ನಗರದ ಪತ್ರಿಕಾ ಭವನದಲ್ಲಿ ಗುರುವಾರ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ರಾಜ್ಯದಲ್ಲಿ ಶೇ.82ರಷ್ಟು ಬೆಳೆ ನಾಶವಾಗಿದೆ ಎಂದು ಕಂದಾಯ ಸಚಿವರೇ ತಿಳಿಸಿದ್ದಾರೆ. ಬೆಳೆ ನಷ್ಟ ಅನುಭವಿಸಿರುವ ರೈತರಿಗೆ ರಾಜ್ಯ ವಿಪತ್ತು ಪರಿಹಾರ ನಿಧಿ (ಎಸ್ಡಿಆರ್ಎಫ್) ಅಡಿ ಎಕರೆಗೆ ₹25 ಸಾವಿರ ಪರಿಹಾರ ನೀಡಬೇಕು ಎಂದು ಒತ್ತಾಯಿಸಲಾಗಿತ್ತು. ಆದರೆ, ಸರ್ಕಾರ ಕೇವಲ ₹2,500 ಪರಿಹಾರ ಘೋಷಿಸಿದ್ದು, ಆ ಹಣವೂ ರೈತರ ಖಾತೆಗೆ ಜಮೆಯಾಗಿಲ್ಲ ಎಂದು ಆರೋಪಿಸಿದರು.
ರೈತರ ಸಮಸ್ಯೆಗಳ ಕುರಿತು ಚರ್ಚಿಸಲು ವಿಶೇಷ ಅಧಿವೇಶನ ಕರೆಯಬೇಕು. ಆರ್ಥಿಕ ಸಂಕಷ್ಟದ ನೆಪದಲ್ಲಿ ಜನರ ಸಮಸ್ಯೆಗಳನ್ನು ನಿರ್ಲಕ್ಷಿಸದೆ, ಬೆಳೆ ನಷ್ಟ ಅನುಭವಿಸಿರುವ ರೈತರಿಗೆ ತಕ್ಷಣ ಪರಿಹಾರ ಒದಗಿಸಬೇಕು ಎಂದು ಆಗ್ರಹಿಸಿದರು.
ಮೀಸಲಾತಿ ವಿಚಾರದಲ್ಲಿ ಸರ್ಕಾರದ ವಿರುದ್ಧ ಟೀಕೆ
ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳಿಗೆ ಜನಸಂಖ್ಯೆಗೆ ಅನುಗುಣವಾಗಿ ಮೀಸಲಾತಿ ಹೆಚ್ಚಿಸಬೇಕೆಂಬುದು ಹಲವು ವರ್ಷಗಳ ಹೋರಾಟವಾಗಿತ್ತು. ಬಸವರಾಜ ಬೊಮ್ಮಾಯಿ ನೇತೃತ್ವದ ಸರ್ಕಾರದ ಅವಧಿಯಲ್ಲಿ ಪರಿಶಿಷ್ಟ ಜಾತಿಗಳ ಮೀಸಲಾತಿಯನ್ನು ಶೇ.15ರಿಂದ 17ಕ್ಕೆ ಹಾಗೂ ಪರಿಶಿಷ್ಟ ಪಂಗಡಗಳ ಮೀಸಲಾತಿಯನ್ನು ಶೇ.3ರಿಂದ 7ಕ್ಕೆ ಹೆಚ್ಚಿಸುವ ತೀರ್ಮಾನ ಕೈಗೊಳ್ಳಲಾಗಿತ್ತು. ಆದರೆ, ಪ್ರಸ್ತುತ ಸರ್ಕಾರ ನ್ಯಾಯಾಲಯದಲ್ಲಿ ಈ ನಿರ್ಧಾರವನ್ನು ಸಮರ್ಥಿಸಿಕೊಳ್ಳುವಲ್ಲಿ ವಿಫಲವಾಗಿದೆ ಎಂದು ದೂರಿದರು.
