ಬೆಂಗಳೂರು: ಶಸ್ತ್ರಚಿಕಿತ್ಸೆಯ ಬಳಿಕ ವೈದ್ಯರ ನಿರ್ಲಕ್ಷ್ಯದಿಂದ ರೋಗಿಯೊಬ್ಬರು ಮೃತಪಟ್ಟಿದ್ದಾರೆ ಎಂಬ ಗಂಭೀರ ಆರೋಪ ರಾಜಧಾನಿಯಲ್ಲಿ ಕೇಳಿಬಂದಿದೆ. ವಿಕ್ಟೋರಿಯಾ ಆಸ್ಪತ್ರೆಯ ವಿರುದ್ಧ ಮೃತರ ಕುಟುಂಬಸ್ಥರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಮೃತರು ಡೆಲಿವರಿ ಬಾಯ್ ಆಗಿ ಕೆಲಸ ಮಾಡುತ್ತಿದ್ದ 45 ವರ್ಷದ ಶಾ ನವಾಜ್. ಮರ್ಮಾಂಗದಲ್ಲಿ ಗಡ್ಡೆ ಕಾಣಿಸಿಕೊಂಡ ಹಿನ್ನೆಲೆ ಅವರು ಒಂದೂವರೆ ತಿಂಗಳ ಹಿಂದೆ ವಿಕ್ಟೋರಿಯಾ ಆಸ್ಪತ್ರೆಯ ತುರ್ತು ನಿಗಾ ಘಟಕಕ್ಕೆ ದಾಖಲಾಗಿದ್ದರು. ಸೋಂಕಿನ ಕಾರಣ ವೈದ್ಯರು ಶಸ್ತ್ರಚಿಕಿತ್ಸೆ ನಡೆಸಿ, ನಂತರ ಪ್ಲಾಸ್ಟಿಕ್ ಸರ್ಜರಿ ವಿಭಾಗದಲ್ಲಿ ಮುಂದಿನ ಚಿಕಿತ್ಸೆ ಪಡೆಯುವಂತೆ ಸೂಚಿಸಿದ್ದರು.
ಆದರೆ, ಆಸ್ಪತ್ರೆಯ ವಿವಿಧ ವಿಭಾಗಗಳ ನಡುವಿನ ಸಮನ್ವಯ ಕೊರತೆಯಿಂದ ಗಾಯ ಗುಣವಾಗುವ ಮುನ್ನವೇ ರೋಗಿಯನ್ನು ಡಿಸ್ಚಾರ್ಜ್ ಮಾಡಲಾಗಿದೆ ಎಂಬ ಆರೋಪ ಕೇಳಿಬಂದಿದೆ. ಶಸ್ತ್ರಚಿಕಿತ್ಸೆ ಮಾಡಿದ ಜಾಗಕ್ಕೆ ಸರಿಯಾಗಿ ಹೊಲಿಗೆ ಕೂಡ ಹಾಕದೆ ಹೊರಗೆ ಕಳುಹಿಸಲಾಗಿದೆ ಎಂದು ಕುಟುಂಬಸ್ಥರು ದೂರಿದ್ದಾರೆ.
ಮತ್ತೆ ಆಸ್ಪತ್ರೆಗೆ ದಾಖಲಿಸಿಕೊಳ್ಳಲು ಸಿಬ್ಬಂದಿ ನಿರಾಕರಿಸಿದ್ದರಿಂದ, ಶಾ ನವಾಜ್ ಅವರನ್ನು ಅವರ ಪತ್ನಿ ಆಸ್ಪತ್ರೆ ಹೊರಗಿನ ಫುಟ್ಪಾತ್ನಲ್ಲೇ ಮೂರು ದಿನಗಳ ಕಾಲ ಇರಿಸಿಕೊಂಡಿದ್ದರು. ತೀವ್ರ ನೋವು ಮತ್ತು ರಕ್ತಸ್ರಾವದಿಂದ ನರಳಾಡಿದ ಅವರು ಕೊನೆಗೆ ಮೃತಪಟ್ಟಿದ್ದಾರೆ.
ಈ ಘಟನೆ ಕುಟುಂಬವನ್ನು ಶೋಕಸಾಗರದಲ್ಲಿ ಮುಳುಗಿಸಿದೆ. ಕುಟುಂಬದ ಆಧಾರಸ್ತಂಭವಾಗಿದ್ದ ಶಾ ನವಾಜ್ ಅವರ ಸಾವಿನಿಂದ ಪತ್ನಿ ಮತ್ತು ನಾಲ್ವರು ಮಕ್ಕಳು ಸಂಕಷ್ಟಕ್ಕೆ ಸಿಲುಕಿದ್ದಾರೆ. ಪ್ರಕರಣದ ಕುರಿತು ಸೂಕ್ತ ತನಿಖೆ ನಡೆಸಿ ಕ್ರಮ ಕೈಗೊಳ್ಳುವಂತೆ ಕುಟುಂಬಸ್ಥರು ಆಗ್ರಹಿಸಿದ್ದಾರೆ.
