ಶಿವಮೊಗ್ಗ : ಕೆಳದಿ ಶಿವಪ್ಪ ನಾಯಕ ಕೃಷಿ ಮತ್ತು ತೋಟಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯವು ಸಹಕಾರ ಕೃಷಿಯಿಂದ ಸುಸ್ಥಿರ ಕೃಷಿ ಎಂಬ ಘೋಷವಾಕ್ಯದಡಿ ನವೆಂಬರ್07ರಿಂದ 10ರವರೆಗೆ ನವುಲೆಯ ಕೃಷಿ ವಿವಿ ಆವರಣದಲ್ಲಿ ಕೃಷಿ ಮತ್ತು ತೋಟಗಾರಿಕೆ ಮೇಳವನ್ನು ಆಯೋಜಿಸಲಾಗಿದೆ ಎಂದು ವಿಶ್ವವಿದ್ಯಾನಿಲಯದ ಕುಲಪತಿ ಡಾ.ಆರ್.ಸಿ.ಜಗದೀಶ್ ಅವರು ಹೇಳಿದರು.
ಅವರು ಇಂದು ಕೃಷಿ ವಿವಿ ಸಭಾಂಗಣದಲ್ಲಿ ಏರ್ಪಡಿಸಲಾಗಿದ್ದ ಪತ್ರಿಕಾಗೋಷ್ಟಿಯಲ್ಲಿ ವಿವರ ನೀಡಿ ಮಾತನಾಡುತ್ತಿದ್ದರು. ಈ ಮೇಳದಲ್ಲಿ, ಕೃಷಿಮತ್ತು ತೋಟಗಾರಿಕೆ ವಸ್ತು ಪ್ರದರ್ಶನ ವಿವಿಧ ಕೃಷಿ ಮತ್ತು ತೋಟಗಾರಿಕಾ ಬೆಳೆಗಳ ಪ್ರಾತ್ಯಕ್ಷಿಕೆಗಳು, ಕೃಷಿ ಯಂತ್ರೋಪಕರಣಗಳ ಪ್ರದರ್ಶನ, ಕೃಷಿ ಪರಿಕರಗಳ ಉತ್ಪಾದನಾ ಘಟಕಗಳು, ವಿಜ್ಞಾನಿಗಳ-ರೈತರೊಂದಿಗೆ ಸಂವಾದ ಕಾರ್ಯಕ್ರಮಗಳು ಮತ್ತು ವಿಚಾರ ಗೋಷ್ಠಿಗಳನ್ನೂ ಸಹ ಏರ್ಪಡಿಸಲಾಗುವುದು ಎಂದವರು ನುಡಿದರು.
ಈ ಮೇಳದಲ್ಲಿ ಪ್ರಮುಖ ಕೃಷಿ ಮತ್ತು ತೋಟಗಾರಿಕಾ ಬೆಳೆಗಳು, ಸಸಿಗಳು ಮತ್ತು ತಳಿಗಳ ಪ್ರದರ್ಶನ ಮತ್ತು ಮಾರಾಟದ ಜೊತೆಗೆ ತಂತ್ರಜ್ಞಾನ ಉದ್ಯಾನವನ, ಸಮಗ್ರ ಕೃಷಿ ಪದ್ಧತಿ, ಸಂರಕ್ಷಿತ ಕೃಷಿ, ದ್ವಿದಳ ಧಾನ್ಯ ತಳಿ ಪ್ರಾತ್ಯಕ್ಷಿಕೆ, ಸಿರಿಧಾನ್ಯಗಳ ಮಹತ್ವ ಕೃಷಿ ಮತ್ತು ತೋಟಗಾರಿಕೆ-ಅರಣ್ಯ-ಸಮಗ್ರ ಪದ್ಧತಿಗಳು ಕೃಷಿ ಮತ್ತು ತೋಟಗಾರಿಕಾ ವಸ್ತುಪ್ರದರ್ಶನ, ವಿವಿಧ ಕೃಷಿ ಮತ್ತು ತೋಟಗಾರಿಕಾ ಬೆಳೆಗಳ ಪ್ರಾತ್ಯಕ್ಷಿಕೆಗಳು, ಕೃಷಿ ಯಂತ್ರೋಪಕರಣಗಳ ಪ್ರದರ್ಶನ, ಜೈವಿಕ ಪರಿಕರಗಳ ಪ್ರದರ್ಶನ, ರೈತ – ವಿಜ್ಞಾನಿ ಸಂವಾದ ಮತ್ತು ವಿಚಾರ ಗೋಷ್ಠಿಯನ್ನು ಏರ್ಪಡಿಸಲಾಗಿರುತ್ತದೆ, ಅಲ್ಲದೇ, ಸಿರಿಧಾನ್ಯಗಳ ಮೌಲ್ಯವರ್ಧನೆಗಾಗಿ ಹೆಚ್ಚು ಒತ್ತು ಕೊಟ್ಟು ರೈತರ ಮನಮುಟ್ಟಿಸುವ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ ಎಂದವರು ತಿಳಿಸಿದರು.
