ಶಿವಮೊಗ್ಗ: ನಗರದ ಶ್ರೀರಾಮಪುರ ರಿಂಗ್ ರಸ್ತೆಯಲ್ಲಿ ವಾಕಿಂಗ್ ಮಾಡುತ್ತಿದ್ದ ವೇಳೆ ಕಾರು ಡಿಕ್ಕಿಯಾಗಿ ಗಂಭೀರವಾಗಿ ಗಾಯಗೊಂಡಿದ್ದ ಶಾಲಾ ಶಿಕ್ಷಕಿ ಮೃತಪಟ್ಟಿದ್ದಾರೆ.
ಶಿವಮೊಗ್ಗದ ಶಕ್ತಿಧಾಮ ಲೇಔಟ್ ನಿವಾಸಿ, ಪ್ರೊಫೆಸರ್ ಅವೀಶ್ ಎಸ್.ಟಿ. ಅವರ ಪತ್ನಿ ರೂಪಾ (41) ಮೃತ ಶಿಕ್ಷಕಿ.
ಅ. 11ರಂದು ಬೆಳಿಗ್ಗೆ ರೂಪಾ ಅವರು ತಮ್ಮ ಮಗ ಪ್ರತೀಕ್ ಜೊತೆ ಶ್ರೀರಾಮಪುರ ರಿಂಗ್ ರಸ್ತೆಯಲ್ಲಿ ವಾಕಿಂಗ್ ಮಾಡುತ್ತಿದ್ದಾಗ, ಶಿವಮೊಗ್ಗದಿಂದ ಸಾಗರದ ಕಡೆಗೆ ತೆರಳುತ್ತಿದ್ದ ಬಿಳಿ ಬಣ್ಣದ ಕಾರು ಗಂಗಮ್ಮ ದೇವಿ ದೇವಸ್ಥಾನದ ಮುಂಭಾಗದಲ್ಲಿ ಹಿಂದಿನಿಂದ ಡಿಕ್ಕಿ ಹೊಡೆದಿದೆ.
ಡಿಕ್ಕಿಯ ರಭಸಕ್ಕೆ ರೂಪಾ ಅವರ ತಲೆ, ಬೆನ್ನು ಹಾಗೂ ಭುಜದ ಭಾಗದಲ್ಲಿ ತೀವ್ರ ಗಾಯಗಳಾಗಿದ್ದವು. ತಕ್ಷಣ ಸ್ಥಳೀಯರು ಅವರನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಿದ್ದರು. ಆದರೆ, ಚಿಕಿತ್ಸೆ ಫಲಕಾರಿಯಾಗದೆ ಸೋಮವಾರ ಬೆಳಿಗ್ಗೆ ಮೃತಪಟ್ಟಿದ್ದಾರೆ.
ಚಾಲಕನನ್ನು ಹಿಡಿದು ಪೊಲೀಸರಿಗೆ ಒಪ್ಪಿಸಿದ ಸಾರ್ವಜನಿಕರು
ಅಪಘಾತದ ಬಳಿಕ ಕಾರು ನಿಲ್ಲಿಸದೆ ಪರಾರಿಯಾಗಲು ಯತ್ನಿಸಿದ ಚಾಲಕನನ್ನು ಸಾರ್ವಜನಿಕರು ಬೆನ್ನಟ್ಟಿ ಆಯನೂರಿನಿಂದ ಘಟನೆ ನಡೆದ ಸ್ಥಳಕ್ಕೆ ಕರೆತಂದಿದ್ದಾರೆ. ಬಳಿಕ ಆತನನ್ನು ಹಿಡಿದು ಪೊಲೀಸರಿಗೆ ಒಪ್ಪಿಸಿದ್ದಾರೆ.
ಈ ಸಂಬಂಧ ತುಂಗಾನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ಕೈಗೊಂಡಿದ್ದಾರೆ.
