Trending

ಭದ್ರಾವತಿ: ಸರ್ಕಾರಿ ಶಾಲೆಗಳ ಉಳಿವಿಗೆ ಶಾಲಾ ಹಬ್ಬದ ಆಚರಣೆ ಅನಿವಾರ್ಯ : ವಾಣಿಜ್ಯ ತೆರಿಗೆ ಇಲಾಖೆ ಆಯುಕ್ತ ಎನ್ ಕೆ ಅಶೋಕ್

Spread the love

ಭದ್ರಾವತಿ: ಸರ್ಕಾರಿ ಶಾಲೆಗಳ ಉಳಿವಿಗೆ ಶಾಲಾ ಹಬ್ಬದ ಆಚರಣೆ ಅನಿವಾರ್ಯ ವಾಗಿದೆ ಎಂದು ಶಿವಮೊಗ್ಗ ಜಿಲ್ಲಾ ವಾಣಿಜ್ಯ ತೆರಿಗೆ ಇಲಾಖೆ ಆಯುಕ್ತ ಎನ್ ಕೆ ಅಶೋಕ್ ಅಭಿಪ್ರಾಯ ಪಟ್ಟರು.

ಅವರು ಮಂಗಳವಾರ ತಾಲ್ಲೂಕಿನ ಯರೇಹಳ್ಳಿ ಗ್ರಾಮದ ಉನ್ನತೀಕರಿಸಿದ ಸರ್ಕಾರಿ ಶಾಲೆಯ ಶಾಲಾ ಹಬ್ಬವನ್ನು ಉದ್ಘಾಟಿಸಿ ಮಾತನಾಡಿದರು.

ಗುಣಮಟ್ಟದ ಶಿಕ್ಷಣ ಸರ್ಕಾರಿ ಶಾಲೆಗಳಲ್ಲಿ ಸಾಧ್ಯವಾಗುತ್ತಿದ್ದು, ಯರೇಹಳ್ಳಿ ಶಾಲೆ ಈ ನಿಟ್ಟಿನಲ್ಲಿ ಸಾಕಷ್ಟು ಸಾಧಿಸಿ ಮುನ್ನಡೆಯುತ್ತಿರುವುದು ಹೆಮ್ಮೆಯ ವಿಷಯ ಎಂದು ಹೇಳಿ ಶಾಲಾ ಎಸ್ ಡಿ ಎಂ ಸಿ ಹಾಗೂ ಶಿಕ್ಷಕರನ್ನು ಅಭಿನಂದಿಸಿದರು.

ಕೆ ಆರ್ ಐ ಡಿ ಎಲ್ ಅಧ್ಯಕ್ಷರು ಹಾಗೂ ಶಾಸಕರಾದ ಬಿ.ಕೆ ಸಂಗಮೇಶ್ವರ್ ಮಾತನಾಡಿ ಪೋಷಕರು ಖಾಸಗಿ ಶಾಲೆಗಳ ಮೇಲಿನ ವ್ಯಾಮೋಹವನ್ನು ಬಿಟ್ಟು ತಮ್ಮ ಮಕ್ಕಳನ್ನು ಸರ್ಕಾರಿ ಶಾಲೆಗೆ ದಾಖಲಿಸುವ ಮೂಲಕ ಸರ್ಕಾರಿ ಶಾಲೆಗಳ ಉಳಿವಿಗೆ ಮುಂದಾಗಬೇಕು ಎಂದು ಕಿವಿ ಮಾತು ಹೇಳಿದರು.

ಪಂಚ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ತಾಲ್ಲೂಕು ಅಧ್ಯಕ್ಷ ಬಿ.ಎಸ್ ಗಣೇಶ್ ಸರ್ಕಾರಿ ಶಾಲೆಗಳ ಅಭಿವೃದ್ಧಿಗೆ ಸರ್ಕಾರ ಅನೇಕ ಯೋಜನೆಗಳನ್ನು ಜಾರಿಗೆ ತಂದಿದ್ದು ಸರ್ಕಾರಿ ಶಾಲೆಗೆ ಮಕ್ಕಳನ್ನು ಸೇರಿಸಿ, ಸೌಲಭ್ಯಗಳನ್ನು ಸದುಪಯೋಗಪಡಿಸಿಕೊಳ್ಳಬೇಕೆಂದು ಕರೆ ನೀಡಿದರು.

ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಗಂಗಾನಾಯ್ಕ್ ಗೊಂದಿ ಮಾತನಾಡಿ, ಪ್ರಸ್ತುತ ದಿನಗಳಲ್ಲಿ ಶಿಕ್ಷಣದ ವ್ಯವಸ್ಥೆಯಲ್ಲಿ ಒಂದು ಆಪತ್ತು ಬದಲಾವಣೆಗೆ ಕಾರಣವಾಗುತ್ತಿದೆ. ಬಹುತೇಕ ಶಿಕ್ಷಣ ವ್ಯವಸ್ಥೆ ಖಾಸಗಿಕರಣವಾಗಲೂ ತುದಿಗಾಲಲ್ಲಿದೆ. ಆದ್ದರಿಂದ ಖಾಸಗಿಕರಣ ತಪ್ಪಿಸಬೇಕೆಂದರೆ ಸರ್ಕಾರಿ ಶಾಲೆಗಳ ಉನ್ನತಿಕರಣ ಹಾಗೂ ಸರ್ಕಾರಿ ಶಾಲೆಗಳಲ್ಲಿ ಗುಣಮಟ್ಟದ ಶಿಕ್ಷಣವನ್ನು ಕಾಪಾಡಿಕೊಳ್ಳಬೇಕೆಂಬ ಬಹುದೊಡ್ಡ ಬೇಡಿಕೆ, ಆಶಯ ಸರ್ವರಲ್ಲೂ ಇದೆ.

