ಬೆಂಗಳೂರು: ಶಿಕ್ಷಣ ಸಂಸ್ಥೆಗಳ ಹೆಸರಿನಲ್ಲಿ ವಿದ್ಯಾರ್ಥಿಗಳಿಗೆ ಆಮಿಷವೊಡ್ಡಿ ಹಣ ಪಡೆದು ನಕಲಿ ಅಂಕಪಟ್ಟಿ ಸೃಷ್ಟಿಸಿ ಮಾರುತ್ತಿದ್ದ ಜಾಲವನ್ನು ಬೆಂಗಳೂರಿನಲ್ಲಿ ಪೊಲೀಸರು ಬಯಲಿಗೆಳೆದಿದ್ದಾರೆ.
ಕೋರಮಂಗಲದ ಡಿಜಿಟಲ್ ಡಿಸ್ಟೆನ್ಸ್ ಎಜುಕೇಷನ್ ಮಿಷನ್ ಸಂಸ್ಥೆಯ ಮಾಲೀಕ ರಾಜಾರೆಡ್ಡಿ ಬಂಧಿತ ಆರೋಪಿ. ದುಷ್ಕೃತ್ಯದಲ್ಲಿ ತೊಡಗಿದ್ದ ಮತ್ತೋರ್ವ ಆರೋಪಿ ಆರ್ಯನ್ ತಲೆಮರೆಸಿಕೊಂಡಿದ್ದಾನೆ. ಈತನ ಬಂಧನಕ್ಕಾಗಿ ಶೋಧ ನಡೆಸಲಾಗುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಡಿಜಿಟಲ್ ಡಿಸ್ಟೆನ್ಸ್ ಎಜುಕೇಷನ್ ಹೆಸರಿನಲ್ಲಿ ವಿದ್ಯಾರ್ಥಿಗಳ ಮೊಬೈಲ್ ನಂಬರ್ ಸಂಗ್ರಹಿಸಿ ಸಂಸ್ಥೆಯ ಉದ್ಯೋಗಿಗಳಿಂದ ಕರೆ ಮಾಡಿಸಿ ನಗರದ ಫ್ಲಾರೆನ್ಸ್, ಕಲಾನಿಕೇತನ್, ಎಂವಿಜೆ, ಟಿಪ್ಪು ಸುಲ್ತಾನ್ ಸೇರಿದಂತೆ ವಿವಿಧ ಕಾಲೇಜುಗಳಲ್ಲಿ ಪ್ರವೇಶಾತಿ ಕೊಡಿಸುವುದಾಗಿ ಆರೋಪಿಗಳು ನಂಬಿಸುತ್ತಿದ್ದರು.
ಎಸ್ಸೆಸ್ಸೆಲ್ಸಿ ಹಾಗೂ ಪಿಯುಸಿ ವ್ಯಾಸಂಗ ಮಾಡದಿದ್ದರೂ ಡಿಗ್ರಿ ಅಡ್ಮಿಷನ್ ಮಾಡಿಸುವುದಾಗಿ ಭರವಸೆ ನೀಡುತ್ತಿದ್ದರು. ಇದನ್ನು ನಂಬಿದ ವಿದ್ಯಾರ್ಥಿಗಳಿಗೆ ಎಸ್ಸೆಸ್ಸೆಲ್ಸಿ ಹಾಗೂ ಪಿಯುಸಿ ಅಂಕಪಟ್ಟಿ ಸೃಷ್ಟಿಸಿ ಮಾರಾಟ ಮಾಡುತ್ತಿದ್ದರು. ಈ ಮಾಹಿತಿ ಆಧರಿಸಿ ಸಿಸಿಬಿ ವಿಶೇಷ ತನಿಖಾ ದಳ ದಾಳಿ ನಡೆಸಿತ್ತು.
