Trending

ವಿದ್ಯಾರ್ಥಿಗಳು ನಿರಂತರ ಕಲಿಕೆಯ ಮನೋಭಾವ ಬೆಳೆಸಿಕೊಳ್ಳಬೇಕು : ದೇವೇಂದ್ರ ಬೆಳೆಯೂರು

Spread the love

ಶಿವಮೊಗ್ಗ: ಕೆಳದಿ ಶಿವಪ್ಪ ನಾಯಕ ಕೃಷಿ ಮತ್ತು ತೋಟಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾನಿಲಯ ವ್ಯಾಪ್ತಿಯ ಕೃಷಿ ಮಹಾವಿದ್ಯಾಲಯ, ಇರುವಕ್ಕಿ ಯಲ್ಲಿ “ಕೆಳದಿ ಕೃಷಿ–2026” ಮಹಾವಿದ್ಯಾಲಯ ಹಾಗೂ ವಸತಿ ನಿಲಯಗಳ ವಾರ್ಷಿಕೋತ್ಸವವನ್ನು ಸಂಭ್ರಮ ಮತ್ತು ಸಡಗರದಿಂದ ಆಚರಿಸಲಾಯಿತು.

ಕಾರ್ಯಕ್ರಮವನ್ನು ವಿಶ್ವವಿದ್ಯಾನಿಲಯದ ಕುಲಪತಿಗಳಾದ ಡಾ. ಆರ್.ಸಿ. ಜಗದೀಶ್ ಉದ್ಘಾಟಿಸಿ, ಮಹಾವಿದ್ಯಾಲಯದ ವಾರ್ಷಿಕ ಸಂಚಿಕೆ ‘ಸಂಗಮ’ವನ್ನು ಬಿಡುಗಡೆ ಮಾಡಿದರು.

ಮುಖ್ಯ ಅತಿಥಿಗಳಾಗಿ ಭಾಗವಹಿಸಿದ್ದ ಭರತನಾಟ್ಯ ಹಾಗೂ ಯಕ್ಷಗಾನ ಕಲಾವಿದ ದೇವೇಂದ್ರ ಬೆಳೆಯೂರು ಮಾತನಾಡಿ, ಇಂದಿನ ಯುವಪೀಳಿಗೆ ಸಾಮಾಜಿಕ ಜಾಲತಾಣಗಳ ಪ್ರಭಾವದಿಂದ ಅನಗತ್ಯ ಒತ್ತಡಗಳಿಗೆ ಒಳಗಾಗುತ್ತಿರುವ ಬಗ್ಗೆ ಕಳವಳ ವ್ಯಕ್ತಪಡಿಸಿ, ಜೀವನದಲ್ಲಿ ಟೀಕೆ, ಅವಮಾನ ಹಾಗೂ ಹಿನ್ನಡೆಗಳು ಸಾಮಾನ್ಯವಾಗಿದ್ದು, ಅವುಗಳನ್ನು ಧೈರ್ಯದಿಂದ ಎದುರಿಸಿ ನಿರಂತರ ಕಲಿಕೆಯ ಮನೋಭಾವವನ್ನು ವಿದ್ಯಾರ್ಥಿಗಳು ಬೆಳೆಸಿಕೊಳ್ಳಬೇಕು ಎಂದು ಕರೆ ನೀಡಿದರು.

ಕುಲಪತಿಗಳಾದ ಡಾ. ಆರ್.ಸಿ. ಜಗದೀಶ್ ಮಾತನಾಡಿ, ಕೃಷಿ, ಅರಣ್ಯ ಹಾಗೂ ತೋಟಗಾರಿಕೆ ಕ್ಷೇತ್ರಗಳಲ್ಲಿ ಅಪಾರ ಅವಕಾಶಗಳಿದ್ದು, ವಿದ್ಯಾರ್ಥಿಗಳು ತಮ್ಮ ಜ್ಞಾನವನ್ನು ಸಮಾಜಮುಖಿ ಚಿಂತನೆಯೊಂದಿಗೆ ಬಳಸಿಕೊಂಡು ಕೃಷಿ ಕ್ಷೇತ್ರದ ಅಭಿವೃದ್ಧಿಗೆ ಕೈಜೋಡಿಸಬೇಕು ಎಂದರು.

ಇನ್ನೋರ್ವ ಮುಖ್ಯ ಅತಿಥಿಗಳಾದ ವಿಶ್ವವಿದ್ಯಾನಿಲಯದ ವ್ಯವಸ್ಥಾಪನಾ ಮಂಡಳಿ ಸದಸ್ಯ ಡಾ. ಎಚ್.ಡಿ. ದೇವಿಕುಮಾರ್ ಅವರು ನಿಖರ ಕೃಷಿ, ಐಒಟಿ ತಂತ್ರಜ್ಞಾನ ಹಾಗೂ ಆಧುನಿಕ ಕೃಷಿ ಪದ್ಧತಿಗಳ ಮಹತ್ವವನ್ನು ವಿವರಿಸಿದರು. ಕೃಷಿಯಲ್ಲಿ ತಂತ್ರಜ್ಞಾನ ಅಳವಡಿಕೆಯಿಂದ ರೈತರ ಜೀವನಮಟ್ಟ ಸುಧಾರಣೆಗೆ ಯುವಕರು ಮುಂದಾಗಬೇಕು ಎಂದು ತಿಳಿಸಿದರು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಡಾ. ಕೆ.ಸಿ. ಶಶಿಧರ್ ವಹಿಸಿದ್ದರು. ಈ ಸಂದರ್ಭದಲ್ಲಿ ಡಾ. ಟಿ.ಕೆ. ನಾಗರತ್ನ, ಡಾ. ರವಿಕುಮಾರ್ ಸೇರಿದಂತೆ ಬೋಧಕ, ಬೋಧಕೇತರ ಸಿಬ್ಬಂದಿ ಮತ್ತು ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

[pj-news-ticker]