Trending

ದೆವ್ವ ಬಿಡಿಸುವ ನೆಪದಲ್ಲಿ ಮಹಿಳೆ ಮೇಲೆ ಅತ್ಯಾಚಾರ : ಬಂಧನ

Spread the love

ಚಿಕ್ಕಮಗಳೂರು : ದೆವ್ವ ಬಿಡಿಸುವ ನೆಪದಲ್ಲಿ ಹಾಸನ ಮೂಲದ ಮಹಿಳೆಯ ಮೇಲೆ ನಿರಂತರ ಅತ್ಯಾಚಾರ ಎಸಗಿದ ಆರೋಪದಡಿ ತಲೆಮರೆಸಿಕೊಂಡಿದ್ದ ಸತೀಶ್ ಪಾತ್ರಿಯನ್ನು ಪೊಲೀಸರು ಬೆಂಗಳೂರಿನ ಜೆ.ಪಿ. ನಗರದಲ್ಲಿ ಬಂಧಿಸಿದ್ದಾರೆ.

ಕೊಪ್ಪ ತಾಲೂಕಿನ ಮೇಕನಹಡ್ಲು ಗ್ರಾಮದ ದುರ್ಗಾಪರಮೇಶ್ವರಿ ದೇವಸ್ಥಾನದ ಬಳಿ ಹಾಗೂ ತೀರ್ಥಹಳ್ಳಿ ತಾಲೂಕಿನ ಕುದುರೆಗುಂಡಿಗೆ ಕರೆದೊಯ್ದು ತನ್ನ ಮೇಲೆ ಅತ್ಯಾಚಾರ ಎಸಗಿದ್ದಾನೆ ಎಂದು ಮಹಿಳೆ ಆರೋಪಿಸಿದ್ದಾರೆ. ಈ ಸಂಬಂಧ ಸಂತ್ರಸ್ತೆ ಕೊಪ್ಪ ಮತ್ತು ಎನ್.ಆರ್. ಪುರ ಪೊಲೀಸ್ ಠಾಣೆಗಳಲ್ಲಿ ದೂರು ದಾಖಲಿಸಿದ್ದರು.

ಪ್ರಕರಣ ದಾಖಲಾಗುತ್ತಿದ್ದಂತೆ ಆರೋಪಿ ಸತೀಶ್ ಪಾತ್ರಿ ತಲೆಮರೆಸಿಕೊಂಡಿದ್ದ. ಇದೀಗ ಕೊಪ್ಪ ಠಾಣೆ ಪೊಲೀಸರು ಬೆಂಗಳೂರಿನಲ್ಲಿ ಆತನನ್ನು ಬಂಧಿಸಿದ್ದು, ಮುಂದಿನ ಕಾನೂನು ಕ್ರಮ ಕೈಗೊಂಡಿದ್ದಾರೆ.

ಸಂತ್ರಸ್ತೆಯ ದೂರಿನ ಮೇರೆಗೆ ಎನ್.ಆರ್. ಪುರ ಪೊಲೀಸ್ ಠಾಣೆಯಲ್ಲಿ ಮೌಢ್ಯ ಪ್ರತಿಬಂಧಕ ಕಾಯ್ದೆಯಡಿ ಹಾಗೂ ಕೊಪ್ಪ ಪೊಲೀಸ್ ಠಾಣೆಯಲ್ಲಿ ಅತ್ಯಾಚಾರ ಪ್ರಕರಣ ದಾಖಲಿಸಲಾಗಿದೆ.

ಇದೇ ವ್ಯಕ್ತಿ ಈ ಹಿಂದೆ ಅಪ್ರಾಪ್ತ ಬಾಲಕಿಯೊಬ್ಬಳಿಗೆ ಭೂತ ಬಿಡಿಸುವ ನೆಪದಲ್ಲಿ ಬಲವಂತವಾಗಿ ಕೋಳಿ ರಕ್ತ ಕುಡಿಯುವಂತೆ ಒತ್ತಾಯಿಸಿದ್ದಾನೆ ಎಂಬ ಆರೋಪವೂ ಕೇಳಿಬಂದಿತ್ತು. ಈ ಘಟನೆಗೆ ಸಂಬಂಧಿಸಿದ ವಿಡಿಯೋಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದವು. ಇದರಿಂದ ಕರಾವಳಿ ಹಾಗೂ ಮಲೆನಾಡು ಭಾಗದಲ್ಲಿ ವ್ಯಾಪಕ ಆಕ್ರೋಶ ವ್ಯಕ್ತವಾಗಿತ್ತು.

ಪ್ರಕರಣದ ಕುರಿತು ಪೊಲೀಸರು ಮುಂದಿನ ತನಿಖೆ ಕೈಗೊಂಡಿದ್ದಾರೆ.

[pj-news-ticker]