ಭದ್ರಾವತಿ : ಸಿದ್ದಾರ್ಥ ಅಂಧರ ಕೇಂದ್ರ ಹಾಗೂ ಜಾವಳ್ಳಿಯ ಜ್ಞಾನದೀಪ ಶಾಲೆಯ ಸಂಯುಕ್ತ ಆಶ್ರಯದಲ್ಲಿ ಸ್ವಚ್ಛ ಭಾರತ ಅಭಿಯಾನ ಮತ್ತು ಪರಿಸರ ದಿನಾಚರಣೆಯ ಅಂಗವಾಗಿ ಸ್ವಚ್ಛತಾ ಕಾರ್ಯ ಹಾಗೂ ಸಸಿ ನೆಡುವ ಕಾರ್ಯಕ್ರಮ ನಡೆಯಿತು.
ಕಾರ್ಯಕ್ರಮದಲ್ಲಿ ಜ್ಞಾನದೀಪ ಶಾಲೆಯ 200ಕ್ಕೂ ಹೆಚ್ಚು ವಿದ್ಯಾರ್ಥಿಗಳು ಭಾಗವಹಿಸಿ ಸಿದ್ದಾರ್ಥ ಅಂಧರ ಕೇಂದ್ರಕ್ಕೆ ಭೇಟಿ ನೀಡಿ, ದೃಷ್ಟಿ ವೈಕಲ್ಯ ಹೊಂದಿದ ವಿದ್ಯಾರ್ಥಿಗಳಿಗೆ ನೀಡಲಾಗುತ್ತಿರುವ ಓದು-ಬರಹ ಹಾಗೂ ಕೌಶಲ್ಯಾಭಿವೃದ್ಧಿ ತರಬೇತಿಗಳ ಕುರಿತು ಮಾಹಿತಿ ಪಡೆದರು.
ನಂತರ ಕೇಂದ್ರದ ಆವರಣದಲ್ಲಿ ಸ್ವಚ್ಛತಾ ಕಾರ್ಯ ನಡೆಸಿ, ಪರಿಸರ ಸಂರಕ್ಷಣೆಯ ಸಂದೇಶ ಸಾರಿದರು. ಇದೇ ಸಂದರ್ಭದಲ್ಲಿ ವಿವಿಧ ಸಸಿಗಳನ್ನು ನೆಟ್ಟು ಪರಿಸರ ಸಂರಕ್ಷಣೆಯ ಪ್ರತಿಜ್ಞೆ ಕೈಗೊಂಡರು.
ನಗರಸಭೆಯ ಆಯುಕ್ತ ಶ್ರೀ ಹೇಮಂತ್ ಸಸಿ ನೆಡುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿ, “ಬಾಲ್ಯದಿಂದಲೇ ವಿದ್ಯಾರ್ಥಿಗಳಲ್ಲಿ ಪರಿಸರ ಪ್ರಜ್ಞೆ, ಸ್ವಚ್ಛತೆ ಹಾಗೂ ಸಮುದಾಯ ಸೇವೆಯ ಮನೋಭಾವ ಬೆಳೆಸುವ ಇಂತಹ ಕಾರ್ಯಕ್ರಮಗಳು ಶ್ಲಾಘನೀಯ” ಎಂದು ಹೇಳಿದರು.
ದೃಷ್ಟಿ ವೈಕಲ್ಯ ಹೊಂದಿದವರಿಗೆ ಶಿಕ್ಷಣ ಹಾಗೂ ಕೌಶಲ್ಯಾಭಿವೃದ್ಧಿ ತರಬೇತಿ ನೀಡಿ ಸ್ವಾವಲಂಬಿ ಬದುಕು ಕಟ್ಟಿಕೊಡುತ್ತಿರುವ ಸಿದ್ದಾರ್ಥ ಅಂಧರ ಕೇಂದ್ರದ ಕಾರ್ಯವನ್ನು ಅವರು ಪ್ರಶಂಸಿಸಿದರು.
ಭದ್ರಾವತಿ ಸರ್ಕಾರಿ ಆಸ್ಪತ್ರೆಯ ಡಾ. ಪ್ರೀತಿ ಕಾರ್ಯಕ್ರಮಕ್ಕೆ ಶುಭ ಹಾರೈಸಿದರು. ಜ್ಞಾನದೀಪ ಶಾಲೆಯ ಶ್ರೀಕಾಂತ್ ಗೋಸಾನಿ ವಿದ್ಯಾರ್ಥಿಗಳಲ್ಲಿ ಸಮುದಾಯ ಸೇವೆಯ ಅರಿವು ಮೂಡಿಸುವ ಉದ್ದೇಶದ ಕುರಿತು ಮಾಹಿತಿ ನೀಡಿದರು.
ಸಿದ್ದಾರ್ಥ ಅಂಧರ ಕೇಂದ್ರದ ಅಧ್ಯಕ್ಷ ಶಿವಬಸಪ್ಪ ಅಧ್ಯಕ್ಷತೆ ವಹಿಸಿದ್ದರು. ಕಾರ್ಯಕ್ರಮದಲ್ಲಿ ನಗರಸಭೆಯ ಸಿವಿಲ್ ಇಂಜಿನಿಯರ್ ಸಂತೋಷ್ ಪಾಟೀಲ್, ರಿಲಯನ್ಸ್ ಕಂಪನಿಯ ಅಶೋಕ್, ಜ್ಞಾನದೀಪ ಶಾಲೆಯ ಶಿಕ್ಷಕರಾದ ಶ್ವೇತ ಮತ್ತು ಸಾನಿಯಾ ಹಾಗೂ ಸಿದ್ದಾರ್ಥ ಅಂಧರ ಕೇಂದ್ರದ ಎಸ್. ಸೃಷ್ಟಿ ಉಪಸ್ಥಿತರಿದ್ದರು.

ಜ್ಞಾನದೀಪ ಶಾಲೆಯ ವಿದ್ಯಾರ್ಥಿನಿಯರು ಪ್ರಾರ್ಥಿಸಿದರು. ಶಿಕ್ಷಕ ಜಗದೀಶ್ ಸ್ವಾಗತಿಸಿದರು. ಶಾಂತಲಾ ಕಾರ್ಯಕ್ರಮ ನಿರೂಪಿಸಿದರು.
ಇದೇ ಸಂದರ್ಭದಲ್ಲಿ ಸಿದ್ದಾರ್ಥ ಅಂಧರ ಕೇಂದ್ರದ ವಿದ್ಯಾರ್ಥಿಗಳು ಸಂಗೀತ ಕಾರ್ಯಕ್ರಮ ನಡೆಸಿಕೊಟ್ಟು ಮೆಚ್ಚುಗೆ ಗಳಿಸಿದರು.
