ಶಿಕಾರಿಪುರ: ಪಟ್ಟಣದಲ್ಲಿ ಇಂದು ಬೆಳಿಗ್ಗೆ ಭಾರೀ ರಸ್ತೆ ಅಪಘಾತ ಸಂಭವಿಸಿದ್ದು, ಖಾಸಗಿ ಬಸ್ ಒಂದು ಪಲ್ಟಿಯಾದ ಘಟನೆ ಆತಂಕಕ್ಕೆ ಕಾರಣವಾಗಿದೆ. ಘಟನೆ ಕುಮದ್ವತಿ ಕಾಲೇಜು ಮುಂಭಾಗದಲ್ಲಿ ನಡೆದಿದೆ.
ಮಾಹಿತಿಯ ಪ್ರಕಾರ, ಬಸ್ಸಿನ ಮುಂದೆ ಸಾಗುತ್ತಿದ್ದ ಬೈಕ್ ಸವಾರನು ರಸ್ತೆಯಲ್ಲಿದ್ದ ಹಂಪ್ ತಪ್ಪಿಸಲು ಏಕಾಏಕಿ ದಿಕ್ಕು ಬದಲಿಸಿದ್ದಾನೆ. ಇದರಿಂದ ಡಿಕ್ಕಿ ತಪ್ಪಿಸಲು ಪ್ರಯತ್ನಿಸಿದ ಬಸ್ ಚಾಲಕ ತಕ್ಷಣವೇ ದಿಕ್ಕು ಬದಲಿಸಿದ್ದು, ನಿಯಂತ್ರಣ ಕಳೆದುಕೊಂಡ ಬಸ್ ರಸ್ತೆ ಬದಿಯ ವಿದ್ಯುತ್ ಕಂಬಕ್ಕೆ ಗುದ್ದಿದೆ. ಬಳಿಕ ಬಸ್ ಪಲ್ಟಿಯಾಗಿ ಬಿದ್ದಿದೆ ಎಂದು ತಿಳಿದುಬಂದಿದೆ.
ಅಪಘಾತದ ಪರಿಣಾಮವಾಗಿ ಬಸ್ಸಿನಲ್ಲಿದ್ದ ಹಲವು ಪ್ರಯಾಣಿಕರು ಗಾಯಗೊಂಡಿದ್ದಾರೆ. ಸ್ಥಳೀಯರು ಮತ್ತು ಪೊಲೀಸರು ತಕ್ಷಣ ಸ್ಥಳಕ್ಕೆ ಆಗಮಿಸಿ ರಕ್ಷಣಾ ಕಾರ್ಯಾಚರಣೆ ನಡೆಸಿ ಗಾಯಾಳುಗಳನ್ನು ಶಿಕಾರಿಪುರ ಸರ್ಕಾರಿ ಆಸ್ಪತ್ರೆಗೆ ಸಾಗಿಸಿದ್ದಾರೆ.
ಗಂಭೀರವಾಗಿ ಗಾಯಗೊಂಡ ಸುಮಾರು 10 ಮಂದಿಯನ್ನು ಹೆಚ್ಚಿನ ಚಿಕಿತ್ಸೆಗಾಗಿ ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಗೆ ರವಾನಿಸಲಾಗಿದೆ ಎಂದು ತಿಳಿದುಬಂದಿದೆ.
ಘಟನೆಯ ಸಂಬಂಧ ಪೊಲೀಸರು ಪರಿಶೀಲನೆ ನಡೆಸುತ್ತಿದ್ದು, ಅಪಘಾತಕ್ಕೆ ನಿಖರ ಕಾರಣ ತಿಳಿದುಬರುವ ಕಾರ್ಯ ಮುಂದುವರಿದಿದೆ.
