ಶಿವಮೊಗ್ಗ : ಶಿವಮೊಗ್ಗ ನಗರದಲ್ಲಿ ಹಾಡುಹಗಲೇ ರೌಡಿ ಶೀಟರ್ ಒಬ್ಬನನ್ನು ದುಷ್ಕರ್ಮಿಗಳ ತಂಡ ಭೀಕರವಾಗಿ ಹತ್ಯೆ ಮಾಡಿರುವ ಘಟನೆ ಆತಂಕಕ್ಕೆ ಕಾರಣವಾಗಿದೆ. ಲಷ್ಕರ್ ಮೊಹಲ್ಲಾದಲ್ಲಿ ನಡೆದ ಈ ಕೃತ್ಯದಿಂದ ಪ್ರದೇಶದಲ್ಲಿ ಕೆಲಕಾಲ ಉದ್ವಿಗ್ನ ವಾತಾವರಣ ನಿರ್ಮಾಣವಾಗಿತ್ತು.
ಮೃತನನ್ನು ಆಶ್ರಯ ಬಡಾವಣೆಯ ನಿವಾಸಿ ಹಾಗೂ ರೌಡಿ ಶೀಟರ್ ನರಸಿಂಹ (36) ಎಂದು ಗುರುತಿಸಲಾಗಿದೆ. ಪ್ರಾಥಮಿಕ ಮಾಹಿತಿಯ ಪ್ರಕಾರ, ನರಸಿಂಹ ಲಷ್ಕರ್ ಮೊಹಲ್ಲಾದ ಮೊದಲನೇ ತಿರುವಿನಲ್ಲಿರುವ ಮನೆಯಲ್ಲಿ ಇಸ್ಪೀಟ್ ಆಡಲು ಬಂದಿದ್ದ ವೇಳೆ ವಾಹನದಲ್ಲಿ ಬೆನ್ನಟ್ಟಿಕೊಂಡು ಬಂದ ನಾಲ್ಕೈದು ಮಂದಿಯ ತಂಡ ಏಕಾಏಕಿ ಮಾರಕಾಸ್ತ್ರಗಳಿಂದ ದಾಳಿ ನಡೆಸಿದೆ.
ಘಟನಾ ಸ್ಥಳದಲ್ಲಿದ್ದ ಇತರರನ್ನು ಓಡಿಸಿದ ದುಷ್ಕರ್ಮಿಗಳು ನರಸಿಂಹನ ಮೇಲೆ ಮನಬಂದಂತೆ ಹಲ್ಲೆ ನಡೆಸಿದ್ದು, ಕೈಗಳನ್ನು ಕಡಿದು ಮುಖವನ್ನು ವಿಕೃತಗೊಳಿಸಿ ಬರ್ಬರವಾಗಿ ಹತ್ಯೆ ಮಾಡಿದ್ದಾರೆ ಎಂದು ತಿಳಿದುಬಂದಿದೆ. ದಾಳಿಯ ಕ್ರೌರ್ಯದಿಂದ ಘಟನೆ ಸ್ಥಳದಲ್ಲೇ ಆತ ಮೃತಪಟ್ಟಿದ್ದಾನೆ.
ಹತ್ಯೆ ವೈಯಕ್ತಿಕ ದ್ವೇಷ ಅಥವಾ ಹಳೆಯ ವೈಷಮ್ಯದ ಹಿನ್ನೆಲೆಯಲ್ಲೇ ನಡೆದಿರಬಹುದೆಂಬ ಶಂಕೆ ವ್ಯಕ್ತವಾಗಿದ್ದು, ನಿಖರ ಕಾರಣ ತನಿಖೆಯ ಬಳಿಕವೇ ತಿಳಿದುಬರಬೇಕಿದೆ. ನರಸಿಂಹ ವಿರುದ್ಧ ಈ ಹಿಂದೆ ಹಲವು ಅಪರಾಧ ಪ್ರಕರಣಗಳು ಹಾಗೂ ಹತ್ಯೆ ಪ್ರಕರಣಗಳಿಗೆ ಸಂಬಂಧಿಸಿದ ದಾಖಲೆಗಳಿದ್ದವು ಎನ್ನಲಾಗಿದೆ.
ಘಟನೆಯ ಮಾಹಿತಿ ತಿಳಿಯುತ್ತಿದ್ದಂತೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಲಾಗಿದ್ದು, ಆರೋಪಿಗಳ ಪತ್ತೆಗಾಗಿ ವಿಶೇಷ ತಂಡಗಳನ್ನು ರಚಿಸಿ ಶೋಧ ಕಾರ್ಯ ಕೈಗೊಳ್ಳಲಾಗಿದೆ.
ನಗರದ ಮಧ್ಯಭಾಗದಲ್ಲೇ ನಡೆದ ಈ ಬರ್ಬರ ಹತ್ಯೆ ಸಾರ್ವಜನಿಕರಲ್ಲಿ ಆತಂಕ ಮೂಡಿಸಿದ್ದು, ಕಾನೂನು ಸುವ್ಯವಸ್ಥೆ ಬಗ್ಗೆ ಪ್ರಶ್ನೆಗಳು ಉದ್ಭವಿಸಿವೆ. ಪ್ರಕರಣದ ಕುರಿತು ಪೊಲೀಸರು ಹೆಚ್ಚಿನ ತನಿಖೆ ಮುಂದುವರಿಸಿದ್ದಾರೆ.
