ಬೆಂಗಳೂರು: ಶಿಡ್ಲಘಟ್ಟ ನಗರಸಭೆ ಪೌರಾಯುಕ್ತೆ ಅಮೃತಾಗೌಡರಿಗೆ ನಿಂದನೆ ಹಾಗೂ ಧಮ್ಕಿ ನೀಡಿದ ಆರೋಪದ ಹಿನ್ನೆಲೆ ಕೊನೆಗೂ ಕಾಂಗ್ರೆಸ್ ಮುಖಂಡ ರಾಜೀವ್ ಗೌಡನನ್ನು ಪೊಲೀಸರು ಬಂಧಿಸಿದ್ದಾರೆ.
ಹಲವು ದಿನಗಳಿಂದ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಇಂದು ಕೇರಳ ಗಡಿಭಾಗದಲ್ಲಿ ಚಿಕ್ಕಬಳ್ಳಾಪುರ ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.
ಬ್ಯಾನರ್ ವಿಚಾರಕ್ಕೆ ಸಂಬಂಧಿಸಿ ಜನವರಿ 12ರಂದು ಪೌರಾಯುಕ್ತೆ ಅಮೃತಾಗೌಡರಿಗೆ ಕರೆ ಮಾಡಿ ಧಮ್ಕಿ ಹಾಕಿದ್ದ ರಾಜೀವ್ ಗೌಡ ವಿರುದ್ಧ ಜನವರಿ 14ರಂದು ದೂರು ದಾಖಲಾಗಿತ್ತು. ದೂರು ದಾಖಲಾಗುತ್ತಿದ್ದಂತೆಯೇ ಆತ ತಲೆಮರೆಸಿಕೊಂಡಿದ್ದ.
ಇಂದು ಬೆಳಗ್ಗೆ ಆರೋಪಿಯು ದಕ್ಷಿಣ ಕನ್ನಡ ಜಿಲ್ಲೆಯಲ್ಲಿರುವ ಕುರಿತು ಮಾಹಿತಿ ಲಭ್ಯವಾದ ಬೆನ್ನಲ್ಲೇ ಪೊಲೀಸರು ಅಲರ್ಟ್ ಆಗಿದ್ದರು. ಆದರೆ ಬಂಧನದ ಮಾಹಿತಿ ತಿಳಿಯುತ್ತಿದ್ದಂತೆಯೇ ಮಂಗಳೂರಿನಿಂದ ಪರಾರಿಯಾಗಿದ್ದಾನೆ. ಬಳಿಕ ಕೇರಳ ಗಡಿಯಲ್ಲಿ ರಾಜೀವ್ ಗೌಡನನ್ನು ಬಂಧಿಸಲಾಗಿದೆ.
ಈ ಕುರಿತು ಚಿಕ್ಕಬಳ್ಳಾಪುರ ಪೊಲೀಸ್ ವರಿಷ್ಠಾಧಿಕಾರಿ ಕುಶಲ್ ಚೌಕ್ಸೆ ಮಾಹಿತಿ ನೀಡಿದ್ದು, ಶಿಡ್ಲಘಟ್ಟ ಪೊಲೀಸರು ಆರೋಪಿಯನ್ನು ಬಂಧಿಸಿ ಕರೆತರುತ್ತಿದ್ದಾರೆ. ಪ್ರಕರಣಕ್ಕೆ ಸಂಬಂಧಿಸಿದ ಹೆಚ್ಚಿನ ವಿವರಗಳನ್ನು ನಾಳೆ ಪ್ರಕಟಿಸಲಾಗುವುದು ಎಂದು ಅವರು ತಿಳಿಸಿದ್ದಾರೆ.
