ಭದ್ರಾವತಿ: ದಾವಣಗೆರೆಯಿಂದ ಭದ್ರಾವತಿಗೆ ಬರುತ್ತಿದ್ದ ಖಾಸಗಿ ಬಸ್ ಭದ್ರಾವತಿ ತಾಲ್ಲೂಕಿನ ವೀರಾಪುರ ಸಮೀಪದ ಕಾಗೆಹಳ್ಳದಲ್ಲಿ ಸೇತುವೆಯಿಂದ ಕೆಳಗೆ ಬಿದ್ದು ಅನೇಕ ಪ್ರಯಾಣಿಕರು ಗಾಯಗೊಂಡ ಘಟನೆ ಸೋಮವಾರ ನಡೆದಿದೆ.
ದಾವಣಗೆರೆಯಿಂದ ಹೊರಟಿದ್ದ ಬಸ್ ಚನ್ನಗಿರಿ ದಾಟಿ ಕಾಗೆಹಳ್ಳದ ಬಳಿ ಬರುತ್ತಿದ್ದ ವೇಳೆ ಚಾಲಕನ ನಿಯಂತ್ರಣ ತಪ್ಪಿ ಸೇತುವೆಯಿಂದ ಕೆಳಗೆ ಪತನಗೊಂಡಿದೆ ಎಂದು ತಿಳಿದುಬಂದಿದೆ. ಬಸ್ನಲ್ಲಿ ಸುಮಾರು 35 ಮಂದಿ ಪ್ರಯಾಣಿಸುತ್ತಿದ್ದು, ಮೂವರು-ನಾಲ್ವರಿಗೆ ತೀವ್ರ ಗಾಯಗಳಾಗಿವೆ. ಇಬ್ಬರ ಕಾಲು ಮುರಿದಿದ್ದು, ಕೆಲವರಿಗೆ ಸಣ್ಣಪುಟ್ಟ ಗಾಯಗಳಾಗಿವೆ.
ಅಪಘಾತದಲ್ಲಿ ಬಸ್ ಚಾಲಕನಿಗೂ ತೀವ್ರ ಗಾಯವಾಗಿದ್ದು, ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಸ್ಥಳೀಯ ಗ್ರಾಮಸ್ಥರು ತಕ್ಷಣ ಧಾವಿಸಿ ಬಸ್ನಲ್ಲಿದ್ದ ಪ್ರಯಾಣಿಕರನ್ನು ರಕ್ಷಿಸಿ ಹೊರತೆಗೆದಿದ್ದಾರೆ.
ಗಾಯಾಳುಗಳನ್ನು ತಕ್ಷಣ ಶಿವಮೊಗ್ಗದ ಮೆಗ್ಗಾನ್ ಜಿಲ್ಲಾ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಅದೃಷ್ಟವಶಾತ್ ಈ ಭೀಕರ ಅಪಘಾತದಲ್ಲಿ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ ಎಂದು ಮೂಲಗಳು ತಿಳಿಸಿವೆ.
ಘಟನೆಯ ಕುರಿತು ಸಂಬಂಧಪಟ್ಟ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ಮುಂದುವರಿಸಿದ್ದಾರೆ.
