ಶಿವಮೊಗ್ಗ: ಶಿವಮೊಗ್ಗ ಗ್ರಾಮಾಂತರದ ಕುಂಸಿ ಸಮೀಪದ ಬಾಳೆಕೊಪ್ಪದ ಜಮೀನಿನಲ್ಲಿ ಕಾಡುಹಂದಿಯನ್ನು ಬೇಟೆಯಾಡಿ ಮಾಂಸ ಮಾಡುತ್ತಿದ್ದ ತಂಡದ ಮೇಲೆ ಆಯನೂರು ವಲಯ ಅರಣ್ಯಾಧಿಕಾರಿಗಳು ದಾಳಿ ನಡೆಸಿ ಓರ್ವ ಆರೋಪಿಯನ್ನು ಬಂಧಿಸಿದ್ದಾರೆ. ಕಾರ್ಯಾಚರಣೆಯಲ್ಲಿ ಸುಮಾರು 64 ಕೆಜಿ ತೂಕದ ಕಾಡುಹಂದಿ ಮಾಂಸವನ್ನು ವಶಪಡಿಸಿಕೊಳ್ಳಲಾಗಿದೆ.
ಬಾಳೆಕೊಪ್ಪದ ನಿವಾಸಿಗಳಾದ ಕೃಷ್ಣ (35), ಶಿವು (25), ಹುಚ್ಚರಾಯ (35) ಹಾಗೂ ಕಪಿಲ್ ಅಲಿಯಾಸ್ ರವಿ (35) ಎಂಬವರು ಸೋಮವಾರ ಮಧ್ಯಾಹ್ನ ಜಮೀನಿನಲ್ಲಿ ಅಕ್ರಮವಾಗಿ ಕಾಡುಹಂದಿಯನ್ನು ಬೇಟೆಯಾಡಿ ಮಾಂಸ ಮಾಡುತ್ತಿದ್ದರೆಂದು ಆರೋಪಿಸಲಾಗಿದೆ.
ಖಚಿತ ಮಾಹಿತಿ ಮೇರೆಗೆ ದಾಳಿ ನಡೆಸಿದ ಅರಣ್ಯ ಇಲಾಖೆ ತಂಡವು ಕೃಷ್ಣ ಎಂಬಾತನನ್ನು ರೆಡ್ಹ್ಯಾಂಡ್ ಆಗಿ ಬಂಧಿಸುವಲ್ಲಿ ಯಶಸ್ವಿಯಾಗಿದೆ. ಉಳಿದ ಮೂವರು ಆರೋಪಿಗಳು ಸ್ಥಳದಿಂದ ಪರಾರಿಯಾಗಿದ್ದು, ಅವರ ಬಂಧನಕ್ಕಾಗಿ ಶೋಧ ಕಾರ್ಯ ಮುಂದುವರಿದಿದೆ.
ಬಂಧಿತ ಆರೋಪಿಯಿಂದ ಅಕ್ರಮವಾಗಿ ಸಂಗ್ರಹಿಸಿದ್ದ 64 ಕೆಜಿ ಕಾಡುಹಂದಿ ಮಾಂಸವನ್ನು ಜಪ್ತಿ ಮಾಡಲಾಗಿದ್ದು, ಆರೋಪಿಯನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ. ಪ್ರಕರಣದ ಕುರಿತು ಅರಣ್ಯ ಇಲಾಖೆ ಮುಂದಿನ ತನಿಖೆ ಕೈಗೊಂಡಿದೆ.
