ನವದೆಹಲಿ: ಪಾಲಂ ಪ್ರದೇಶದ ನಾಲ್ಕು ಅಂತಸ್ತಿನ ಕಟ್ಟಡದಲ್ಲಿ ಬುಧವಾರ ಬೆಳಗ್ಗೆ ಸಂಭವಿಸಿದ ಭೀಕರ ಅಗ್ನಿ ಅವಘಡದಲ್ಲಿ ಮೂವರು ಮಕ್ಕಳು ಸೇರಿದಂತೆ ಒಂದೇ ಕುಟುಂಬದ ಒಂಬತ್ತು ಜನರು ಸಜೀವ ದಹನವಾಗಿದ್ದಾರೆ. ಇನ್ನೂ ಮೂವರು ಗಾಯಗೊಂಡಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಅಗ್ನಿಶಾಮಕ ದಳದ ಮಾಹಿತಿ ಪ್ರಕಾರ ಬೆಳಗ್ಗೆ ಸುಮಾರು 7 ಗಂಟೆಗೆ ಬೆಂಕಿ ಕಾಣಿಸಿಕೊಂಡ ಬಗ್ಗೆ ಕರೆ ಬಂದಿದ್ದು, ತಕ್ಷಣವೇ 30ಕ್ಕೂ ಹೆಚ್ಚು ಅಗ್ನಿಶಾಮಕ ವಾಹನಗಳು ಸ್ಥಳಕ್ಕೆ ಧಾವಿಸಿವೆ. ರಕ್ಷಣಾ ಕಾರ್ಯಾಚರಣೆ ನಡೆಸಿ ಹಲವು ಮಂದಿಯನ್ನು ಹೊರತೆಗೆದರೂ, ಹಲವರು ಬೆಂಕಿಗೆ ಆಹುತಿಯಾಗಿದ್ದಾರೆ.
ರಾಮ್ ಮಾರುಕಟ್ಟೆಯಲ್ಲಿರುವ WZ-124A ಕಟ್ಟಡದ ನೆಲ ಹಾಗೂ ಮೊದಲ ಮಹಡಿಯಲ್ಲಿ ಬಟ್ಟೆ ಮತ್ತು ಸೌಂದರ್ಯವರ್ಧಕ ಅಂಗಡಿ ಇದ್ದು, ಮೇಲ್ಮಹಡಿಗಳಲ್ಲಿ ಕುಟುಂಬ ವಾಸಿಸುತ್ತಿತ್ತು. ಅಂಗಡಿಯಲ್ಲಿ ಬೆಂಕಿ ಕಾಣಿಸಿಕೊಂಡು ಮೇಲ್ಮಹಡಿಗಳಿಗೆ ವ್ಯಾಪಿಸಿದ ಪರಿಣಾಮ ದುರಂತ ಸಂಭವಿಸಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಗಾಯಗೊಂಡವರನ್ನು ಮಣಿಪಾಲ್ ಆಸ್ಪತ್ರೆ ಹಾಗೂ ಸಫ್ದರ್ಜಂಗ್ ಆಸ್ಪತ್ರೆಗಳಿಗೆ ದಾಖಲಿಸಲಾಗಿದೆ. ಆದರೆ ಚಿಕಿತ್ಸೆ ಫಲಕಾರಿಯಾಗದೆ ಎಂಟು ಜನರು ಮಣಿಪಾಲ್ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದು, ಮತ್ತೊಬ್ಬ ಮಹಿಳೆ ಐಜಿಐ ಆಸ್ಪತ್ರೆಯಲ್ಲಿ ಸಾವನ್ನಪ್ಪಿದ್ದಾರೆ.
ಅಗ್ನಿಶಾಮಕ ಸಿಬ್ಬಂದಿ ಗಂಟೆಗಳ ಕಾಲ ಶ್ರಮಿಸಿ ಬೆಂಕಿಯನ್ನು ಸಂಪೂರ್ಣ ನಂದಿಸಿದ್ದಾರೆ. ಘಟನೆ ಸ್ಥಳದಲ್ಲಿ ದುಃಖದ ವಾತಾವರಣ ಮನೆಮಾಡಿದೆ.