ಈ ವರ್ಷವೂ ಸಹ ಕೃಷಿ-ತೋಟಗಾರಿಕೆ ಕ್ಷೇತ್ರದ ವಿವಿಧ ವಿಭಾಗಗಳಲ್ಲಿ ಗಣನೀಯ ಸಾಧನೆಗೈದ ಜಿಲ್ಲಾ ಮಟ್ಟದ ಪ್ರಗತಿಪರ ಶ್ರೇಷ್ಠ ರೈತ ಮತ್ತು ರೈತ ಮಹಿಳೆಯರನ್ನು ಗುರುತಿಸಿ ಗೌರವಿಸಲಾಗುತ್ತಿದೆ. ವಿವಿಧ ವಿಸ್ತರಣೆ ಚಟುವಟಿಕೆಗಳ ಮೂಲಕ 4 ಲಕ್ಷ ರೈತರಿಗೆ ಈವರೆಗೆ ವಿಶ್ವವಿದ್ಯಾಲಯದ ವ್ಯಾಪ್ತಿಯಲ್ಲಿನ 7 ಜಿಲ್ಲೆಗಳಲ್ಲಿ ತಾಂತ್ರಿಕ ಮಾಹಿತಿಯನ್ನು ಒದಗಿಸಲಾಗುತ್ತಿದೆ ಎಂದರು.
ಈ ಮೇಳವನ್ನು ನವೆಂಬರ್07ರಂದು ರಾಜ್ಯ ಕೃಷಿ ಸಚಿವ ಎನ್. ಚಲುವರಾಯಸ್ವಾಮಿಯವರು ಉದ್ಘಾಟಿಸುವರು. ಈ ಸಂದರ್ಭದಲ್ಲಿ ರಾಜ್ಯ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎಸ್.ಮಧು ಬಂಗಾರಪ್ಪ ಅವರು ತಾಂತ್ರಿಕ ಕೈಪಿಡಿಗಳ ಬಿಡುಗಡೆಗೊಳಿಸುವರು. ರಾಜ್ಯ ಗಣಿ, ಭೂ ವಿಜ್ಞಾನ ಮತುತರ ತೋಟಗಾರಿಕೆ ಸಚಿವ ಎಸ್.ಎಸ್.ಮಲ್ಲಿಕಾರ್ಜುನ ಅವರು ತಂತ್ರಜ್ಞಾನ ಉದ್ಯಾನವನ ಉದ್ಘಾಟಿಸುವರು.
ಕರ್ನಾಟಕ ಗ್ರಾಮೀಣ ಮೂಲಭೂತ ಸೌಕರ್ಯಗಳ ಅಭಿವೃದ್ಧಿ ನಿಗಮದ ಅಧ್ಯಕ್ಷ ಹಾಗೂ ಶಾಸಕ ಬಿ.ಕೆ.ಸಂಗಮೇಶ್, ಕರ್ನಾಟಕ ರಾಜ್ಯ ಅರಣ್ಯ ಕೈಗಾರಿಕಾ ನಿಗಮದ ಅಧ್ಯಕ್ಷ ಹಾಗೂ ಶಾಸಕ ಗೋಪಾಲಕೃಷ್ಣ ಬೇಳೂರು ಅವರು ಉಪಸ್ಥಿತರಿರುವರು. ಶಾಸಕಿ ಶ್ರೀಮತಿ ಶಾರದಾ ಪೂರ್ಯಾನಾಯ್ಕ್ ಅಧ್ಯಕ್ಷತೆ ವಹಿಸುವರು. ಸಂಸದ ಬಿ.ವೈ.ರಾಘವೇಂದ್ರ ಸೇರಿದಂತೆ ಜಿಲ್ಲೆಯ ಎಲ್ಲಾ ವಿಧಾನ ಪರಿಷತ್ ಮತ್ತು ವಿಧಾನಸಭಾ ಕ್ಷೇತ್ರಗಳ ಶಾಸಕರು, ನಿಗಮ-ಮಂಡಳಿಗಳ ಅಧ್ಯಕ್ಷರು, ಪದಾಧಿಕಾರಿಗಳು, ಅಧಿಕಾರಿಗಳು ಹಾಗೂ ಗಣ್ಯರುಗಳು ಭಾಗವಹಿಸಲಿರುವರು.
ಪತ್ರಿಕಾಗೋಷ್ಠಿಯಲ್ಲಿ ವಿವಿಯ ಗ್ರಂಥಪಾಲಕ ಬಿ.ಕೆ.ಶಿವಣ್ಣ, ವಿಸ್ತರಣಾಧಿಕಾರಿ ಡಾ|| ಗಿರಿಜೇಶ್, ಡಾ|| ದುಶ್ಯಂತಕುಮಾರ್, ಡಾ|| ಹೇಮ್ಲಾನಾಯ್ಕ್, ಮತ್ತಿತರರು ಉಪಸ್ಥಿತರಿದ್ದರು.
