Breaking
Sun. Sep 8th, 2024

ಹಾಲಿ ಸಂಸದ ಡಿವಿ ಸದಾನಂದಗೌಡಗೆ ಬಿಜೆಪಿ ಟಿಕೆಟ್ ಮಿಸ್; ಟ್ವೀಟ್ ಮೂಲಕ ವಿದಾಯ ಹೇಳಿದ ಮಾಜಿ ಸಿಎಂ

By Mooka Nayaka News Mar 13, 2024
Spread the love

ಬೆಂಗಳೂರು: ಮಾಜಿ ಮುಖ್ಯಮಂತ್ರಿ ಹಾಗೂ ಹಾಲಿ ಸಂಸದ ಡಿವಿ ಸದಾನಂದಗೌಡ ಅವರಿಗೆ ಮುಂಬರುವ ಲೋಕಸಭೆ ಚುನಾವಣೆಯಲ್ಲಿ ಸ್ಪರ್ಧಿಸಲು ಬಿಜೆಪಿ ಟಿಕೆಟ್ ನಿರಾಕರಿಸಿದ್ದು, ಟ್ವೀಟ್ ಮೂಲಕ ತಮ್ಮ ಕ್ಷೇತ್ರದ ಮತದಾರರಿಗೆ ವಿದಾಯ ಹೇಳಿದ್ದಾರೆ.

ಈ ಕುರಿತು ಎಕ್ಸ್ ನಲ್ಲಿ ಪೋಸ್ಟ್ ಮಾಡಿರುವ ಮಾಜಿ ಕೇಂದ್ರ ಸಚಿವ ಸದಾನಂದಗೌಡ ಅವರು, ಬೆಂಗಳೂರು ಉತ್ತರ ಲೋಕಸಭಾ ಕ್ಷೇತ್ರದ ನನ್ನೆಲ್ಲಾ ಪ್ರೀತಿಯ ಬಂದುಗಳೇ, ನನಗೆ ಕಳೆದ 10 ವರ್ಷಗಳ ಕಾಲ ಈ ಕ್ಷೇತ್ರದ ಸಂಸದನಾಗಿ ನಿಮ್ಮ ಕೆಲಸ ಮಾಡುವ ಅವಕಾಶ ಮಾಡಿಕೊಟ್ಟು ಆರ್ಶೀವಾದವನ್ನು ಮಾಡಿದ್ದೀರಿ ಎಂದು ಹೇಳಿದ್ದಾರೆ.

ನಾನು ನನ್ನ ಶಕ್ತಿ ಮೀರಿ ನಿಮ್ಮ ಸೇವೆಯನ್ನು ಮಾಡುವ ಪ್ರಯತ್ನ ಮಾಡಿದ್ದೇನೆ. ನಿಮ್ಮ ಆರ್ಶೀವಾದದಿಂದ ಕೇಂದ್ರದಲ್ಲಿ ನಮ್ಮೆಲ್ಲರ ಪ್ರೀತಿಯ ಪ್ರಧಾನಿ ನರೇಂದ್ರ ಮೋದಿ ಅವರ ಜೊತೆಯಲ್ಲಿ 7 ವರ್ಷಗಳ ಕಾಲ ಕ್ಯಾಬಿನೆಟ್ ಮಂತ್ರಿಯಾಗಿ ಕೆಲಸ ಮಾಡುವ ಅವಕಾಶವನ್ನು ಸಹ ಕಲ್ಪಿಸಿದ್ದೀರಿ. ನಾನು ನಿಮ್ಮೆಲ್ಲರಿಗೂ ಚಿರಋಣಿ. ನಿಮ್ಮ ಜೊತೆ ಇನ್ನು ಮುಂದೆಯೂ ಇರುತ್ತೇನೆ. ಎಲ್ಲರಿಗೂ ನನ್ನ ಅಂತರಾಳದ ಹೃದಯ ತುಂಬಿದ ಧನ್ಯವಾದಗಳು ಎಂದು ಸದಾನಂದಗೌಡ ಅವರು ಎಕ್ಸ್ ನಲ್ಲಿ ಪೋಸ್ಟ್ ಮಾಡಿದ್ದಾರೆ.

ಈ ಬಾರಿ ಟಿಕೆಟ್ ನೀಡದಿರುವ ಬಗ್ಗೆ ಬಿಜೆಪಿ ಹೈಕಮಾಂಡ್ ದೂರವಾಣಿ ಮೂಲಕ ಡಿವಿ ಸದಾನಂದಗೌಡ ಅವರಿಗೆ ಮಾಹಿತಿ ನೀಡಿದೆ ಎನ್ನಲಾಗಿದ್ದು, ಈ ಹಿನ್ನೆಲೆಯಲ್ಲಿ ಅವರು ಟ್ವೀಟ್ ಮೂಲಕ ವಿದಾಯ ಹೇಳಿದ್ದಾರೆ ಎಂದು ಮೂಲಗಳು ತಿಳಿಸಿವೆ.

ಈ ಮಧ್ಯೆ ಬಿಜೆಪಿ ಟಿಕೆಟ್ ನಿರಾಕರಿಸಿದ ಹಿನ್ನೆಲೆಯಲ್ಲಿ ಡಿವಿ ಸದಾನಂದಗೌಡ ಅವರು ಕಾಂಗ್ರೆಸ್ ಸೇರುತ್ತಾರೆ ಎಂಬ ವರದಿಗಳ ಬಗ್ಗೆ ಪ್ರತಿಕ್ರಿಯಿಸಿದ ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್‌ ಅವರು, ಮೂವರು ಹಾಲಿ ಸಂಸದರು ನಮ್ಮ ಸಂಪರ್ಕದಲ್ಲಿದ್ದು, ಕಾಂಗ್ರೆಸ್‌ ಪಕ್ಷಕ್ಕೆ ಬರುವುದರ ಬಗ್ಗೆ ಮಾತನಾಡಿದ್ದಾರೆ ಎಂದು ಸ್ಫೋಟಕ ಹೇಳಿಕೆ ನೀಡಿದ್ದಾರೆ.

Related Post