Trending

ಪತ್ರಕರ್ತರ ಆರೋಗ್ಯ ಕಾಳಜಿ ಅಗತ್ಯ : ಬಿ.ಕೆ ಮೋಹನ್

Spread the love

ಭದ್ರಾವತಿ : ಪತ್ರಕರ್ತರು ಸದಾ ವೃತ್ತಿ ಚಟುವಟಿಕೆಗಳಲ್ಲಿ ತೊಡಗಿಸಿಕೊಂಡಿರುವುದರಿಂದ ಅವರ ಆರೋಗ್ಯದ ಬಗ್ಗೆ ಹೆಚ್ಚಿನ ಕಾಳಜಿ ಅಗತ್ಯವಿದೆ ಎಂದು ನಗರಸಭೆ ಹಿರಿಯ ಸದಸ್ಯ ಬಿ.ಕೆ. ಮೋಹನ್ ಹೇಳಿದರು.

ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ತಾಲೂಕು ಘಟಕದ ವತಿಯಿಂದ ಹಳೇನಗರದ ಭೂತನಗುಡಿ ಡೇಕೇರ್–ಸರ್ಜಿಕಲ್ ಕೇರ್ & ಡಯಾಗ್ನೋಸ್ಟಿಕ್ಸ್ ಸಹಯೋಗದಲ್ಲಿ ಪತ್ರಕರ್ತರು ಹಾಗೂ ಅವರ ಕುಟುಂಬ ಸದಸ್ಯರಿಗಾಗಿ ಭಾನುವಾರ ಉಚಿತ ಆರೋಗ್ಯ ತಪಾಸಣಾ ಶಿಬಿರ ಆಯೋಜಿಸಲಾಗಿತ್ತು.

ಶಿಬಿರವನ್ನು ಉದ್ಘಾಟಿಸಿ ಮಾತನಾಡಿದ ಅವರು,ಬಡ ವರ್ಗದವರು ಹೆಚ್ಚಿರುವ ಪ್ರದೇಶಗಳಲ್ಲಿ ಉಚಿತ ಆರೋಗ್ಯ ತಪಾಸಣಾ ಶಿಬಿರಗಳನ್ನು ಆಯೋಜಿಸುವುದರಿಂದ ಜನರಿಗೆ ಹೆಚ್ಚಿನ ಪ್ರಯೋಜನವಾಗಲಿದೆ. ಜೊತೆಗೆ ರಕ್ತದಾನ ಶಿಬಿರಗಳನ್ನೂ ಆಯೋಜಿಸಬೇಕು ಎಂದು ಸಲಹೆ ನೀಡಿದರು. ಪತ್ರಕರ್ತರ ಚಟುವಟಿಕೆಗಳಿಗೆ ಅಗತ್ಯವಾದ ಎಲ್ಲ ರೀತಿಯ ಸಹಕಾರ ನೀಡಲು ಸಿದ್ಧವಿದ್ದೇವೆ ಎಂದು ಹೇಳಿದರು.

ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ರಾಜ್ಯ ಸಮಿತಿ ಸದಸ್ಯ ಕೆ.ವಿ. ಶಿವಕುಮಾರ್ ಮಾತನಾಡಿ, ಪತ್ರಕರ್ತರ ಸಂಕಷ್ಟದ ಸಂದರ್ಭಗಳಲ್ಲಿ ನೆರವಾಗಲು ಪತ್ರಕರ್ತರ ಕ್ಷೇಮಾಭಿವೃದ್ಧಿ ನಿಧಿ ಅವಶ್ಯಕವಾಗಿದೆ. ನಗರಸಭೆ ಆಡಳಿತ ಈ ನಿಧಿ ಸ್ಥಾಪನೆಗೆ ಮುಂದಾಗಬೇಕು ಎಂದು ಮನವಿ ಮಾಡಿದರು.

ಎಸ್‌ಎಲ್‌ಎನ್ ಸಂಸ್ಥೆಯ ವೈದ್ಯಕೀಯ ನಿರ್ದೇಶಕ ಹಾಗೂ ಹೃದಯ ರೋಗ ತಜ್ಞ ಡಾ. ಸುಶೀತ್ ಎಸ್. ಶೆಟ್ಟಿ ಮಾತನಾಡಿ, ಇತ್ತೀಚಿನ ದಿನಗಳಲ್ಲಿ ಹೃದಯ ಸಂಬಂಧಿ ರೋಗಗಳು ಹೆಚ್ಚಾಗುತ್ತಿವೆ. ಪತ್ರಕರ್ತರಿಗೆ ನೆರವಾಗುವ ಉದ್ದೇಶದಿಂದ ಉಚಿತ ತಪಾಸಣಾ ಶಿಬಿರ ಆಯೋಜಿಸಲಾಗಿದೆ ಎಂದು ಹೇಳಿದರು.

ಕಾರ್ಯಕ್ರಮದಲ್ಲಿ ತಾಲೂಕು ಘಟಕದ ಅಧ್ಯಕ್ಷ ಗಂಗಾನಾಯ್ಕ ಗೊಂದಿ ಅಧ್ಯಕ್ಷತೆ ವಹಿಸಿದ್ದರು. ಕಿಡ್ನಿ ರೋಗ ತಜ್ಞ ಡಾ. ಇಮ್ರಾನ್, ಜಿಲ್ಲಾಧ್ಯಕ್ಷ ಎಚ್.ಯು. ವೈದ್ಯನಾಥ್, ಪ್ರಧಾನ ಕಾರ್ಯದರ್ಶಿ ಆರ್.ಎಸ್. ಹಾಲಸ್ವಾಮಿ, ನಗರಸಭೆ ಸದಸ್ಯ ಬಸವರಾಜ ಬಿ. ಆನೇಕೊಪ್ಪ, ಪತ್ರಿಕಾಭವನ ಟ್ರಸ್ಟ್ ಅಧ್ಯಕ್ಷ ಕಣ್ಣಪ್ಪ ಸೇರಿದಂತೆ ಹಲವರು ಉಪಸ್ಥಿತರಿದ್ದರು.

ತಾಲೂಕು ಘಟಕದ ಪ್ರಧಾನ ಕಾರ್ಯದರ್ಶಿ ಬಸವರಾಜ ಸ್ವಾಗತಿಸಿದರು. ರಾಬರ್ಟ್ ಪ್ರಾರ್ಥಿಸಿದರು. ಉಪಾಧ್ಯಕ್ಷ ಸುಭಾಷ್‌ರಾವ್ ಸಿಂಧ್ಯಾ ಕಾರ್ಯಕ್ರಮ ನಿರೂಪಿಸಿದರು.

[pj-news-ticker]