ಭದ್ರಾವತಿ : ನಗರದ ಹೊಳೆಹೊನ್ನೂರು ರಸ್ತೆಯ ಅನ್ವರ್ ಕಾಲೋನಿಯಲ್ಲಿ ನಡೆದ ಭೀಕರ ದಾಳಿಯಲ್ಲಿ “ಇಸ್ಪೀಟ್ ಕಿಂಗ್” ಎಂದೇ ಪರಿಚಿತರಾಗಿರುವ ಮುದ್ದೆ ಅಲಿಯಾಸ್ ವಿಶ್ವನಾಥ್ ಎಂ. (35) ಗಂಭೀರವಾಗಿ ಗಾಯಗೊಂಡಿದ್ದು, ಜೀವ ಉಳಿಸಿಕೊಳ್ಳಲು ಹೋರಾಟ ನಡೆಸುತ್ತಿದ್ದಾರೆ.
ಮೂಲಗಳ ಪ್ರಕಾರ, ಸುಮಾರು 6 ರಿಂದ 7 ಮಂದಿಯ ತಂಡ ವಿಶ್ವನಾಥ್ ಮೇಲೆ ಏಕಾಏಕಿ ದಾಳಿ ನಡೆಸಿ, ತಲ್ವಾರ್ ಸೇರಿದಂತೆ ಮಾರಕಾಸ್ತ್ರಗಳಿಂದ ಮನಬಂದಂತೆ ಹಲ್ಲೆ ನಡೆಸಿದೆ. ದಾಳಿಕೋರರು ಅವರನ್ನು ಬೆನ್ನಟ್ಟಿ ಹಿಡಿದು ಹಲ್ಲೆ ನಡೆಸಿದ ಬಳಿಕ ಸ್ಥಳದಿಂದ ಪರಾರಿಯಾಗಿದ್ದಾರೆ ಎನ್ನಲಾಗಿದೆ.
ತೀವ್ರ ರಕ್ತಸ್ರಾವಗೊಂಡಿದ್ದ ವಿಶ್ವನಾಥ್ ಅವರನ್ನು ಸ್ಥಳೀಯರು ಹಾಗೂ ಕುಟುಂಬಸ್ಥರು ತಕ್ಷಣ ಆಸ್ಪತ್ರೆಗೆ ದಾಖಲಿಸಿದ್ದು, ಬಳಿಕ ಹೆಚ್ಚಿನ ಚಿಕಿತ್ಸೆಗೆ ಶಿವಮೊಗ್ಗದ ಖಾಸಗಿ ಆಸ್ಪತ್ರೆಗೆ ರವಾನಿಸಲಾಗಿದೆ. ವೈದ್ಯರು ಅವರ ಸ್ಥಿತಿ ಅತ್ಯಂತ ಗಂಭೀರವಾಗಿದೆ ಎಂದು ತಿಳಿಸಿದ್ದಾರೆ.
ಭದ್ರಾವತಿ ಪ್ರದೇಶದಲ್ಲಿ “ಇಸ್ಪೀಟ್ ಕಿಂಗ್” ಎಂದೇ ಗುರುತಿಸಿಕೊಂಡಿದ್ದ ವಿಶ್ವನಾಥ್ ಅವರ ಮೇಲೆ ನಡೆದ ದಾಳಿಗೆ ಇಸ್ಪೀಟ್ ಹಾಗೂ ಇತರೆ ವಿಚಾರಗಳಿಗೆ ಸಂಬಂಧಿಸಿದ ಹಳೆಯ ವೈಷಮ್ಯ ಕಾರಣವಾಗಿರಬಹುದೆಂಬ ಶಂಕೆ ವ್ಯಕ್ತವಾಗಿದೆ. ಆದರೆ ದಾಳಿಯ ನಿಖರ ಕಾರಣ ಇನ್ನೂ ಸ್ಪಷ್ಟವಾಗಿಲ್ಲ.
ಈ ಸಂಬಂಧ ಭದ್ರಾವತಿ ಹಳೆನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಆರೋಪಿಗಳ ಬಂಧನಕ್ಕಾಗಿ ಪೊಲೀಸರು ಶೋಧ ಕಾರ್ಯ ಆರಂಭಿಸಿದ್ದಾರೆ. ಘಟನಾ ಸ್ಥಳಕ್ಕೆ ಹಿರಿಯ ಪೊಲೀಸ್ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
