Trending

ಶಿವಮೊಗ್ಗ: ಹಸಿವುಮುಕ್ತ ಕರ್ನಾಟಕ ನಿರ್ಮಾಣಕ್ಕೆ ಇಂದಿರಾ ಕ್ಯಾಂಟೀನ್‌ಗಳು ಪ್ರಮುಖ ಪಾತ್ರ ವಹಿಸುತ್ತಿವೆ – ಸಚಿವ ಎಸ್. ಮಧು ಬಂಗಾರಪ್ಪ

Spread the love

ಶಿವಮೊಗ್ಗ: ಹಸಿವುಮುಕ್ತ ಕರ್ನಾಟಕ ನಿರ್ಮಾಣ, ಬಡವರು ಹಾಗೂ ಮಧ್ಯಮ ವರ್ಗದವರಿಗೆ ಕೈಗೆಟುಕುವ ದರದಲ್ಲಿ ಆಹಾರ ಒದಗಿಸುವ ಉದ್ದೇಶದಿಂದ ಆಡಳಿತಾರೂಢ ಸರ್ಕಾರ ಮಹತ್ವಾಕಾಂಕ್ಷಿ ಯೋಜನೆಗಳಲ್ಲೊಂದಾದ ಇಂದಿರಾ ಕ್ಯಾಂಟೀನ್ ವ್ಯವಸ್ಥೆಯನ್ನು ರೂಪಿಸಿ ಯಶಸ್ವಿಯಾಗಿ ಅನುಷ್ಟಾನಗೊಳಿಸಿದೆ. ಈ ಯೋಜನೆಯಡಿ ದಿನನಿತ್ಯ ಸಹಸ್ರಾರು ಸಂಖ್ಯೆಯ ಜನಸಾಮಾನ್ಯರಿಗೆ ಅತಿ ಕಡಿಮೆ ದರದಲ್ಲಿ ಗುಣಮಟ್ಟದ ಆಹಾರ ಒದಗಿಸಲಾಗುತ್ತಿದೆ ಎಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಸಚಿವ ಎಸ್. ಮಧು ಬಂಗಾರಪ್ಪ ಹೇಳಿದರು.

ಅವರು ಇಂದು ಶಿವಮೊಗ್ಗ ನಗರದ ವಿದ್ಯಾನಗರ ಹಾಗೂ ಗುತ್ಯಪ್ಪ ಕಾಲೋನಿಗಳಲ್ಲಿ ನೂತನವಾಗಿ ಆರಂಭಿಸಲಾದ ಇಂದಿರಾ ಕ್ಯಾಂಟೀನ್‌ಗಳನ್ನು ಲೋಕಾರ್ಪಣೆಗೊಳಿಸಿದ ಬಳಿಕ ಏರ್ಪಡಿಸಿದ್ದ ಸರಳ ಸಮಾರಂಭವನ್ನು ಉದ್ಘಾಟಿಸಿ ಮಾತನಾಡಿದರು.

ಇಂದಿರಾ ಕ್ಯಾಂಟೀನ್ ಯೋಜನೆ ಮಾದರಿ ಯೋಜನೆಯಾಗಿದ್ದು, ಇತ್ತೀಚೆಗೆ ಮತ್ತಷ್ಟು ಹೊಸ ಕ್ಯಾಂಟೀನ್‌ಗಳನ್ನು ಆರಂಭಿಸಲು ಸರ್ಕಾರ ಮಂಜೂರಾತಿ ನೀಡಿದೆ ಎಂದರು.

ಈಗಾಗಲೇ ಜಿಲ್ಲೆಯಲ್ಲಿ 12 ಇಂದಿರಾ ಕ್ಯಾಂಟೀನ್‌ಗಳು ಸಾರ್ವಜನಿಕ ಸೇವೆಗೆ ಮುಕ್ತವಾಗಿವೆ. ಮುಂದಿನ ದಿನಗಳಲ್ಲಿ ಹೊಳೆಹೊನ್ನೂರು, ಶಿಕಾರಿಪುರ ಹಾಗೂ ಆನವಟ್ಟಿ ಕೇಂದ್ರಗಳಲ್ಲಿಯೂ ಶೀಘ್ರದಲ್ಲೇ ಇಂದಿರಾ ಕ್ಯಾಂಟೀನ್‌ಗಳನ್ನು ಆರಂಭಿಸಲು ದಿನಾಂಕ ನಿಗದಿಪಡಿಸಲಾಗುವುದು ಎಂದು ತಿಳಿಸಿದರು.

ಅಲ್ಲದೇ ನಗರದಲ್ಲಿನ ಜನನಿಬಿಡ ಪ್ರದೇಶಗಳನ್ನು ಗುರುತಿಸಿ, ವಿಳಂಬಕ್ಕೆ ಅವಕಾಶ ನೀಡದೇ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಿದಲ್ಲಿ ಹಂತ ಹಂತವಾಗಿ ಹೊಸ ಕ್ಯಾಂಟೀನ್‌ಗಳನ್ನು ಆರಂಭಿಸಲು ವಿಶೇಷ ಗಮನಹರಿಸಲಾಗುವುದು ಎಂದರು.

ಕಾರ್ಯಕ್ರಮದಲ್ಲಿ ಮಾತನಾಡಿದ ವಿಧಾನಪರಿಷತ್ ಸದಸ್ಯೆ ಬಲ್ಕೀಸ್ ಬಾನು, ಸಮಾಜದಲ್ಲಿ ಯಾರೊಬ್ಬರೂ ಹಸಿವಿನಿಂದ ಬಳಲಬಾರದು ಎಂಬ ಉದ್ದೇಶದಿಂದ ಮಾನ್ಯ ಮುಖ್ಯಮಂತ್ರಿಗಳು ಕಾರ್ಮಿಕರು ಹಾಗೂ ವಿದ್ಯಾರ್ಥಿಗಳನ್ನು ಗಮನದಲ್ಲಿಟ್ಟುಕೊಂಡು ಅರ್ಥಪೂರ್ಣ ಯೋಜನೆಯನ್ನು ರೂಪಿಸಿ ಅನುಷ್ಟಾನಗೊಳಿಸಿರುವುದು ಎಲ್ಲರಲ್ಲೂ ಸಂತಸ ತಂದಿದೆ ಎಂದು ಹೇಳಿದರು.

ಈ ಸಂದರ್ಭದಲ್ಲಿ ಜಿಲ್ಲಾಧಿಕಾರಿ ಪ್ರಭುಲಿಂಗ ಕವಳಿಕಟ್ಟಿ, ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಎನ್. ಹೇಮಂತ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಬಿ. ನಿಖಿಲ್, ಅಪರ ಜಿಲ್ಲಾಧಿಕಾರಿ ಅಭಿಷೇಕ್ ವಿ., ಮಹಾನಗರಪಾಲಿಕೆ ಆಯುಕ್ತ ಮಾಯಣ್ಣಗೌಡ, ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಜಿಲ್ಲಾ ಅಧ್ಯಕ್ಷ ಚಂದ್ರಭೂಪಾಲ್, ಮುಖಂಡರಾದ ಪ್ರಸನ್ನಕುಮಾರ್, ಕಲಗೋಡು ರತ್ನಾಕರ ಸೇರಿದಂತೆ ಮತ್ತಿತರ ಗಣ್ಯರು ಉಪಸ್ಥಿತರಿದ್ದರು.

[pj-news-ticker]