Trending

ಕಾಲ್ತುಳಿತ ಪ್ರಕರಣ ಸಂಬಂಧ ಆರ್‌ಸಿಬಿ, ಕೆಎಸ್‌ಸಿಎ ವಿರುದ್ದ ಎಫ್‌ಐಆರ್‌?

Spread the love

ಬೆಂಗಳೂರು: ಬೆಂಗಳೂರು ಕಾಲ್ತುಳಿತ ಪ್ರಕರಣ ಸಂಬಂಧ ರಾಯಲ್‌ ಚಾಲೆಂಜರ್ಸ್‌ ಬೆಂಗಳೂರು ಹಾಗೂ ಕರ್ನಾಟಕ ರಾಜ್ಯ ಕ್ರಿಕೆಟ್‌ ಅಸೋಸಿಯೇಷನ್‌ ವಿರುದ್ಧ ಎಫ್‌ಐಆರ್‌ ದಾಖಲಿಸುವ ಬಗ್ಗೆ ಕರ್ನಾಟಕ ಸರ್ಕಾರದ  ಸಚಿವ ಸಂಪುಟ ಒಪ್ಪಿಗೆ ನೀಡಿದೆ.

ನ್ಯಾಯಮೂರ್ತಿ ಮೈಕಲ್ ಡಿ’ಕುನ್ಹಾ ಆಯೋಗ ಸಲ್ಲಿಸಿದ ಅಂತಿಮ ವರದಿಯನ್ನು ಅಂಗೀಕರಿಸಿದ ನಂತರ ಕರ್ನಾಟಕ ಸರ್ಕಾರ ಈ ನಿರ್ಧಾರವನ್ನು ತೆಗೆದುಕೊಂಡಿದೆ. ಜೂನ್‌ 3 ರಂದು ನಡೆದಿದ್ದ 2025ರ ಇಂಡಿಯನ್‌ ಪ್ರೀಮಿಯರ್‌ ಲೀಗ್‌ ಟೂರ್ನಿಯ ಫೈನಲ್‌ ಪಂದ್ಯವನ್ನು ಗೆದ್ದು ರಾಯಲ್‌ ಚಾಲೆಂಜರ್ಸ್‌ ಬೆಂಗಳೂರು ಚೊಚ್ಚಲ ಚಾಂಪಿಯನ್‌ ಆಗಿತ್ತು.

ಇದಾದ ಬಳಿಕ ಜೂನ್‌ 4 ರಂದು ಆರ್‌ಸಿಬಿ ಗೆಲುವಿನ ಸಂಭ್ರಮಾಚರಣೆಯ ವೇಳೆ ಎಂ ಚಿನ್ನಸ್ವಾಮಿ ಕ್ರೀಡಾಂಗಣದ ಹೊರಗಡೆ ಕಾಲ್ತುಳಿತ ಉಂಟಾಗಿ 11 ಮಂದಿ ಅಭಿಮಾನಿಗಳು ಮೃತಪಟ್ಟಿದ್ದರು ಹಾಗೂ 50ಕ್ಕೂ ಅಧಿಕ ಮಂದಿ ಗಾಯಗೊಂಡಿದ್ದರು. ಇದಾದ ಬಳಿಕ ಕರ್ನಾಟಕ ಸರ್ಕಾರ ಈ ಪ್ರಕರಣ ಸಂಬಂಧ ನಿವೃತ್ತ ನ್ಯಾಯಮೂರ್ತಿ ಮೈಕಲ್‌ ಡಿ ಕುನ್ಹಾ ಅವರ ಆಯೋಗವನ್ನು ನೇಮಿಸಿತ್ತು.

ಜುಲೈ 11 ರಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಸಲ್ಲಿಸಿದ ನ್ಯಾಯಾಂಗ ಆಯೋಗದ ವರದಿಯ ಪ್ರಕಾರ, ಜೂನ್ 4 ರಂದು ಚಿನ್ನಸ್ವಾಮಿ ಕ್ರೀಡಾಂಗಣದ ಹೊರಗೆ 11 ಜನರು ಸಾವನ್ನಪ್ಪಿ 50 ಕ್ಕೂ ಹೆಚ್ಚು ಜನರು ಗಾಯಗೊಂಡ ಕಾಲ್ತುಳಿತಕ್ಕೆ ಕರ್ನಾಟಕ ರಾಜ್ಯ ಕ್ರಿಕೆಟ್ ಅಸೋಸಿಯೇಷನ್‌, ರಾಯಲ್ ಚಾಲೆಂಜರ್ಸ್ ಬೆಂಗಳೂರು (ಆರ್‌ಸಿಬಿ), ಕಾರ್ಯಕ್ರಮ ಆಯೋಜಕ ಡಿಎನ್‌ಎ ಎಂಟರ್‌ಟೈನ್‌ಮೆಂಟ್ ಮತ್ತು ಬೆಂಗಳೂರು ಪೊಲೀಸರು ನೇರ ಹೊಣೆಗಾರರು ಎಂದು ತಿಳಿಸಿದೆ.

[pj-news-ticker]