ನವದೆಹಲಿ : ಪಶ್ಚಿಮ ಏಷ್ಯಾ ವಲಯದಲ್ಲಿ ಹೆಚ್ಚುತ್ತಿರುವ ಉದ್ವಿಗ್ನತೆಯಿಂದಾಗಿ ಜಾಗತಿಕ ಮಾರುಕಟ್ಟೆಯಲ್ಲಿ ಕಚ್ಚಾ ತೈಲ ಬೆಲೆ ಏರಿಕೆಯಾಗುತ್ತಿದ್ದು, ಇದರ ಬೆನ್ನಲ್ಲೇ ಭಾರತದಲ್ಲಿ ಪೆಟ್ರೋಲ್, ಡೀಸೆಲ್ ಮತ್ತು ಎಲ್‌ಪಿಜಿ ಸಿಲಿಂಡರ್ ದರಗಳು ಶೀಘ್ರದಲ್ಲೇ ಏರಿಕೆಯಾಗುವ ಸಾಧ್ಯತೆಯಿದೆ ಎಂದು ಸರ್ಕಾರದ ಉನ್ನತ ಮೂಲಗಳು ತಿಳಿಸಿವೆ.
ಮುಂದಿನ ಒಂದು ವಾರದೊಳಗೆ ಈ ಕುರಿತು ಕೇಂದ್ರ ಸರ್ಕಾರ ಮಹತ್ವದ ನಿರ್ಧಾರ ಕೈಗೊಳ್ಳುವ ನಿರೀಕ್ಷೆಯಿದೆ.
ವರದಿಗಳ ಪ್ರಕಾರ, ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಪ್ರತಿ ಲೀಟರ್‌ಗೆ ಸುಮಾರು 4ರಿಂದ 5 ರುಪಾಯಿಗಳಷ್ಟು ಹೆಚ್ಚಾಗಬಹುದು. ಹಾಗೆಯೇ, ಗೃಹ ಬಳಕೆಯ ಎಲ್‌ಪಿಜಿ ಸಿಲಿಂಡರ್ ಬೆಲೆಯಲ್ಲಿ ಸುಮಾರು 40ರಿಂದ 50 ರುಪಾಯಿಯಷ್ಟು ಏರಿಕೆಯಾಗುವ ಸಾಧ್ಯತೆಯಿದೆ.
ಒಂದು ವೇಳೆ ಸರ್ಕಾರ ಈ ಪ್ರಸ್ತಾವನೆಗೆ ಅನುಮೋದನೆ ನೀಡಿದರೆ, ಇದು ಕಳೆದ 4 ವರ್ಷಗಳಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಯಲ್ಲಿ ಕಂಡುಬರುವ ಮೊದಲ ಏರಿಕೆಯಾಗಲಿದೆ. ತೈಲ ಕಂಪನಿಗಳ ಮೇಲಿನ ಆರ್ಥಿಕ ಒತ್ತಡವನ್ನು ಕಡಿಮೆ ಮಾಡುವುದು ಮತ್ತು ಹಣದುಬ್ಬರ ನಿಯಂತ್ರಣದಲ್ಲಿಡುವುದು ಈ ಎರಡರ ನಡುವೆ ಸಮತೋಲನ ಕಾಯ್ದುಕೊಳ್ಳಲು ಸರ್ಕಾರ ಪ್ರಯತ್ನಿಸುತ್ತಿದೆ.
