ಕಲಬುರಗಿ : ಜಿಲ್ಲೆಯ ಜೇವರ್ಗಿ ಬಳಿ ನಡೆದ ಭೀಕರ ಕಾರು ಅಪಘಾತದಲ್ಲಿ ಹಿರಿಯ ಐಎಎಸ್ ಅಧಿಕಾರಿ, ಕರ್ನಾಟಕ ರಾಜ್ಯ ಖನಿಜ ಅಭಿವೃದ್ಧಿ ನಿಗಮ ಎಂಡಿ ಮಹಾಂತೇಶ್ ಬೀಳಗಿ ಸೇರಿ ಮೂವರು ಮೃತಪಟ್ಟಿದ್ದಾರೆ.
ವಿಜಯಪುರದಿಂದ ಕಲಬುರಗಿಗೆ ತೆರಳುತ್ತಿದ್ದ ವೇಳೆ ಜೇವರ್ಗಿ ತಾಲೂಕಿನ ಗೌನಳ್ಳಿ ಕ್ರಾಸ್ ಬಳಿ ಮಂಗಳವಾರ ಕಾರು ಅಪಘಾತಕ್ಕೀಡಾಗಿದೆ. ರಸ್ತೆಯಲ್ಲಿ ಅಡ್ಡಬಂದ ನಾಯಿ ತಪ್ಪಿಸಲು ಹೋಗಿ ಚಾಲಕನ ನಿಯಂತ್ರಣ ತಪ್ಪಿ ಇನ್ನೋವಾ ಕಾರು ಪಲ್ಟಿಯಾಗಿ ದುರಂತ ಸಂಭವಿಸಿದೆ ಎಂದು ತಿಳಿದುಬಂದಿದೆ.
ಕಾರಿನಲ್ಲಿ ಮಹಾಂತೇಶ್ ಬೀಳಗಿ ಸೇರಿದಂತೆ ಐದು ಜನ ತೆರಳುತ್ತಿದ್ದಾಗ, ಜೇವರ್ಗಿ ತಾಲೂಕಿನ ಗೌನಹಳ್ಳಿ ಕ್ರಾಸ್ ಬಳಿ ನಾಯಿ ಅಡ್ಡಬಂದಿದೆ. ಅದನ್ನು ಉಳಿಸಲು ಹೋಗಿ ಚಾಲಕನ ನಿಯಂತ್ರಣ ತಪ್ಪಿ ಕಾರು ರಸ್ತೆ ಪಕ್ಕಕ್ಕೆ ಹೋಗಿ ಪಲ್ಟಿಯಾಗಿದೆ. ಇದರಿಂದ ಗಂಭೀರವಾಗಿ ಗಾಯಗೊಂಡು ಮಹಾಂತೇಶ್ ಬೀಳಗಿ, ಅವರ ಸೋದರ ಶಂಕರ ಬೀಳಗಿ ಹಾಗೂ ಈರಣ್ಣ ಶಿರಸಂಗಿ ಮೃತಪಟ್ಟಿದ್ದಾರೆ.
ಮಹಾಂತೇಶ್ ಬೀಳಗಿ ಅವರು ಹಿರಿಯ ಐಎಎಸ್ ಅಧಿಕಾರಿಯಾಗಿದ್ದರು. ದಾವಣಗೆರೆ, ಉಡುಪಿ ಸೇರಿದಂತೆ ಕರ್ನಾಟಕದ ಬೇರೆ ಬೇರೆ ಜಿಲ್ಲೆಗಳಲ್ಲಿ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಹಾಗೂ ಜಿಲ್ಲಾಧಿಕಾರಿಯಾಗಿ ಕಾರ್ಯನಿರ್ವಹಿಸಿದ್ದರು. ಈ ಹಿಂದೆ ಬೆಸ್ಕಾಂ ವ್ಯವಸ್ಥಾಪಕ ನಿರ್ದೇಶಕರಾಗಿದ್ದ ಮಹಾಂತೇಶ್ ಬೀಳಗಿ ಅವರನ್ನು ಜನವರಿಯಲ್ಲಿ ಕರ್ನಾಟಕ ರಾಜ್ಯ ಖನಿಜ ಅಭಿವೃದ್ಧಿ ನಿಗಮ ಎಂಡಿಯಾಗಿ ವರ್ಗಾವಣೆ ಮಾಡಲಾಗಿತ್ತು.
1974ರ ಮಾರ್ಚ್ 27ರಂದು ಜನಿಸಿದ್ದ ಮಹಾಂತೇಶ್ ಬೀಳಗಿ ಅವರು 2012ರ ಕರ್ನಾಟಕ ಕೇಡರ್ನ IAS ಅಧಿಕಾರಿಯಾಗಿದ್ದಾರೆ. ಪ್ರಸ್ತುತ ಅವರು ಕರ್ನಾಟಕ ರಾಜ್ಯ ಖನಿಜ ನಿಗಮದ ವ್ಯವಸ್ಥಾಪಕ ನಿರ್ದೇಶಕರಾಗಿ ಕಾರ್ಯನಿರ್ವಹಿಸುತ್ತಿದ್ದರು.
