Trending

ಆಗುಂಬೆ ಘಾಟಿಯಲ್ಲಿ ಕಾರಿನ ಮೇಲೆ ಉರುಳಿದ ಮರ : ಕೂದಲೆಳೆ ಅಂತರದಲ್ಲಿ ತಪ್ಪಿದ ದುರಂತ

Spread the love

ಶಿವಮೊಗ್ಗ : ತೀರ್ಥಹಳ್ಳಿ ತಾಲೂಕಿನ ಆಗುಂಬೆ ಘಾಟಿಯಲ್ಲಿ ಚಲಿಸುತ್ತಿದ್ದ ಕಾರಿನ ಮೇಲೆ ಮರವೊಂದು ಉರುಳಿ ಬಿದ್ದ ಪರಿಣಾಮ ಕಾರಿನ ಮುಂಭಾಗ ಸಂಪೂರ್ಣ ಜಖಂಗೊಂಡ ಘಟನೆ ಭಾನುವಾರ ನಡೆದಿದೆ.

ಅದೃಷ್ಟವಶಾತ್ ಕಾರಿನಲ್ಲಿದ್ದ ಕುಟುಂಬದ ಸದಸ್ಯರು ಯಾವುದೇ ಗಾಯಗಳಿಲ್ಲದೆ ಪ್ರಾಣಾಪಾಯದಿಂದ ಪಾರಾಗಿದ್ದಾರೆ.

ಆರಗ ಗ್ರಾಮದ ಯುವರಾಜ್ ಅವರು ತಮ್ಮ ಕುಟುಂಬದೊಂದಿಗೆ ಮಂದಾರ್ತಿ ದೇವಾಲಯಕ್ಕೆ ತೆರಳುತ್ತಿದ್ದ ವೇಳೆ ಆಗುಂಬೆ ಘಾಟಿಯ 12ನೇ ತಿರುವಿನಲ್ಲಿ ಈ ಅವಘಡ ಸಂಭವಿಸಿದೆ. ಏಕಾಏಕಿ ರಸ್ತೆ ಬದಿಯ ಮರವೊಂದು ಕಾರಿನ ಮೇಲೆ ಬಿದ್ದ ಪರಿಣಾಮ ವಾಹನದ ಮುಂಭಾಗ ಹಾಗೂ ಬಾನೆಟ್‌ಗೆ ತೀವ್ರ ಹಾನಿಯಾಗಿದೆ.

ಘಟನೆ ನಡೆದ ಕ್ಷಣದಲ್ಲಿ ಕಾರಿನಲ್ಲಿದ್ದವರು ತೀವ್ರ ಆತಂಕಕ್ಕೊಳಗಾಗಿದ್ದರೂ, ಯಾವುದೇ ಪ್ರಾಣಹಾನಿ ಅಥವಾ ಗಾಯಗಳಾಗಿಲ್ಲ. ಅವಘಡದ ಪರಿಣಾಮ ಆಗುಂಬೆ ಘಾಟಿಯಲ್ಲಿ ಕೆಲಕಾಲ ವಾಹನ ಸಂಚಾರ ಸ್ಥಗಿತಗೊಂಡಿತ್ತು.

ಮಾಹಿತಿ ತಿಳಿಯುತ್ತಿದ್ದಂತೆ ಆಗುಂಬೆ ಪೊಲೀಸರು ಹಾಗೂ ಅರಣ್ಯ ಇಲಾಖೆ ಸಿಬ್ಬಂದಿ ಸ್ಥಳಕ್ಕೆ ಆಗಮಿಸಿ ರಸ್ತೆಗೆ ಅಡ್ಡಲಾಗಿ ಬಿದ್ದಿದ್ದ ಮರವನ್ನು ತೆರವುಗೊಳಿಸಿದರು. ಬಳಿಕ ವಾಹನ ಸಂಚಾರವನ್ನು ಪುನಃ ಆರಂಭಿಸಲಾಯಿತು.

ಮಳೆಗಾಲ ಆರಂಭವಾಗಿರುವ ಹಿನ್ನೆಲೆಯಲ್ಲಿ ಆಗುಂಬೆ ಘಾಟಿ ಪ್ರದೇಶದಲ್ಲಿ ಮರಗಳು ಉರುಳುವ ಸಾಧ್ಯತೆ ಹೆಚ್ಚಿದ್ದು, ವಾಹನ ಸವಾರರು ಎಚ್ಚರಿಕೆಯಿಂದ ಸಂಚರಿಸುವಂತೆ ಅಧಿಕಾರಿಗಳು ಮನವಿ ಮಾಡಿದ್ದಾರೆ.

[pj-news-ticker]