲೆಕ್ಸ್ ವಿಚಾರವಾಗಿ ಕಾಂಗ್ರೆಸ್ ಮತ್ತು ಬಿಜೆಪಿ ಕಾರ್ಯಕರ್ತರ ನಡುವೆ ಮಾರಾಮಾರಿ ನಡೆದಿದೆ.
ಕಾಂಗ್ರೆಸ್‌ನ ಮಾಜಿ ಶಾಸಕ ಪ್ರಿಯಾಕೃಷ್ಣ ಬೆಂಬಲಿಗರು ಸಚಿವ ವಿ.ಸೋಮಣ್ಣ ಅವರ ಬೆಂಬಲಿಗರ ಮೇಲೆ ಹಲ್ಲೆ ನಡೆಸಿದ್ದಾರೆ, ಕಾಂಗ್ರೆಸ್ ಕಾರ್ಯಕ್ರಮಕ್ಕಾಗಿ ಅನುಮತಿ ಪಡೆದು ಯುಗಾದಿ ಉತ್ಸವ ಕಾರ್ಯಕ್ರಮಕ್ಕೆ ಸಿದ್ಧತೆ ನಡೆಸುತ್ತಿದ್ದಾರೆ ಎಂದು ಆರೋಪ ಮಾಡಲಾಗಿದೆ.
ಘರ್ಷಣೆಯಲ್ಲಿ ಕೆಲವು ಬಿಜೆಪಿ ಕಾರ್ಯಕರ್ತರಿಗೆ ಗಾಯಗಳಾಗಿದ್ದು, ವಿಜಯನಗರದ ಸರಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗಿದೆ. ಮಾರ್ಚ್ 19ರಂದು ಕಾಂಗ್ರೆಸ್ ಪಕ್ಷದ ಕಾರ್ಯಕ್ರಮ ನಡೆಯಬೇಕಿತ್ತು. ಬಿಜೆಪಿ ಕಾರ್ಯಕರ್ತರು ಆಕ್ಷೇಪ ವ್ಯಕ್ತಪಡಿಸಿದ ಬಳಿಕ ಮಾತಿನ ಚಕಮಕಿ ಘರ್ಷಣೆಗೆ ತಿರುಗಿದೆ ಎನ್ನಲಾಗಿದೆ.
ಸ್ಥಳಕ್ಕೆ ದೌಡಾಯಿಸಿದ ಪೊಲೀಸರು ಪರಿಸ್ಥಿತಿಯನ್ನು ನಿಯಂತ್ರಿಸಿದ್ದಾರೆ. ಬಿಗಿ ಬಂದೋಬಸ್ತ್ ಕೈಗೊಳ್ಳಲಾಗಿದೆ.