Trending

ಮಂಗಳೂರು ಕುಕ್ಕರ್ ಬಾಂಬ್ ಬ್ಲಾಸ್ಟ್ ಪ್ರಕರಣ : ಆರೋಪಿ ಶಾರೀಕ್ ತಪ್ಪೊಪ್ಪಿಗೆ

Spread the love

ಬೆಂಗಳೂರು : ಮಂಗಳೂರಿನ ಹೊರವಲಯದಲ್ಲಿ ನಾಲ್ಕು ವರ್ಷಗಳ ಹಿಂದೆ ಸಂಭವಿಸಿದ್ದ ಕುಕ್ಕರ್ ಬಾಂಬ್ ಸ್ಫೋಟ ಪ್ರಕರಣದಲ್ಲಿ ಬಂಧಿತನಾಗಿ ನ್ಯಾಯಾಂಗ ಬಂಧನದಲ್ಲಿರುವ ಆರೋಪಿ ಮೊಹಮ್ಮದ್ ಶಾರೀಕ್, ತಾನು ಕೃತ್ಯ ಎಸಗಿರುವುದಾಗಿ ಎನ್ಐಎ ವಿಶೇಷ ನ್ಯಾಯಾಲಯದ ಮುಂದೆ ತಪ್ಪೊಪ್ಪಿಕೊಂಡಿದ್ದಾನೆ.

ಈ ಸಂಬಂಧ ಶಾರೀಕ್ ಸಲ್ಲಿಸಿದ್ದ ತಪ್ಪೊಪ್ಪಿಗೆ ಅರ್ಜಿಯನ್ನು ನ್ಯಾಯಾಲಯವು ವಿಚಾರಣೆ ನಡೆಸಿ ಮಾನ್ಯಗೊಳಿಸಿದೆ. ಈ ಹಿಂದೆ ವಿಚಾರಣೆ ವೇಳೆ ತಾನು ನಿರಪರಾಧಿ ಎಂದು ಹೇಳಿಕೆ ನೀಡಿದ್ದ ಶಾರೀಕ್, ನಂತರ ತನ್ನ ನಿಲುವು ಬದಲಿಸಿ 2025ರ ಡಿಸೆಂಬರ್‌ನಲ್ಲಿ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದನು.

ಅರ್ಜಿಯಲ್ಲಿ, ಎನ್ಐಎ ತನಿಖಾಧಿಕಾರಿಗಳು ಸಲ್ಲಿಸಿರುವ ದೋಷಾರೋಪ ಪಟ್ಟಿಯಲ್ಲಿ ನಮೂದಿಸಿರುವ ಆರೋಪಗಳು ಸತ್ಯವಾಗಿದ್ದು, ಕುಕ್ಕರ್‌ನಲ್ಲಿ ಸುಧಾರಿತ ಸ್ಫೋಟಕ ಸಾಧನ (ಐಇಡಿ) ಇಟ್ಟು ಸ್ಫೋಟಕ್ಕೆ ಕಾರಣನಾಗಿರುವುದಾಗಿ ಒಪ್ಪಿಕೊಂಡಿದ್ದಾನೆ.

ತನ್ನ ಕೃತ್ಯಕ್ಕೆ ಪಶ್ಚಾತ್ತಾಪ ವ್ಯಕ್ತಪಡಿಸಿರುವ ಆತ, ಕಾನೂನು ಪ್ರಕಾರ ಕ್ರಮ ಕೈಗೊಳ್ಳುವಂತೆ ನ್ಯಾಯಾಲಯವನ್ನು ಕೋರಿದ್ದಾನೆ. ಮೂರು ತಿಂಗಳ ವಿಚಾರಣೆ ಬಳಿಕ ನ್ಯಾಯಾಲಯವು ಈ ಅರ್ಜಿಯನ್ನು ಪುರಸ್ಕರಿಸಿದೆ ಎಂದು ಮೂಲಗಳು ತಿಳಿಸಿವೆ.

2022ರ ನವೆಂಬರ್ 19ರಂದು ಸಂಜೆ ಸುಮಾರು 4.40ರ ವೇಳೆಗೆ ಮಂಗಳೂರಿನ ಕಂಕನಾಡಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಆಟೋದಲ್ಲಿ ತೆರಳುವಾಗ ಕುಕ್ಕರ್‌ನಲ್ಲಿ ಇರಿಸಿದ್ದ ಐಇಡಿ ಸ್ಫೋಟಗೊಂಡಿತ್ತು. ಸ್ಫೋಟದ ಪರಿಣಾಮವಾಗಿ ಶಾರೀಕ್ ಹಾಗೂ ಆಟೋ ಚಾಲಕ ಗಂಭೀರವಾಗಿ ಗಾಯಗೊಂಡಿದ್ದರು. ಬಳಿಕ ಪೊಲೀಸರು ಪ್ರಕರಣ ದಾಖಲಿಸಿಕೊಂಡು ಶಂಕಿತನನ್ನು ಬಂಧಿಸಿದ್ದರು.

ಈ ಪ್ರಕರಣದಲ್ಲಿ ಉಗ್ರ ಸಂಘಟನೆಗಳ ನಂಟಿನ ಶಂಕೆ ಹಿನ್ನೆಲೆಯಲ್ಲಿ ಆರೋಪಿಗಳ ವಿರುದ್ಧ ಕಾನೂನುಬಾಹಿರ ಚಟುವಟಿಕೆಗಳ ತಡೆ ಕಾಯ್ದೆ (ಯುಎಪಿಎ) ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದ್ದು, ಎನ್ಐಎ ತನಿಖೆ ಕೈಗೊಂಡಿತ್ತು. 2024ರಲ್ಲಿ ಶಾರೀಕ್ ಮತ್ತು ಸೈಯದ್ ಯಾಸೀನ್ ವಿರುದ್ಧ ದೋಷಾರೋಪ ಪಟ್ಟಿ ಸಲ್ಲಿಸಲಾಗಿತ್ತು.

[pj-news-ticker]