ಬೆಂಗಳೂರು: “ಸಿಗಂದೂರು ಅಭಿವೃದ್ಧಿ ಕಾರ್ಯಗಳಿಗೆ ಚಾಲನೆ ನೀಡುವ ಕಾರ್ಯಕ್ರಮದಲ್ಲಿ ಶಿಷ್ಟಾಚಾರ ಪಾಲನೆಯಾಗಿಲ್ಲ” ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.
ಇಂದು ಶಕ್ತಿ ಯೋಜನೆಯ 500ನೇ ಕೋಟಿ ಮಹಿಳೆಗೆ ಸಾಂಕೇತಿಕವಾಗಿ ಟಿಕೆಟ್ ವಿತರಣೆ ಕಾರ್ಯಕ್ರಮದ ಬಳಿಕ ಮಾತನಾಡಿದ ಅವರು, ”ಸಾಗರ ತಾಲೂಕಿನಲ್ಲಿ ಹಮ್ಮಿಕೊಂಡಿರುವ ಕಾರ್ಯಕ್ರಮವನ್ನು ಮುಂದೂಡುವಂತೆ ಕೇಂದ್ರ ಸಚಿವ ನಿತಿನ್ ಗಡ್ಕರಿ ಅವರಿಗೆ ದೂರವಾಣಿ ಮೂಲಕ ಮಾತನಾಡಿ ಪತ್ರವನ್ನೂ ಬರೆಯಲಾಗಿತ್ತು. ಕೇಂದ್ರ ಸಚಿವರು ಕಾರ್ಯಕ್ರಮ ಮುಂದೂಡಲು ಸಮ್ಮತಿಸಿದ್ದರು. ಹೀಗಿದ್ದರೂ ಸಹ ಇಲ್ಲಿನ ಸ್ಥಳೀಯ ಬಿಜೆಪಿ ನಾಯಕರ ಒತ್ತಡಕ್ಕೆ ಮಣಿದು, ನನ್ನ ಗಮನಕ್ಕೆ ತರದೇ ಕಾರ್ಯಕ್ರಮವನ್ನು ಇಂದೇ ಆಯೋಜಿಸಿದ್ದಾರೆ. ಪೂರ್ವನಿಯೋಜಿತ ಕಾರ್ಯಕ್ರಮಗಳಲ್ಲಿ ಭಾಗಿಯಾಗಲು ನಾನು ವಿಜಯಪುರ ಜಿಲ್ಲೆಗೆ ತೆರಳಬೇಕಾಗಿರುವುದರಿಂದ ಸಾಗರ ತಾಲ್ಲೂಕಿನ ಕಾರ್ಯಕ್ರಮಕ್ಕೆ ಹೋಗಲು ಸಾಧ್ಯವಾಗುತ್ತಿಲ್ಲ” ಎಂದರು.
“ಬಿಜೆಪಿಯ ಈ ನಡೆಯನ್ನು ಪ್ರತಿಭಟಿಸಲು ಕಾರ್ಯಕ್ರಮದಲ್ಲಿ ಸರ್ಕಾರದ ಯಾವುದೇ ಸಚಿವರು, ಸ್ಥಳೀಯ ಶಾಸಕರು ಭಾಗವಹಿಸುತ್ತಿಲ್ಲ. ನಮ್ಮ ನಡುವೆ ತಿಕ್ಕಾಟವನ್ನು ಪ್ರಾರಂಭಿಸಿರುವುದು ಕೇಂದ್ರ ಸರ್ಕಾರ. ಇಲ್ಲಿ ಶಿಷ್ಟಾಚಾರದ ಪಾಲನೆಯಾಗಿಲ್ಲ. ಕೇಂದ್ರ ಪುರಸ್ಕೃತ ಯೋಜನೆಗಳಲ್ಲಿ ರಾಜ್ಯ ಸರ್ಕಾರದ ಪಾಲೂ ಇರುತ್ತದೆ. ಅಂತಹ ಸಂದರ್ಭದಲ್ಲಿ ರಾಜ್ಯ ಸರ್ಕಾರ ಎಲ್ಲ ಶಿಷ್ಟಾಚಾರಗಳನ್ನೂ ತಪ್ಪದೇ ಪಾಲಿಸುತ್ತದೆ. ಇಂದಿನ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿಗಳಿಗಾಗಲಿ, ಸಂಬಂಧಪಟ್ಟ ಇಲಾಖಾ ಸಚಿವರಿಗಾಗಲಿ, ಸ್ಥಳೀಯ ಶಾಸಕರಿಗಾಗಲೀ ಆಮಂತ್ರಣ ನೀಡಲಾಗಿಲ್ಲ” ಎಂದು ತಿಳಿಸಿದರು.
