ಬೆಂಗಳೂರು : ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾ ನೂತನ ಅಧ್ಯಕ್ಷರಾಗಿ ಸಚಿವ ಈಶ್ವರ್ ಖಂಡ್ರೆ ಆಯ್ಕೆಯಾಗಿದ್ದಾರೆ.
ಕಾಂಗ್ರೆಸ್ ಹಿರಿಯ ಶಾಸಕ ಶಾಮನೂರು ಶಿವಶಂಕಪ್ಪ ಅವರ ನಿಧನದಿಂದ ತೆರವಾಗಿದ್ದ ಅಧ್ಯಕ್ಷ ಸ್ಥಾನಕ್ಕೆ ಹಲವು ಪ್ರಮುಖ ನಾಯಕರ ಹೆಸರು ಕೇಳಿಬಂದಿತ್ತು. ಆದರೆ ಅಂತಿಮವಾಗಿ ಬೆಂಗಳೂರಿನ ಸಂಘದ ಕಚೇರಿಯಲ್ಲಿ ನಡೆದ ರಾಷ್ಟ್ರೀಯ ಕಾರ್ಯಕಾರಿ ಸಭೆಯಲ್ಲಿ ಈಶ್ವರ್ ಖಂಡ್ರೆ ಅವರನ್ನು ವೀರಶೈವ ಲಿಂಗಾಯತ ಮಹಾಸಭಾದ 24ನೇ ಅಧ್ಯಕ್ಷರಾಗಿ ಆಯ್ಕೆ ಮಾಡಲಾಗಿದೆ.
ಈ ಹಿಂದೆ ಈಶ್ವರ್ ಖಂಡ್ರೆ ಅವರ ತಂದೆ ಭೀಮಣ್ಣ ಖಂಡ್ರೆ ಅವರು ಕೂಡ ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾದ ಅಧ್ಯಕ್ಷರಾಗಿದ್ದರು. ಬೆಂಗಳೂರಿನ ಸದಾಶಿವನಗರದ ಅರಮನೆ ರಸ್ತೆಯಲ್ಲಿ ಪ್ರಧಾನ ಕಚೇರಿ ಹೊಂದಿರುವ ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾಗೆ ಶಾಮನೂರು ಶಿವಶಂಕರಪ್ಪ ಅಧ್ಯಕ್ಷರಾಗಿದ್ದರು. ಅವರು ಇತ್ತೀಚೆಗೆ ನಿಧನರಾದ ಹಿನ್ನೆಲೆಯಲ್ಲಿ ತೆರವಾಗಿದ್ದ ಸ್ಥಾನಕ್ಕೆ ಈಗ ಅರಣ್ಯ ಸಚಿವ ಈಶ್ವರ್ ಖಂಡ್ರೆ ಅವರನ್ನು ಅವಿರೋಧವಾಗಿ ಆಯ್ಕೆ ಮಾಡಲಾಗಿದೆ.
ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾದ ಅಧ್ಯಕ್ಷ ಸ್ಥಾನಕ್ಕೆ ಮಾಜಿ ಸಿಎಂ ಯಡಿಯೂರಪ್ಪ ಹೆಸರು ಕೂಡ ಕೇಳಿ ಬಂದಿತ್ತು. ಲಿಂಗಾಯತ ಪಂಚಪೀಠದ ಪೀಠಾಧಿಪತಿಗಳೊಬ್ಬರು ಯಡಿಯೂರಪ್ಪ ಅವರು ವೀರಶೈವ ಮಹಾಸಭಾದ ಅಧ್ಯಕ್ಷರಾದರೇ, ಸಂತೋಷ ಎಂದು ಸಹ ಹೇಳಿದ್ದರು. ಆದರೆ, ಈಗ ಭಾಲ್ಕಿ ಕ್ಷೇತ್ರದ ಶಾಸಕ, ರಾಜ್ಯದ ಅರಣ್ಯ, ಪರಿಸರ ಖಾತೆ ಸಚಿವ ಈಶ್ವರ್ ಖಂಡ್ರೆ ಅವರನ್ನು ಆಯ್ಕೆ ಮಾಡಲಾಗಿದೆ.
