Trending

ಭಟ್ಕಳದಲ್ಲಿ ಘೋರ ದುರಂತ : ತಟ್ಟಿಹಕ್ಕಲ ನದಿಯಲ್ಲಿ ಕಪ್ಪೆಚಿಪ್ಪು ಸಂಗ್ರಹಿಸಲು ಹೋಗಿದ್ದ 8 ಮಂದಿ ಸಾವು

Spread the love

ಶಿರಸಿ/ಭಟ್ಕಳ: ಉತ್ತರ ಕನ್ನಡ ಜಿಲ್ಲೆಯ ಭಟ್ಕಳ ತಾಲೂಕಿನ ಶಿರಾಲಿ ಸಮೀಪ ಇಂದು ಭೀಕರ ದುರಂತ ಸಂಭವಿಸಿದೆ. ಕಪ್ಪೆಚಿಪ್ಪು (ಚಪ್ಪೆಕಲ್ಲು) ಆರಿಸಲು ನದಿಗೆ ಇಳಿದಿದ್ದ ಒಂದೇ ಕುಟುಂಬಕ್ಕೆ ಸೇರಿದ 8 ಜನ ನೀರಿನಲ್ಲಿ ಮುಳುಗಿ ಮೃತಪಟ್ಟಿದ್ದಾರೆ.

​ಭಟ್ಕಳ ತಾಲೂಕಿನ ಶಿರಾಲಿಯ ಅಳ್ವೆಕೋಡಿ ಸಮೀಪವಿರುವ ತಟ್ಟಿಹಕ್ಕಲ ಕಳಿನಟ್ಟಿ ಹೊಳೆಯಲ್ಲಿ ಈ ದುರಂತ ಸಂಭವಿಸಿದೆ. ಸ್ಥಳೀಯ ನಿವಾಸಿಗಳು ನದಿಯಲ್ಲಿ ಕಪ್ಪೆಚಿಪ್ಪುಗಳನ್ನು ಸಂಗ್ರಹಿಸಲು ತೆರಳಿದ್ದರು.

ಈ ವೇಳೆ ನದಿಗೆ ಇಳಿದವರು ಒಬ್ಬರ ಕೈಯನ್ನು ಮತ್ತೊಬ್ಬರು ಹಿಡಿದು ಸಾಗುತ್ತಿದ್ದರು ಎನ್ನಲಾಗಿದೆ. ಈ ವೇಳೆ ಎಂಟು ಮಂದಿ ನೀರಿನಲ್ಲಿ ಮುಳುಗಿ ಸಾವನ್ನಪ್ಪಿದ್ದಾರೆ.

​ದುರಂತಕ್ಕೆ ಕಾರಣವೇನು?

​ಕಳೆದ ರಾತ್ರಿ ಸುರಿದ ಭಾರಿ ಮಳೆಯಿಂದಾಗಿ ನದಿಯಲ್ಲಿ ನೀರಿನ ಹರಿವು ತೀವ್ರವಾಗಿತ್ತು. ಇದರೊಂದಿಗೆ ಸಮುದ್ರದ ಅಲೆಗಳ ಅಬ್ಬರವೂ ಹೆಚ್ಚಾಗಿದ್ದರಿಂದ ಹೊಳೆಯಲ್ಲಿ ನೀರಿನ ಮಟ್ಟ ಏಕಾಏಕಿ ಏರಿಕೆಯಾಗಿದೆ. ನೀರಿನ ರಭಸಕ್ಕೆ ಸಿಲುಕಿ ಇವರೆಲ್ಲರೂ ಮುಳುಗಿದ್ದಾರೆ ಎಂದು ಪ್ರಾಥಮಿಕ ವರದಿಗಳು ತಿಳಿಸಿವೆ.

​ನದಿಯಲ್ಲಿ ಮುಳುಗಿ ಮೃತಪಟ್ಟವರೆಲ್ಲರ ಮೃತದೇಹಗಳನ್ನು ಅಳ್ವೆಕೋಡಿ ಬಳಿ ಪತ್ತೆಹಚ್ಚಿ ಹೊರತೆಗೆಯಲಾಗಿದೆ. ​ಪಡುಶಿರಾಲಿ ಬೆಂಗ್ರೆಯ ಲಕ್ಷ್ಮಿ ಮಹಾದೇವ ನಾಯ್ಕ (42), ಶಾರದಾಹೊಳೆಯ ​ಉಮೇಶ ನಾಯ್ಕ (30), ​ಲಕ್ಷ್ಮಿ ನಾಯ್ಕ (30), ಲಕ್ಷ್ಮಿ ಅಣ್ಣಪ್ಪ ನಾಯ್ಕ (60), ​ಲಕ್ಷ್ಮಿ ಶಿವರಾಮ ನಾಯ್ಕ (49) , ​ಜ್ಯೋತಿ ನಾಗಪ್ಪ ನಾಯ್ಕ (34) , ​ಮಾಲತಿ ನಾಯ್ಕ (38) , ​ಮಾಸ್ತಮ್ಮ ನಾಯ್ಕ ಮೃತರು.

​ಘಟನೆಯಲ್ಲಿ ಅದೃಷ್ಟವಶಾತ್ ನಾಗರತ್ನಾ ಮತ್ತು ಮಹಾದೇವಿ ಎಂಬ ಇಬ್ಬರು ಮಹಿಳೆಯರು ಅಪಾಯದಿಂದ ಪಾರಾಗಿದ್ದಾರೆ. ಅವರನ್ನು ತಕ್ಷಣವೇ ಚಿಕಿತ್ಸೆಗಾಗಿ ಮಣಿಪಾಲ ಆಸ್ಪತ್ರೆಗೆ ದಾಖಲಿಸಲಾಗಿದೆ.

[pj-news-ticker]