ಭದ್ರಾವತಿ : ಶಿವಮೊಗ್ಗ ಜಿಲ್ಲೆಯ ಭದ್ರಾವತಿ ತಾಲ್ಲೂಕಿನಲ್ಲಿ ಗಂಡನ ಮನೆಯವರ ಕಿರುಕುಳ ಆರೋಪದ ಹಿನ್ನೆಲೆ ಗೃಹಿಣಿಯೊಬ್ಬರು ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿರುವ ದುರ್ಘಟನೆ ನಡೆದಿದೆ.
ಭದ್ರಾವತಿಯ ಸಾದತ್ ಕಾಲೋನಿಯ ನಿವಾಸಿ ಆಯಿಷಾ (23) ಮೃತರು. ನಾಲ್ಕು ವರ್ಷಗಳ ಹಿಂದೆ ಸಯ್ಯದ್ ಸಲೀಮ್ ಅವರೊಂದಿಗೆ ವಿವಾಹವಾಗಿದ್ದ ಆಯಿಷಾ, ನಂತರದ ದಿನಗಳಲ್ಲಿ ಕೌಟುಂಬಿಕ ಕಲಹ ಎದುರಿಸುತ್ತಿದ್ದರೆಂದು ತಿಳಿದುಬಂದಿದೆ. ಇದೇ ಕಾರಣದಿಂದ ಆತ್ಮಹತ್ಯೆಗೆ ಶರಣಾಗಿದ್ದಾರೆ ಎನ್ನಲಾಗಿದೆ.
ಮೂರು ದಿನಗಳ ಹಿಂದೆ ಹೊಟ್ಟೆನೋವು ಎಂದು ಭದ್ರಾವತಿ ಸಾರ್ವಜನಿಕ ಆಸ್ಪತ್ರೆಗೆ ದಾಖಲಾಗಿದ್ದ ಆಯಿಷಾ, ವಿಷ ಸೇವಿಸಿದ್ದಾಗಿ ತಿಳಿದುಬಂದ ತಕ್ಷಣ ಮೆಗ್ಗಾನ್ ಆಸ್ಪತ್ರೆಗೆ ರವಾನಿಸಲ್ಪಟ್ಟಿದ್ದರು. ಆದರೆ ಇಂದು ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಈ ಸಂಬಂಧ ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.