ರಾಜ್ಯದಲ್ಲಿ ದಲಿತರಿಗೆ ನ್ಯಾಯ ಒದಗಿಸುವಲ್ಲಿ ಸರ್ಕಾರ ಎಡವಿದೆ ಎಂದು ಆರೋಪಿಸಿದ ಅವರು, ದಲಿತರು, ಅಂಗವಿಕಲರು, ವೃದ್ಧರು ಹಾಗೂ ವಿಧವೆಯರಿಗೆ ನೀಡುವ ಪಿಂಚಣಿ ಮತ್ತು ಮಾಸಿಕ ನೆರವು ಕಳೆದ ಆರು–ಏಳು ತಿಂಗಳಿಂದ ಸ್ಥಗಿತಗೊಂಡಿದೆ ಎಂದು ಹೇಳಿದರು. ಸಾಮಾಜಿಕ ಭದ್ರತಾ ಯೋಜನೆಗಳ ಫಲಾನುಭವಿಗಳಿಗೆ ಸಕಾಲದಲ್ಲಿ ಹಣ ಪಾವತಿಸಬೇಕು ಎಂದು ಒತ್ತಾಯಿಸಿದರು.
ಚುನಾವಣೆಗಳಲ್ಲಿ ಕಾಂಗ್ರೆಸ್ಗೆ ಹಿನ್ನಡೆ
ರಾಜ್ಯದಲ್ಲಿ ನಡೆದ ನಾಲ್ಕು ವಿಧಾನ ಪರಿಷತ್ ಹಾಗೂ ಶಿಕ್ಷಕರ ಕ್ಷೇತ್ರಗಳ ಚುನಾವಣೆಗಳಲ್ಲಿ ಕಾಂಗ್ರೆಸ್ಗೆ ಹಿನ್ನಡೆಯಾಗಿದೆ. ಇದು ಸರ್ಕಾರದ ಆಡಳಿತದ ಬಗ್ಗೆ ಜನರಲ್ಲಿರುವ ಅಸಮಾಧಾನವನ್ನು ಪ್ರತಿಬಿಂಬಿಸುತ್ತದೆ ಎಂದು ಅಭಿಪ್ರಾಯಪಟ್ಟರು.
ಎಸ್ಐಆರ್, ಇವಿಎಂ ಬಳಕೆ ಹಾಗೂ ನ್ಯಾಯಾಲಯಗಳ ತೀರ್ಪುಗಳಿಗೆ ಸಂಬಂಧಿಸಿದ ವಿಚಾರಗಳನ್ನು ಪ್ರಸ್ತಾಪಿಸಿದ ಅವರು, ಜನರ ಸಮಸ್ಯೆಗಳಿಗೆ ಆದ್ಯತೆ ನೀಡುವ ಬದಲು ಕಾಂಗ್ರೆಸ್ ಸರ್ಕಾರ ರಾಜಕೀಯ ವಿವಾದಗಳಲ್ಲಿ ತೊಡಗಿದೆ ಎಂದು ಟೀಕಿಸಿದರು.
ಸುದ್ದಿಗೋಷ್ಠಿಯಲ್ಲಿ ವಿಧಾನ ಪರಿಷತ್ ಸದಸ್ಯ ಡಾ. ಧನಂಜಯ ಸರ್ಜಿ, ಬಿಜೆಪಿ ಜಿಲ್ಲಾ ಘಟಕದ ಅಧ್ಯಕ್ಷ ಕೆ.ಎನ್. ಜಗದೀಶ್, ಜಿಲ್ಲಾ ವಕ್ತಾರ ಎಸ್.ಎಸ್. ಜ್ಯೋತಿಪ್ರಕಾಶ, ಹರಿಕೃಷ್ಣ, ಬಳ್ಳೇಕೆರೆ ಸಂತೋಷ್, ಮಾಲತೇಶ್, ರಾಮು ಕೋಹಳ್ಳಿ, ಹರೀಶ್, ಸಿದ್ದಲಿಂಗಪ್ಪ, ಪೆರಿಮಾಳ್, ಲಿಂಗರಾಜ್ ಹಾಗೂ ಚಂದ್ರಶೇಖರ ಉಪಸ್ಥಿತರಿದ್ದರು.
