ನವದೆಹಲಿ: ಬಹುಚರ್ಚಿತ ‘ಉದ್ಯೋಗಕ್ಕಾಗಿ ಭೂಮಿ’ (Land-for-Jobs) ಹಗರಣಕ್ಕೆ ಸಂಬಂಧಿಸಿದಂತೆ ಆರ್ಜೆಡಿ ಮುಖ್ಯಸ್ಥ ಲಾಲೂ ಪ್ರಸಾದ್ ಯಾದವ್ ಮತ್ತು ಅವರ ಕುಟುಂಬದ ವಿರುದ್ಧ ದಾಖಲಾಗಿರುವ ಸಿಬಿಐ ಎಫ್ಐಆರ್ ಹಾಗೂ ಚಾರ್ಜ್ಶೀಟ್ ಅನ್ನು ರದ್ದುಗೊಳಿಸಲು ಸುಪ್ರೀಂ ಕೋರ್ಟ್ ಸೋಮವಾರ ನಿರಾಕರಿಸಿದೆ.
ನ್ಯಾಯಮೂರ್ತಿಗಳಾದ ಎಂ. ಎಂ. ಸುಂದರೇಶ್ ಮತ್ತು ಎನ್. ಕೋಟೀಶ್ವರ್ ಸಿಂಗ್ ಅವರಿದ್ದ ಪೀಠವು ಈ ಮಹತ್ವದ ತೀರ್ಪು ನೀಡಿದೆ. 77 ವರ್ಷದ ಲಾಲೂ ಪ್ರಸಾದ್ ಯಾದವ್ ಅವರ ವಯಸ್ಸು ಮತ್ತು ಆರೋಗ್ಯದ ದೃಷ್ಟಿಯಿಂದ, ವಿಚಾರಣಾ ನ್ಯಾಯಾಲಯಕ್ಕೆ ಖುದ್ದು ಹಾಜರಾಗುವುದರಿಂದ ಸುಪ್ರೀಂ ಕೋರ್ಟ್ ವಿನಾಯಿತಿ ನೀಡಿದೆ.
ಭ್ರಷ್ಟಾಚಾರ ತಡೆ ಕಾಯ್ದೆಯ ಸೆಕ್ಷನ್ 17A ಅಡಿಯಲ್ಲಿ ಪೂರ್ವಾನುಮತಿ ಪಡೆಯದ ಕುರಿತು ಕಾನೂನು ಹೋರಾಟ ಮುಂದುವರಿಸಲು ಲಾಲೂ ಅವರಿಗೆ ನ್ಯಾಯಾಲಯ ಅವಕಾಶ ನೀಡಿದೆ.
ಏನಿದು ಪ್ರಕರಣ?
2004 ರಿಂದ 2009 ರವರೆಗೆ ಲಾಲೂ ಪ್ರಸಾದ್ ಯಾದವ್ ಅವರು ಕೇಂದ್ರ ರೈಲ್ವೆ ಸಚಿವರಾಗಿದ್ದ ಅವಧಿಯಲ್ಲಿ ಈ ಹಗರಣ ನಡೆದಿದೆ ಎಂದು ಆರೋಪಿಸಲಾಗಿದೆ.
ಮಧ್ಯಪ್ರದೇಶದ ಜಬಲ್ಪುರದ ಪಶ್ಚಿಮ ಮಧ್ಯ ವಲಯದಲ್ಲಿ ಗ್ರೂಪ್-ಡಿ ಹುದ್ದೆಗಳಿಗೆ ಅಭ್ಯರ್ಥಿಗಳನ್ನು ನೇಮಿಸಿಕೊಳ್ಳಲಾಗಿತ್ತು. ರೈಲ್ವೆಯಲ್ಲಿ ಉದ್ಯೋಗ ನೀಡಿದ್ದಕ್ಕಾಗಿ ಪ್ರತಿಯಾಗಿ ಅಭ್ಯರ್ಥಿಗಳಿಂದ ಲಾಲೂ ಕುಟುಂಬದ ಸದಸ್ಯರು ಅಥವಾ ಆಪ್ತರ ಹೆಸರಿಗೆ ಭೂಮಿಯನ್ನು ಉಡುಗೊರೆಯಾಗಿ ಅಥವಾ ಕಡಿಮೆ ಬೆಲೆಗೆ ವರ್ಗಾಯಿಸಿಕೊಳ್ಳಲಾಗಿದೆ ಎಂಬುದು ಸಿಬಿಐ ಆರೋಪ.
ಹೈಕೋರ್ಟ್ ತೀರ್ಪು ಎತ್ತಿ ಹಿಡಿದ ಸುಪ್ರೀಂ
ಈ ಹಿಂದೆ ದೆಹಲಿ ಹೈಕೋರ್ಟ್ ಕೂಡ ಸಿಬಿಐ ಎಫ್ಐಆರ್ ರದ್ದುಗೊಳಿಸಲು ನಿರಾಕರಿಸಿತ್ತು. ಅದನ್ನು ಪ್ರಶ್ನಿಸಿ ಲಾಲೂ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ್ದರು. ಈಗ ಸುಪ್ರೀಂ ಕೋರ್ಟ್ ಕೂಡ ತನಿಖೆಗೆ ತಡೆಯೊಡ್ಡಲು ನಿರಾಕರಿಸಿರುವುದರಿಂದ ಲಾಲೂಗೆ ಕಾನೂನು ಸಂಕಷ್ಟ ಮುಂದುವರಿದಿದೆ.
