ಬೆಳಗಾವಿ: ಬೆಳಗಾವಿಯಲ್ಲಿ ಗ್ರಾಮ ಪಂಚಾಯತಿ ಸದಸ್ಯನೊಬ್ಬ ಗೂಂಡಾ ವರ್ತನೆಯನ್ನು ತೋರಿದ್ದಾನೆ. ಸಾರ್ವಜನಿಕವಾಗಿ ಗಾಳಿಯಲ್ಲಿ ಗುಂಡು ಹಾರಿಸಿ ಹುಟ್ಟುಹಬ್ಬ ಆಚರಿಸಿದ್ದಾರೆ ಎಂದು ತಿಳಿದು ಬಂದಿದೆ. ರಾಯಬಾಗ ತಾಲೂಕಿನ ಕುಡಚಿ ಪಟ್ಟಣದಲ್ಲಿ ಈ ಘಟನೆ ನಡೆದಿದೆ.
ಬಾಬಾಜಾನ್ ಖಾಲಿಮುಂಡಾಸೈ ಗೂಂಡಾವರ್ತನೆ ತೋರಿದ ಗ್ರಾಮ ಪಂಚಾಯಿತಿ ಸದಸ್ಯ. ಈ ಕುರಿತಾಗಿ ಕುಡಚಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಸದ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಗ್ರಾಪಂ ಸದಸ್ಯನನ್ನು ಬಂಧಿಸಲಾಗಿದೆ.
ಎರಡು ದಿನಗಳ ಹಿಂದೆ ಹುಟ್ಟುಹಬ್ಬ ಆಚರಿಸಿಕೊಂಡ ಬಾಬಾಜಾನ್ ಖಾಲಿಮುಂಡಾಸೈ, ಕೈಯಲ್ಲಿ ಚಾಕು ಹಿಡಿದು ನಡುರಸ್ತೆಯಲ್ಲೇ ಸಂಭ್ರಮಾಚರಣೆ ಮಾಡಿದ್ದಾರೆ. ಪಕ್ಕದಲ್ಲೇ ಪೊಲೀಸ್ ಠಾಣೆ ಇದ್ದರೂ ಯಾವುದೇ ಭಯ ಇಲ್ಲದೆ ಈತ ಗಾಳಿಯಲ್ಲಿ ಗುಂಡು ಹಾರಿಸಿದ್ದಾನೆ. ವಿಡಿಯೋ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಅಪ್ಲೋಡ್ ಮಾಡಿದ್ದು, ವಿಡಿಯೋ ವೈರಲ್ ಆಗುತ್ತಿದ್ದಂತೆ ಬಾಬಾಜಾನ್ರನ್ನು ಪೊಲೀಸರು ಬಂಧಿಸಿದ್ದಾರೆ.