ಕೇಂದ್ರ ಸರ್ಕಾರ ಸಿಎಂಗೆ ಮೊದಲು ತಿಳಿಸಬೇಕು-ಡಿಸಿಎಂ: “ಸಿಗಂದೂರು ಸೇತುವೆ ಲೋಕಾರ್ಪಣೆ ವಿಚಾರವಾಗಿ ಕೇಂದ್ರ ಸರ್ಕಾರ ಸಿಎಂಗೆ ಮೊದಲು ತಿಳಿಸಬೇಕು. ರಾಜ್ಯ ಸರ್ಕಾರವನ್ನು ವಿಶ್ವಾಸಕ್ಕೆ ತೆಗೆದುಕೊಳ್ಳಬೇಕು” ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಹೇಳಿದರು.
ಸದಾಶಿವನಗರ ನಿವಾಸದ ಬಳಿ ಇಂದು ಮಾತನಾಡಿದ ಅವರು, ಸೇತುವೆ ಉದ್ಘಾಟನೆಗೆ ಸಿಎಂ ಗೈರು ವಿಚಾರವಾಗಿ ಪ್ರತಿಕ್ರಿಯಿಸುತ್ತಾ, “ಕೇಂದ್ರ ಸರ್ಕಾರ ಸಿಎಂಗೆ ಮೊದಲು ತಿಳಿಸಬೇಕು. ರಾಜ್ಯ ಸರ್ಕಾರವನ್ನು ವಿಶ್ವಾಸಕ್ಕೆ ತೆಗೆದುಕೊಳ್ಳಬೇಕು. ಸಂಸದರು ಮನವಿ ಮಾಡಿದ್ದಾರೆ. ಅದಕ್ಕಾಗಿ ಸಿಎಂ ಪತ್ರ ಕೂಡಾ ಬರೆದಿದ್ದಾರೆ. ಇದೊಂದು ದೊಡ್ಡ ಕಾರ್ಯಕ್ರಮ. ಒಂದು ತಿಂಗಳ ಮುನ್ನವೇ ಹೇಳಬೇಕು. 2,000 ಕೋಟಿಗೂ ಹೆಚ್ಚು ಹಣ ಖರ್ಚಾಗಿದೆ. ನಮ್ಮ ನಿರಾವರಿ ಇಲಾಖೆಯಿಂದಲೂ ಖರ್ಚು ಮಾಡಿದ್ದೇವೆ. ಇದಕ್ಕೆ ಹೋಗಲೇ ಬೇಕಾಗಿತ್ತು” ಎಂದು ಅವರು ಹೇಳಿದರು.
ಈ ನಡೆ ಉದ್ದೇಶಪೂರ್ವಕವೇ? ಎಂಬ ಪ್ರಶ್ನೆಗೆ, “ರಾಜಕಾರಣ ಆಮೇಲೆ ಮಾತನಾಡೋಣ. ಮುಂಚಿತವಾಗಿ ತಿಳಿಸಿದ್ದರೆ ನಾವು ಹೋಗುತ್ತಿದ್ದೆವು” ಎಂದರು.
