ನವದೆಹಲಿ: ಕೇಂದ್ರ ಸರ್ಕಾರದ ಮಹತ್ವಾಕಾಂಕ್ಷಿ ‘ಜಲ ಜೀವನ್ ಮಿಷನ್’ ಯೋಜನೆಯ ಅನುಷ್ಠಾನದಲ್ಲಿ ಕಂಡುಬಂದ ಅಕ್ರಮ ಹಾಗೂ ಲೋಪದೋಷಗಳಿಗೆ ಸಂಬಂಧಿಸಿದಂತೆ ದೇಶಾದ್ಯಂತ 4,000ಕ್ಕೂ ಹೆಚ್ಚು ಜನರ ವಿರುದ್ಧ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲಾಗಿದೆ ಎಂದು ಕೇಂದ್ರ ಜಲಶಕ್ತಿ ಸಚಿವ ಸಿ.ಆರ್. ಪಾಟೀಲ್ ಗುರುವಾರ ಲೋಕಸಭೆಗೆ ತಿಳಿಸಿದ್ದಾರೆ.
ಲೋಕಸಭೆಯಲ್ಲಿ ಪ್ರಶ್ನೆಯೊಂದಕ್ಕೆ ಉತ್ತರಿಸಿದ ಸಚಿವರು, ಯೋಜನೆಯಲ್ಲಿ ಅಕ್ರಮ ನಡೆಯುತ್ತಿದೆ ಎಂಬ ದೂರುಗಳು ಬಂದ ಹಿನ್ನೆಲೆಯಲ್ಲಿ ವಿಶೇಷ ತನಿಖಾ ತಂಡಗಳನ್ನು ರಚಿಸಲಾಗಿತ್ತು. ಈ ತಂಡಗಳು ನೀಡಿದ ವರದಿಯನ್ನು ಆಯಾ ರಾಜ್ಯ ಸರ್ಕಾರಗಳೊಂದಿಗೆ ಹಂಚಿಕೊಳ್ಳಲಾಗಿದ್ದು, ಅದರ ಆಧಾರದ ಮೇಲೆ ತಪ್ಪಿತಸ್ಥರ ವಿರುದ್ಧ ಕ್ರಮ ಜರುಗಿಸಲಾಗಿದೆ.
ಮುಖ್ಯವಾಗಿ ಕಾಮಗಾರಿಗಳ ಕಳಪೆ ಗುಣಮಟ್ಟ, ಹಣಕಾಸು ಅಕ್ರಮಗಳು ಮತ್ತು ನಿಗದಿಪಡಿಸಿದಂತೆ ಸಮರ್ಪಕವಾಗಿ ನೀರು ಪೂರೈಕೆಯಾಗದಿರುವ ಬಗ್ಗೆ ದೂರುಗಳು ಕೇಳಿಬಂದಿದ್ದವು. ಈ ದೂರುಗಳನ್ನು ಗಂಭೀರವಾಗಿ ಪರಿಗಣಿಸಿದ ಕೇಂದ್ರ ಸರ್ಕಾರ, ತನಿಖೆ ನಡೆಸಿ ಇದುವರೆಗೆ 4,000ಕ್ಕೂ ಹೆಚ್ಚು ಜನರ ಮೇಲೆ ಶಿಸ್ತುಕ್ರಮ ಜರುಗಿಸಿದೆ.
ಜಲ ಜೀವನ್ ಮಿಷನ್ ಅಡಿಯಲ್ಲಿ ಕೇಂದ್ರ ಸರ್ಕಾರವು ರಾಜ್ಯಗಳಿಗೆ ಅನುದಾನ ಬಿಡುಗಡೆ ಮಾಡುತ್ತದೆ. ನಂತರ ರಾಜ್ಯ ಸರ್ಕಾರಗಳೇ ಟೆಂಡರ್ ಕರೆಯುವುದು, ಯೋಜನಾ ವರದಿ ಸಿದ್ಧಪಡಿಸುವುದು ಮತ್ತು ಅನುಷ್ಠಾನದ ಜವಾಬ್ದಾರಿಯನ್ನು ಹೊಂದಿರುತ್ತವೆ. ಪ್ರತಿ ಹಂತದಲ್ಲೂ ಪಾರದರ್ಶಕತೆ ಕಾಪಾಡುವಂತೆ ರಾಜ್ಯಗಳಿಗೆ ಸೂಚಿಸಲಾಗಿದೆ ಎಂದು ಕೇಂದ್ರ ಜಲಶಕ್ತಿ ಸಚಿವ ಸಿ.ಆರ್. ಪಾಟೀಲ್ ತಿಳಿಸಿದ್ದಾರೆ.
