Trending

ಶಿವಮೊಗ್ಗ: ಕೆಎಸ್‌ಒಯು ಪರೀಕ್ಷೆಯಲ್ಲಿ ಸಾಮೂಹಿಕ ನಕಲು ಆರೋಪ : ಪ್ರಾದೇಶಿಕ ನಿರ್ದೇಶಕ ಬಿ.ಎಂ. ಸ್ವಾಮಿ ಸೇರಿದಂತೆ ಸಿಬ್ಬಂದಿ ವಿರುದ್ಧ ದೂರು ದಾಖಲು

Spread the love

ಶಿವಮೊಗ್ಗ: ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾಲಯದ (ಕೆಎಸ್‌ಒಯು) ಶಿವಮೊಗ್ಗ ಪ್ರಾದೇಶಿಕ ಕೇಂದ್ರದಲ್ಲಿ ನಡೆದ ಪರೀಕ್ಷೆಯಲ್ಲಿ ಸಾಮೂಹಿಕ ನಕಲಿಗೆ ಅವಕಾಶ ನೀಡಿದ ಆರೋಪಕ್ಕೆ ಸಂಬಂಧಿಸಿದಂತೆ ಪ್ರಾದೇಶಿಕ ನಿರ್ದೇಶಕ ಬಿ.ಎಂ. ಸ್ವಾಮಿ ಸೇರಿದಂತೆ ಸಂಬಂಧಪಟ್ಟ ಸಿಬ್ಬಂದಿ ವಿರುದ್ಧ ತುಂಗಾನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.

ಪರೀಕ್ಷಾ ಕೇಂದ್ರದಲ್ಲಿ ವಿದ್ಯಾರ್ಥಿಗಳು ಮೊಬೈಲ್ ಫೋನ್ ಹಾಗೂ ಪುಸ್ತಕಗಳನ್ನು ಬಳಸಿ ಸಾಮೂಹಿಕವಾಗಿ ನಕಲು ಮಾಡುತ್ತಿದ್ದರೂ ಅಧಿಕಾರಿಗಳು ಅದಕ್ಕೆ ಅವಕಾಶ ನೀಡಿದ್ದಾರೆ ಎಂಬ ಗಂಭೀರ ಆರೋಪ ಕೇಳಿಬಂದಿತ್ತು. ಈ ಕುರಿತ ದೃಶ್ಯಗಳು ಮಾಧ್ಯಮಗಳಲ್ಲಿ ಪ್ರಸಾರವಾಗಿದ್ದಲ್ಲದೆ, ಸಾಮಾಜಿಕ ಜಾಲತಾಣಗಳಲ್ಲಿಯೂ ವಿಡಿಯೋಗಳು ವೈರಲ್ ಆಗಿ ಸಾರ್ವಜನಿಕ ವಲಯದಲ್ಲಿ ಚರ್ಚೆಗೆ ಕಾರಣವಾಗಿದ್ದವು.

ಈ ಹಿನ್ನೆಲೆಯಲ್ಲಿ ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾಲಯದ ಕುಲಸಚಿವ ಪ್ರೊ. ಎಂ.ಪಿ. ಸದಾಶಿವ ಅವರು ತುಂಗಾನಗರ ಪೊಲೀಸ್ ಠಾಣೆಗೆ ದೂರು ಸಲ್ಲಿಸಿದ್ದಾರೆ. ಪರೀಕ್ಷೆಯಲ್ಲಿ ನಡೆದಿರುವ ಅಕ್ರಮಗಳಿಗೆ ಪ್ರಾದೇಶಿಕ ನಿರ್ದೇಶಕ ಬಿ.ಎಂ. ಸ್ವಾಮಿ ಸೇರಿದಂತೆ ಸಂಬಂಧಪಟ್ಟ ಸಿಬ್ಬಂದಿ ಸಾಥ್ ನೀಡಿದ್ದಾರೆ ಎಂಬ ಆರೋಪದ ಕುರಿತು ಸಮಗ್ರ ತನಿಖೆ ನಡೆಸುವಂತೆ ದೂರಿನಲ್ಲಿ ಮನವಿ ಮಾಡಿದ್ದಾರೆ.

ಈ ಹಿಂದೆ ಪರೀಕ್ಷೆಯ ಮುಖ್ಯ ಅಧೀಕ್ಷಕರಾಗಿದ್ದ ಬಿ.ಎಂ. ಸ್ವಾಮಿ ಅವರನ್ನು ಘಟನೆಗೆ ಸಂಬಂಧಿಸಿದಂತೆ ಆ ಹುದ್ದೆಯಿಂದ ವಜಾಗೊಳಿಸಲಾಗಿತ್ತು. ಬಳಿಕ ಅವರನ್ನು ಅಮಾನತುಗೊಳಿಸುವ ಕ್ರಮವನ್ನೂ ಕೈಗೊಳ್ಳಲಾಗಿತ್ತು ಎಂದು ತಿಳಿದುಬಂದಿದೆ.

ಸದ್ಯ ಕುಲಸಚಿವರು ನೀಡಿರುವ ದೂರಿನ ಆಧಾರದ ಮೇಲೆ ತುಂಗಾನಗರ ಠಾಣೆ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದು, ಸಾಮೂಹಿಕ ನಕಲು ಆರೋಪ ಹಾಗೂ ಇದರಲ್ಲಿ ಭಾಗಿಯಾಗಿರುವವರ ಪಾತ್ರದ ಕುರಿತು ತನಿಖೆ ಮುಂದುವರಿಸಿದ್ದಾರೆ.

[pj-news-ticker]