ಶಿವಮೊಗ್ಗ : ಪ್ರವಾಸಿ ತಾಣ ಕೊಡಗು ಜಿಲ್ಲೆಯ ದುಬಾರೆ ಆನೆ ಶಿಬಿರದಲ್ಲಿ ಆನೆಯ ದಾಳಿಗೆ ಸಿಲುಕಿ ತಮಿಳುನಾಡಿನ ಚೆನ್ನೈ ಮೂಲದ ಮಹಿಳೆ ಜಿನ್ನು (33) ಮೃತಪಟ್ಟ ಬಳಿಕ ಸರ್ಕಾರ ಕಠಿಣ ಕ್ರಮ ಕೈಗೊಂಡಿದ್ದು, ಪ್ರವಾಸಿಗರ ಸುರಕ್ಷತೆಯ ದೃಷ್ಟಿಯಿಂದ ಶಿವಮೊಗ್ಗದ ಸಕ್ರೆಬೈಲು ಆನೆ ಬಿಡಾರಕ್ಕೆ ನಾಳೆಯಿಂದ (ಮೇ 22) ತಾತ್ಕಾಲಿಕವಾಗಿ ಪ್ರವೇಶ ನಿಷೇಧಿಸಲಾಗಿದೆ.
ಈ ಬಗ್ಗೆ ಅರಣ್ಯ ಇಲಾಖೆ ಪ್ರಕಟಣೆ ಹೊರಡಿಸಿದೆ. ದುಬಾರೆ ಆನೆ ಬಿಡಾರದಲ್ಲಿ ಕಾವೇರಿ ನದಿಯಲ್ಲಿ ಸ್ನಾನ ಮಾಡಿಸುವ ವೇಳೆ ಎರಡು ಸಾಕಾನೆಗಳ ನಡುವೆ ನಡೆದ ಕಾದಾಟದಲ್ಲಿ ಜಿನ್ನು ಆನೆಯಡಿ ಸಿಲುಕಿ ಮೃತಪಟ್ಟ ಬಳಿಕ ಈ ಕ್ರಮ ಕೈಗೊಳ್ಳಲಾಗಿದೆ.
ಮಹಿಳೆ ಮೃತಪಟ್ಟ ಪ್ರಕರಣವನ್ನು ಅತ್ಯಂತ ಗಂಭೀರವಾಗಿ ಪರಿಗಣಿಸಿದ ಅರಣ್ಯ ಇಲಾಖೆಯು, ಆನೆ ಬಿಡಾರಗಳಲ್ಲಿ ಕಟ್ಟುನಿಟ್ಟಿನ ನಿಯಮಗಳನ್ನು ಜಾರಿಗೆ ತರುವಂತೆ ಅಧಿಕಾರಿಗಳಿಗೆ ಸೂಚಿಸಿದೆ.
ಶಿವಮೊಗ್ಗ ಜಿಲ್ಲೆಯ ಪ್ರಸಿದ್ದ ಪ್ರವಾಸಿ ತಾಣವಾಗಿರುವ ಸಕ್ರೆಬೈಲು ಆನೆ ಬಿಡಾರಕ್ಕೆ ದುಬಾರೆಯಂತೆ ರಾಜ್ಯ ಹಾಗೂ ಹೊರ ರಾಜ್ಯದ ವಿವಿಧೆಡೆಯಿಂದ ಪ್ರತಿದಿನ ನೂರಾರು ಮಂದಿ ಆಗಮಿಸುತ್ತಾರೆ. ಬಂದತಂಹ ಪ್ರವಾಸಿಗರು ಆನೆಗಳಿಗೆ ಸ್ನಾನ ಮಾಡಿಸುತ್ತಾರೆ, ಸವಾರಿ ಮಾಡುತ್ತಾರೆ. ಈಗಾಗಲೇ ಆನೆಗಳಿಗೆ ಸ್ನಾನ ಮಾಡಿಸುವ ವ್ಯವಸ್ಥೆ ಬಂದ್ ಮಾಡಲಾಗಿದೆ.
ಆರಂಭದಲ್ಲಿ ಸಕ್ರೆಬೈಲು ಆನೆ ಬಿಡಾರದಲ್ಲಿ ಆನೆಗಳ ಸ್ನಾನ ಮಾಡಿಸುವುದು ಹಾಗೂ ಮೈ ಮುಟ್ಟುವುದನ್ನು ನಿಷೇಧಿಸಿ ಪ್ರವಾಸಿಗರಿಗೆ ದೂರದಿಂದ ಆನೆಗಳನ್ನು ವೀಕ್ಷಿಸಲು ಅವಕಾಶ ನೀಡಲಾಗಿತ್ತು. ಇದೀಗ ಯಾವುದೇ ಅಹಿತಕರ ಘಟನೆ ನಡೆಯದಂತೆ ಪ್ರವಾಸಿಗರ ಪ್ರವೇಶವನ್ನೇ ತಾತ್ಕಾಲಿಕವಾಗಿ ಸಂಪೂರ್ಣವಾಗಿ ನಿಷೇಧಿಸಲಾಗಿದೆ.
ಹೊಸ ನಿಯಮ ಜಾರಿಗೆ ಬರುವವರೆಗೆ ಈ ನಿರ್ಬಂಧ ಮುಂದುವರಿಯಲಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಶಿವಮೊಗ್ಗ ತಾಲೂಕಿನ ಗಾಜನೂರು ಸಮೀಪ, ತುಂಗಾ ಜಲಾಶಯದ ಹಿನ್ನೀರಿನಲ್ಲಿ ಇರುವ ಸಕ್ರೆಬೈಲು ಆನೆ ಬಿಡಾರದಲ್ಲಿ ಸದ್ಯ ಒಟ್ಟು 24 ಆನೆಗಳಿವೆ. ಇದರಲ್ಲಿ 19 ಗಂಡಾನೆ, 5 ಹೆಣ್ಣಾನೆಗಳಿವೆ.
