ಭದ್ರಾವತಿ: ಕ್ಷೇತ್ರದಲ್ಲಿ ರಾಜಕೀಯ ಪ್ರಭಾವಕ್ಕೆ ಒಳಗಾಗಿ ಅಕ್ರಮಗಳಿಗೆ ಬೆಂಬಲ ನೀಡುವ ಮೂಲಕ ಸರ್ಕಾರಿ ಅಧಿಕಾರಿಗಳು ತಮ್ಮ ಕರ್ತವ್ಯದಿಂದ ವಿಮುಖರಾಗಬಾರದು. ರಾಜಕಾರಣಿಗಳು ಶಾಶ್ವತವಲ್ಲ, ಆದರೆ ಅಧಿಕಾರಿಗಳು ಕೈಗೊಳ್ಳುವ ನಿರ್ಧಾರಗಳು ಹಾಗೂ ನಿರ್ವಹಿಸುವ ಕರ್ತವ್ಯ ಶಾಶ್ವತವಾಗಿ ದಾಖಲಾಗುತ್ತದೆ. ಇದನ್ನು ಅರಿತು ಅಧಿಕಾರಿಗಳು ಪ್ರಾಮಾಣಿಕವಾಗಿ ಕಾರ್ಯನಿರ್ವಹಿಸಬೇಕು ಎಂದು ಜೆಡಿಎಸ್ ಹಾಗೂ ಬಿಜೆಪಿ ಮುಖಂಡರು ಎಚ್ಚರಿಸಿದರು.
ನಗರದ ತಾಲೂಕು ಕಚೇರಿ ಮುಂಭಾಗ ಬುಧವಾರ ‘ಭದ್ರಾವತಿ ಉಳಿಸಿ ಹೋರಾಟ ವೇದಿಕೆ’ ನೇತೃತ್ವದಲ್ಲಿ ನಡೆದ ಬೃಹತ್ ಪ್ರತಿಭಟನಾ ಧರಣಿಯಲ್ಲಿ ಮಾತನಾಡಿದ ಅವರು, ಕ್ಷೇತ್ರದ ಬಹುತೇಕ ಸರ್ಕಾರಿ ಇಲಾಖೆಗಳ ಕಾರ್ಯವೈಖರಿ ಕುರಿತು ಅಸಮಾಧಾನ ವ್ಯಕ್ತಪಡಿಸಿದರು.
ಸರ್ಕಾರಿ ಕಚೇರಿಗಳಲ್ಲಿ ಭ್ರಷ್ಟಾಚಾರ ಹೆಚ್ಚಾಗಿದ್ದು, ಅಧಿಕಾರಿಗಳು ಮತ್ತು ಸಿಬ್ಬಂದಿಯಲ್ಲಿ ಪ್ರಾಮಾಣಿಕತೆ ಮರೆಯಾಗುತ್ತಿದೆ. ವಿವಿಧ ಸರ್ಕಾರಿ ದಾಖಲೆಗಳನ್ನು ಪಡೆಯಲು ಸಾರ್ವಜನಿಕರು ಲಂಚ ನೀಡಬೇಕಾದ ಪರಿಸ್ಥಿತಿ ನಿರ್ಮಾಣವಾಗಿದೆ ಎಂದು ಆರೋಪಿಸಿದರು.
ಕ್ಷೇತ್ರದಲ್ಲಿ ಕೊಲೆ, ಸುಲಿಗೆ, ದರೋಡೆ, ಗೂಂಡಾಗಿರಿ ಸೇರಿದಂತೆ ಕಾನೂನುಬಾಹಿರ ಚಟುವಟಿಕೆಗಳು ಹೆಚ್ಚಾಗಿವೆ. ಓಸಿ–ಮಟ್ಕಾ, ಇಸ್ಪೀಟ್ ಸೇರಿದಂತೆ ಅಕ್ರಮ ದಂಧೆಗಳು ಹಾಗೂ ಗಾಂಜಾ ಮತ್ತಿತರ ಮಾದಕ ವಸ್ತುಗಳ ಮಾರಾಟವೂ ನಡೆಯುತ್ತಿದೆ. ಇವುಗಳ ವಿರುದ್ಧ ಪೊಲೀಸ್ ಇಲಾಖೆ ಪರಿಣಾಮಕಾರಿ ಕ್ರಮ ಕೈಗೊಳ್ಳುವಲ್ಲಿ ವಿಫಲವಾಗಿದೆ ಎಂದು ದೂರಿದರು.
ತಪ್ಪು ಮಾಡಿದವರ ವಿರುದ್ಧ ಕ್ರಮ ಕೈಗೊಳ್ಳುವ ಬದಲು ತಪ್ಪು ಮಾಡದವರ ವಿರುದ್ಧ ಪ್ರಕರಣ ದಾಖಲಿಸಲಾಗುತ್ತಿದೆ. ಕಾನೂನು ಪಾಲನೆ ಮಾಡಬೇಕಾದ ಪೊಲೀಸ್ ಅಧಿಕಾರಿಗಳು ರಾಜಕೀಯ ಒತ್ತಡಕ್ಕೆ ಒಳಗಾಗಿ ಕರ್ತವ್ಯ ನಿರ್ವಹಿಸುತ್ತಿದ್ದಾರೆ ಎಂದು ಪ್ರತಿಭಟನಾಕಾರರು ಆರೋಪಿಸಿದರು.