ಈಗಾಗಲೇ ಶಿಕ್ಷಣ ಖಾಸಗಿಕರಣಗೊಂಡು ವ್ಯಾಪಾರಿಕರಣವಾಗಿದೆ. ಇಂದಿನ ದಿನಗಳಲ್ಲಿ ಶಿಕ್ಷಣ ಅತ್ಯಂತ ದುಬಾರಿಯಾಗಿದೆ. ಪೋಷಕರು ತಮ್ಮ ಮಕ್ಕಳನ್ನು ಸರ್ಕಾರಿ ಶಾಲೆಗೆ ಸೇರಿಸದಿದ್ದರೆ ಸರ್ಕಾರಿ ಶಾಲೆಗಳು ಮುಂದಿನ ದಿನಗಳಲ್ಲಿ ಉಳಿಯುವುದಿಲ್ಲ. ಆದ್ದರಿಂದ ಪೋಷಕರು ಈಗಲೇ ಜಾಗೃತರಾಗಿ ತಮ್ಮ ಮಕ್ಕಳನ್ನು ಸರ್ಕಾರಿ ಶಾಲೆಗೆ ದಾಖಲಿಸಿ ಸರ್ಕಾರಿ ಶಾಲೆಗಳ ಉಳಿವಿಗೆ ಸಹಕರಿಸಬೇಕೆಂದು ಕರೆ ನೀಡಿದರು.

ಈ ಶಾಲಾ ಹಬ್ಬದಲ್ಲಿ, ಗ್ರಾಮ ಪಂಚಾಯತ್ ಅಧ್ಯಕ್ಷೆ ಶ್ರೀಮತಿ ಮಾಲತಿ ಶ್ರೀನಿವಾಸ್, ಸದಸ್ಯರಾದ ಚಂದ್ರಶೇಖರ್, ಶ್ರೀಮತಿ ಸಂಗಮ್ಮ, ಕ್ಷೇತ್ರ ಶಿಕ್ಷಣಾಧಿಕಾರಿ ಎ.ಕೆ ನಾಗೇಂದ್ರಪ್ಪ, ಕ್ಷೇತ್ರ ಸಮನ್ವಯಾಧಿಕಾರಿ ಪಂಚಾಕ್ಷರಿ, ಕೆಪಿಸಿಸಿ ರಾಜ್ಯ ಸಂಚಾಲಕ ಎಸ್.ಮಂಜುನಾಥ್, ಲಯನ್ಸ್ ಕ್ಲಬ್ ಅಧ್ಯಕ್ಷ ನಾಗರಾಜ್ ಶೇಟ್, ಗ್ರಾಮದ ಮುಖಂಡರಾದ ಸತೀಶ್ ಜಿ.ಎನ್, ಎಸ್ ಡಿ ಎಂ ಸಿ ಉಪಾಧ್ಯಕ್ಷೆ ಶೋಭಾ ಮತ್ತು ಎಲ್ಲಾ ಸದಸ್ಯರು, ಗ್ರಂಥ ಪಾಲಕಿ ಮಾಲಾ, ಅಂಗನವಾಡಿ ಮೇಲ್ವಿಚಾರಕಿ ಪುಟ್ಟಲಕ್ಷ್ಮಮ್ಮ, ಎಸ್ ಡಿ ಎಂ ಸಿ ನಿಕಟ ಪೂರ್ವ ಅಧ್ಯಕ್ಷ ಕೃಷ್ಣಮೂರ್ತಿ, ಹಿರಿಯರಾದ ಬಸವರಾಜ್ ಉಪಸ್ಥಿತರಿದ್ದರು.

ಶಾಲೆಯ ಎಸ್ ಡಿ ಎಂ ಸಿ ಅಧ್ಯಕ್ಷ ಲೋಕೇಶ್ ಸಮಾರಂಭದ ಅಧ್ಯಕ್ಷತೆ ವಹಿಸಿದ್ದರು. ಶಾಲಾ ಶಿಕ್ಷಕ ವೃಂದದವರು, ಗ್ರಾಮಸ್ಥರು, ಶಾಲಾ ಅಭಿಮಾನಿಗಳು ಹಾಗೂ ಮಕ್ಕಳು ಸೇರಿದಂತೆ ಸಹಸ್ರಾರು ಜನರು ಸೇರಿ ಶಾಲಾ ಸಂಭ್ರಮಕ್ಕೆ ಸಾಕ್ಷಿಯಾಗಿದ್ದರು.

ಆಟೋಟ ಸ್ಪರ್ಧೆಗಳಲ್ಲಿ ಗೆದ್ದ ಮಕ್ಕಳು ಮತ್ತು ಪೋಷಕರಿಗೆ ಬಹುಮಾನ ವಿತರಿಸಲಾಯಿತು. ಶಿಕ್ಷಕಿ ಸುಮಾ ಸ್ವಾಗತಿಸಿ, ವಾಣಿಶ್ರೀ ವಂದಿಸಿದರು. ಮುಖ್ಯ ಶಿಕ್ಷಕ ತಿಪ್ಪೇಸ್ವಾಮಿ ನಿರೂಪಿಸಿದರು.

[pj-news-ticker]