ಹಾಸನ : ಮಾಜಿ ಪ್ರಧಾನಮಂತ್ರಿ ಹಾಗೂ ಜೆಡಿಎಸ್ ವರಿಷ್ಠ ಎಚ್.ಡಿ. ದೇವೇಗೌಡ ಅವರ ಸಹೋದರಿ ಜವರಮ್ಮ ವಯೋಸಹಜ ಕಾಯಿಲೆಯಿಂದ ನಿಧನ ಹೊಂದಿದರು. ಅವರಿಗೆ 88 ವರ್ಷ ವಯಸ್ಸಾಗಿತ್ತು. ಹಾಸನದ ಖಾಸಗಿ ಆಸ್ಪತ್ರೆಯಲ್ಲಿ ಅವರು ನಿಧನರಾದರು.
ಕೆಲವು ದಿನಗಳಿಂದ ವಯೋಸಹಜ ಆರೋಗ್ಯ ಸಮಸ್ಯೆಗಳಿಂದ ಬಳಲುತ್ತಿದ್ದ ಜವರಮ್ಮ ಅವರನ್ನು ಹಾಸನದ ಖಾಸಗಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಕೊನೆಯುಸಿರೆಳೆದರು ಕುಟುಂಬಸ್ಥರು ತಿಳಿಸಿದ್ದಾರೆ.
ಜವರಮ್ಮ ಹಾಸನ ಜಿಲ್ಲೆಯ ಹೊಳೆನರಸೀಪುರ ತಾಲೂಕಿನ ಬಸವನಾಯಕನಹಳ್ಳಿ ಗ್ರಾಮದದಲ್ಲಿ ವಾಸವಾಗಿದ್ದರು. ಅವರ ನಿಧನಕ್ಕೆ ದೇವೇಗೌಡ ಕಂಬನಿ ಮಿಡಿದಿದ್ದಾರೆ. ದೇವೇಗೌಡ ಸಹೋದರಿಯೊಂದಿಗೆ ಭಾವನಾತ್ಮಕ ಸಂಬಂಧ ಹೊಂದಿದ್ದರು.
ರಾಜಕೀಯವಾಗಿ ಎಷ್ಟೇ ದೊಡ್ಡ ಮಟ್ಟಕ್ಕೆ ಬೆಳೆದಿದ್ದರೂ ದೇವೇಗೌಡ ಹಳ್ಳಿಯ ಸೊಗಡು ಮತ್ತು ಕುಟುಂಬದ ಬಾಂಧವ್ಯವನ್ನು ಎಂದಿಗೂ ಮರೆತಿರಲಿಲ್ಲ. ಅದರಲ್ಲೂ ತಂಗಿ ಜವರಮ್ಮ ಅವರ ಮೇಲೆ ವಿಶೇಷ ಪ್ರೀತಿ ಇತ್ತು. ತಮ್ಮ ತಂಗಿಯ ಅಗಲಿಕೆಗೆ ಅವರಿಗೆ ತೀವ್ರ ಆಘಾತ ತಂದಿದ್ದು, ಕಂಬನಿ ಮಿಡಿದಿದ್ದಾರೆ. ಕುಟುಂಬದ ಸದಸ್ಯರು, ಅಭಿಮಾನಿಗಳು ಮತ್ತು ಕಾರ್ಯಕರ್ತರು ಸಾಂತ್ವನ ಹೇಳಿದ್ದಾರೆ.