ಕೆರೆ, ಗೋಮಾಳ ಸೇರಿದಂತೆ ಸರ್ಕಾರಿ ಜಾಗಗಳನ್ನು ಅಕ್ರಮವಾಗಿ ಒತ್ತುವರಿ ಮಾಡಿಕೊಂಡು, ನಂತರ ತಮಗೆ ಬೇಕಾದವರಿಗೆ ಮಂಜೂರು ಮಾಡಲಾಗುತ್ತಿದೆ. ಇಂತಹ ಅಕ್ರಮಗಳಲ್ಲಿ ಅಧಿಕಾರಿಗಳು ಹಾಗೂ ಸಿಬ್ಬಂದಿ ಭಾಗಿಯಾಗಿರುವ ಆರೋಪಗಳ ಕುರಿತು ಉನ್ನತ ಮಟ್ಟದ ತನಿಖೆ ನಡೆಸಿ ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದರು.
ಪೊಲೀಸ್ ಉಮೇಶ್ ಹಾಗೂ ಅವರ ಅಣ್ಣನ ಮಗನ ವಿರುದ್ಧ ದಾಖಲಿಸಿರುವ ಪ್ರಕರಣಗಳನ್ನು ಕೂಡಲೇ ಹಿಂಪಡೆಯಬೇಕು. ಕ್ಷೇತ್ರದಲ್ಲಿ ನಡೆಯುತ್ತಿರುವ ನಕಲಿ ನಿವೇಶನ ದಾಖಲೆಗಳ ಸೃಷ್ಟಿ ಹಾಗೂ ಗೂಂಡಾಗಿರಿಗೆ ಕಡಿವಾಣ ಹಾಕಬೇಕು. ಜಿಲ್ಲಾ ಪೊಲೀಸ್ ಅಧೀಕ್ಷಕರು ಪ್ರತಿಭಟನಾ ಸ್ಥಳಕ್ಕೆ ಖುದ್ದಾಗಿ ಭೇಟಿ ನೀಡಿ ಪ್ರತಿಭಟನಾಕಾರರ ಅಹವಾಲು ಸ್ವೀಕರಿಸಬೇಕು ಎಂದು ಒತ್ತಾಯಿಸಿದರು.
ಧರಣಿಯಲ್ಲಿ ಜೆಡಿಎಸ್ ಮುಖಂಡರಾದ ಶಾರದ ಅಪ್ಪಾಜಿ, ಆರ್. ಕರುಣಾಮೂರ್ತಿ, ಎಂ.ಎ. ಅಜಿತ್, ಡಿ. ಆನಂದ್, ಮಧುಸೂದನ್, ತಿಮ್ಮೇಗೌಡ, ರೂಪಾವತಿ, ಮೋಹನ್‌ರಾವ್, ಮಂಜುಳಾ ಸುಬ್ಬಣ್ಣ, ಅರುಣ್ ಕುಮಾರ್, ಎನ್. ರಾಮಕೃಷ್ಣ, ಎಚ್.ಬಿ. ರವಿಕುಮಾರ್, ಗುಣಶೇಖರ್, ಸಾವಿತಮ್ಮ ಪುಟ್ಟೇಗೌಡ, ನಿರಂಜನ, ಅಜ್ಮಲ್, ಧರ್ಮರಾಜ್, ಧರ್ಮೇಗೌಡ, ಜಯರಾಮ್, ಸಂಜೀವ ಕುಮಾರ್, ಭಾಗ್ಯಮ್ಮ, ವಿಶಾಲಾಕ್ಷಿ ಸೇರಿದಂತೆ ಹಲವರು ಹಾಗೂ ಬಿಜೆಪಿ ಮುಖಂಡರಾದ ಕೆ.ಎಚ್. ತೀರ್ಥಯ್ಯ, ಜಿ. ಧರ್ಮಪ್ರಸಾದ್, ಮಂಗೋಟೆ ರುದ್ರೇಶ್, ಚನ್ನೇಶ್, ರಘುರಾವ್, ಗೋಕುಲ್ ಕೃಷ್ಣ, ರಾಜಶೇಖರ ಉಪ್ಪಾರ, ಎಂ. ಮಂಜುನಾಥ್, ಪೇಪರ್ ಸುರೇಶ್, ಲಕ್ಷ್ಮಣ್, ದೇವರಾಜ್ ಸೇರಿದಂತೆ ವಿವಿಧ ಸಂಘಟನೆಗಳ ಪ್ರಮುಖರು ಹಾಗೂ ಕಾರ್ಯಕರ್ತರು ಪಾಲ್ಗೊಂಡಿದ್ದರು.
