ಬೆಂಗಳೂರು : ವಿದೇಶದಿಂದ ಚಿನ್ನ ಕಳ್ಳಸಾಗಣೆ ಪ್ರಕರಣದಲ್ಲಿ ಅಕ್ರಮ ಹಣ ವರ್ಗಾವಣೆ ತಡೆ ಕಾಯ್ದೆಯಡಿ (ಪಿಎಂಎಲ್‌ಎ) ಜಾರಿ ನಿರ್ದೇಶನಾಲಯ ತನಿಖೆ ನಡೆಸಿ ಪ್ರಮುಖ ಆರೋಪಿ, ನಟಿ ಹರ್ಷವರ್ಧಿನಿ ರನ್ಯಾ ಅಲಿಯಾಸ್ ರನ್ಯಾ ರಾವ್ ಹಾಗೂ ಸಹ ಆರೋಪಿಗಳಾದ ತರುಣ್ ಕೊಂಡೂರು ಮತ್ತು ಸಾಹಿಲ್ ಸಕಾರಿಯಾ ಜೈನ್ ವಿರುದ್ಧ ನಗರದ ಪಿಎಂಎಲ್‌ಎ ವಿಶೇಷ ನ್ಯಾಯಾಲಯಕ್ಕೆ ದೋಷಾರೋಪ ಪಟ್ಟಿ ಸಲ್ಲಿಸಿದೆ.
ಪ್ರಮುಖ ಆರೋಪಿ ರನ್ಯಾ ರಾವ್ ಅವರು 2025ರ ಮಾ.3ರಂದು 12.56 ಕೋಟಿ ರು. ಮೌಲ್ಯದ 14 ಕೆ.ಜಿ. ಚಿನ್ನವನ್ನು ವಿದೇಶದಿಂದ ಕಳ್ಳ ಸಾಗಣೆ ಮಾಡುವಾಗ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಕಂದಾಯ ಗುಪ್ತಚರ ನಿರ್ದೇಶನಾಲಯದ(ಡಿಆರ್‌ಐ) ಅಧಿಕಾರಿಗಳ ಬಲೆಗೆ ಬಿದ್ದಿದ್ದರು.
ಬಳಿಕ ಆಕೆಯ ಮನೆಯ ದಾಳಿ ನಡೆಸಿ ಶೋಧಿಸಿದಾಗ 2.06 ಕೋಟಿ ರು. ಮೌಲ್ಯದ ಚಿನ್ನಾಭರಣ ಮತ್ತು 2.67 ಕೋಟಿ ರು. ನಗದು ಪತ್ತೆಯಾಗಿದ್ದು, ಅದನ್ನು ಜಪ್ತಿ ಮಾಡಿದ್ದರು. ಈ ಸಂಬಂಧ ಡಿಆರ್‌ಐ ಮತ್ತು ಸಿಬಿಐ ದಾಖಲಿಸಿದ್ದ ಎಫ್‌ಐಆರ್ ಆಧಾರದ ಮೇಲೆ ಇ.ಡಿ. ತನಿಖೆ ಆರಂಭಿಸಿತ್ತು.
ಆರೋಪಿಗಳು 2024ರ ಮಾರ್ಚ್‌ನಿಂದ 2025ರ ಮಾರ್ಚ್ ಅವಧಿಯವರೆಗೆ ಸುಮಾರು 102.55 ಕೋಟಿ ರು. ಮೌಲ್ಯದ 127 ಕೆ.ಜಿ. ಚಿನ್ನವನ್ನು ವಿದೇಶದಿಂದ ಭಾರತಕ್ಕೆ ಕಳ್ಳ ಸಾಗಣೆ ಮಾಡಿರುವುದು ಇ.ಡಿ. ತನಿಖೆಯಲ್ಲಿ ಬಹಿರಂಗವಾಗಿದೆ.
