ಶಿವಮೊಗ್ಗ: ಸಚಿವ ಮಧು ಬಂಗಾರಪ್ಪ ಅವರ ಆಪ್ತರೊಬ್ಬರು ಶಿವಮೊಗ್ಗ–ಭದ್ರಾವತಿ ನಗರಾಭಿವೃದ್ಧಿ ಪ್ರಾಧಿಕಾರದ ಆಯುಕ್ತರ ಕಚೇರಿಗೆ ತೆರಳಿ ₹25 ಲಕ್ಷ ಲಂಚ ಕೇಳಿದ್ದಾರೆ ಎಂಬ ಆರೋಪದ ಹಿನ್ನೆಲೆಯಲ್ಲಿ ಸಚಿವರ ಪಾತ್ರದ ಬಗ್ಗೆಯೂ ತನಿಖೆ ನಡೆಸಬೇಕು. ಈ ಹಿನ್ನೆಲೆಯಲ್ಲಿ ಮಧು ಬಂಗಾರಪ್ಪ ಅವರು ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಬೇಕು ಎಂದು ಮಾಜಿ ಶಾಸಕ ಕೆ.ಬಿ. ಪ್ರಸನ್ನಕುಮಾರ್ ಒತ್ತಾಯಿಸಿದರು.
ಮಂಗಳವಾರ ಪತ್ರಿಕಾಭವನದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಸಚಿವರ ಆಪ್ತರು ಅಧಿಕಾರಿಯೊಬ್ಬರಿಗೆ ಲಂಚ ಕೇಳಿದ್ದಾರೆ ಎಂಬ ಆರೋಪ ಗಂಭೀರವಾಗಿದ್ದು, ಇದರ ಹಿಂದೆ ಸಚಿವರ ಪಾತ್ರವಿದೆಯೇ ಎಂಬುದನ್ನು ತನಿಖೆ ಮೂಲಕ ಸ್ಪಷ್ಟಪಡಿಸಬೇಕು ಎಂದರು.
ಲೋಕಾಯುಕ್ತರು ಈ ಆರೋಪವನ್ನು ಸ್ವಯಂಪ್ರೇರಿತವಾಗಿ ಪರಿಗಣಿಸಿ ತನಿಖೆ ನಡೆಸಬೇಕು ಎಂದು ಆಗ್ರಹಿಸಿದ ಅವರು, ಆರೋಪದ ಹಿನ್ನೆಲೆಯಲ್ಲಿ ಸಚಿವರು ನೈತಿಕ ಹೊಣೆ ಹೊತ್ತು ರಾಜೀನಾಮೆ ನೀಡಬೇಕು ಎಂದು ಒತ್ತಾಯಿಸಿದರು.
ಸಚಿವರಾದ ಬಳಿಕ ಜಿಲ್ಲೆಗೆ ಆಡಳಿತ ಭವನ ನಿರ್ಮಿಸುವುದಾಗಿ ಹೇಳಿದ್ದರೂ ಮೂರು ಬಜೆಟ್‌ಗಳು ಕಳೆದರೂ ಅನುದಾನ ಬಿಡುಗಡೆಯಾಗಿಲ್ಲ. ಜಿಲ್ಲೆಯ ಯಾವುದೇ ತಾಲೂಕನ್ನು ಬರಪೀಡಿತ ಎಂದು ಘೋಷಿಸುವಲ್ಲಿಯೂ ವಿಫಲರಾಗಿದ್ದಾರೆ ಎಂದು ದೂರಿದರು.
ಇತ್ತೀಚಿನ ಅತಿವೃಷ್ಟಿಯಿಂದ ಜಿಲ್ಲೆಯ ಹಲವು ತಾಲೂಕುಗಳಲ್ಲಿ ಅಡಿಕೆ ಹಾಗೂ ತೆಂಗಿನ ಮರಗಳು ಹಾನಿಗೊಳಗಾಗಿದ್ದು, ರೈತರಿಗೆ ಸೂಕ್ತ ಪರಿಹಾರ ದೊರಕಿಸುವ ನಿಟ್ಟಿನಲ್ಲಿ ಅಗತ್ಯ ಕ್ರಮ ಕೈಗೊಂಡಿಲ್ಲ ಎಂದು ಅವರು ಆರೋಪಿಸಿದರು.
ಸುದ್ದಿಗೋಷ್ಠಿಯಲ್ಲಿ ನರಸಿಂಹ ಗಂಧದಮನೆ, ದೀಪಕ್ ಸಿಂಗ್, ಮಂಜುನಾಥ, ನಾಗೇಶ್, ಸಂಗಯ್ಯ, ಸುನೀಲ್, ರಘು ಹಾಗೂ ವೆಂಕಟೇಶ್ ಉಪಸ್ಥಿತರಿದ್ದರು.
