ಭದ್ರಾವತಿ: ಕನ್ನಡ ಭಾಷೆ, ಸಾಹಿತ್ಯ, ಸಂಸ್ಕೃತಿ ಹಾಗೂ ಸ್ಥಳೀಯ ಸಾಹಿತ್ಯ ಪ್ರತಿಭೆಗಳಿಗೆ ವೇದಿಕೆ ಕಲ್ಪಿಸುವ ಉದ್ದೇಶದಿಂದ ತಾಲೂಕು 11ನೇ ಕನ್ನಡ ಸಾಹಿತ್ಯ ಸಮ್ಮೇಳನವನ್ನು ನವೆಂಬರ್ 14ರ ಶನಿವಾರ ನ್ಯೂಟೌನ್ನ ಮಹಾತ್ಮ ಗಾಂಧಿ ಉದ್ಯಾನವನದ ಮುಂಭಾಗದಲ್ಲಿರುವ ಶ್ರೀರಾಮ ಸಮುದಾಯ ಭವನದಲ್ಲಿ ಆಯೋಜಿಸಲಾಗಿದೆ ಎಂದು ತಾಲೂಕು ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ಎಚ್. ತಿಮ್ಮಪ್ಪ ತಿಳಿಸಿದರು.
ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಸಮ್ಮೇಳನದ ಅಂಗವಾಗಿ ದಿನವಿಡೀ ವಿವಿಧ ಸಾಹಿತ್ಯಿಕ, ಸಾಂಸ್ಕೃತಿಕ ಕಾರ್ಯಕ್ರಮಗಳು ಹಾಗೂ ವಿಚಾರಗೋಷ್ಠಿಗಳನ್ನು ಹಮ್ಮಿಕೊಳ್ಳಲಾಗಿದೆ. ಕನ್ನಡ ಸಾಹಿತ್ಯಾಸಕ್ತರು, ಸಾಹಿತಿಗಳು, ಕವಿಗಳು, ಕಲಾವಿದರು ಸೇರಿದಂತೆ ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಳ್ಳುವಂತೆ ಮನವಿ ಮಾಡಿದರು.
ಅಂದು ಬೆಳಿಗ್ಗೆ 9 ಗಂಟೆಗೆ ತಾಲೂಕು ದಂಡಾಧಿಕಾರಿ ಹಾಗೂ ತಹಸೀಲ್ದಾರ್ ಪ್ರದೀಪ್ ದೇವಗಿರಿ ರಾಷ್ಟ್ರಧ್ವಜಾರೋಹಣ ನೆರವೇರಿಸಲಿದ್ದಾರೆ.
ಪೊಲೀಸ್ ಉಪಾಧೀಕ್ಷಕ ಪ್ರಕಾಶ್ ರಾಥೋಡ್ ನಾಡಧ್ವಜಾರೋಹಣ ಹಾಗೂ ಪರಿಷತ್ ಅಧ್ಯಕ್ಷ ಎಚ್. ತಿಮ್ಮಪ್ಪ ಪರಿಷತ್ ಧ್ವಜಾರೋಹಣ ನೆರವೇರಿಸಲಿದ್ದಾರೆ. ಬೆಳಿಗ್ಗೆ 9.30ಕ್ಕೆ ವಿವಿಧ ಸಾಂಸ್ಕೃತಿಕ ಕಲಾತಂಡಗಳೊಂದಿಗೆ ನಾಡದೇವಿ ಭುವನೇಶ್ವರಿ ಹಾಗೂ ಸಮ್ಮೇಳನಾಧ್ಯಕ್ಷರ ಮೆರವಣಿಗೆ ನಡೆಯಲಿದ್ದು, ನಗರಸಭೆ ಪೌರಾಯುಕ್ತ ಕೆ.ಎನ್. ಹೇಮಂತ್ ಚಾಲನೆ ನೀಡಲಿದ್ದಾರೆ.
ಬೆಳಿಗ್ಗೆ 10 ಗಂಟೆಗೆ ನಡೆಯುವ ವೇದಿಕೆ ಉದ್ಘಾಟನಾ ಸಮಾರಂಭವನ್ನು ಕರ್ನಾಟಕ ಗ್ರಾಮೀಣ ಮೂಲಸೌಕರ್ಯ ಅಭಿವೃದ್ಧಿ ನಿಗಮದ ಅಧ್ಯಕ್ಷ ಹಾಗೂ ಶಾಸಕ ಬಿ.ಕೆ. ಸಂಗಮೇಶ್ವರ್ ಉದ್ಘಾಟಿಸಲಿದ್ದಾರೆ. ಕನ್ನಡ ಸಾಹಿತ್ಯ ಪರಿಷತ್ ಜಿಲ್ಲಾಧ್ಯಕ್ಷ ಡಿ. ಮಂಜುನಾಥ್ ಆಶಯ ನುಡಿಗಳನ್ನಾಡಲಿದ್ದು, ನಿಕಟಪೂರ್ವ ಸಮ್ಮೇಳನಾಧ್ಯಕ್ಷ ಹೊಸಳ್ಳಿ ದಾಳೇಗೌಡ ಉಪಸ್ಥಿತರಿರಲಿದ್ದಾರೆ.
ವೈದ್ಯ ಸಾಹಿತಿ ಡಾ. ಕೃಷ್ಣ ಎಸ್. ಭಟ್ ಸಮ್ಮೇಳನಾಧ್ಯಕ್ಷರಾಗಿ ಅಧ್ಯಕ್ಷೀಯ ನುಡಿಗಳನ್ನಾಡಲಿದ್ದಾರೆ. ಬೆಂಗಳೂರಿನ ಸಾಹಿತಿ ಡಾ. ಗಜಾನನ ಶರ್ಮ, ಸಂಸದ ಬಿ.ವೈ. ರಾಘವೇಂದ್ರ, ಶಿವಮೊಗ್ಗ ಗ್ರಾಮಾಂತರ ಕ್ಷೇತ್ರದ ಶಾಸಕಿ ಶಾರದಾ ಪೂರ್ಯಾನಾಯ್ಕ, ವಿಧಾನ ಪರಿಷತ್ ಸದಸ್ಯರಾದ ಎಸ್.ಎಲ್. ಭೋಜೇಗೌಡ, ಬಲ್ಕೀಶ್ ಬಾನು, ಡಿ.ಎಸ್. ಅರುಣ್, ಡಾ. ಧನಂಜಯ ಸರ್ಜಿ, ಮಾಜಿ ಸದಸ್ಯ ಎಸ್. ರುದ್ರೇಗೌಡ ಹಾಗೂ ಐದು ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ತಾಲೂಕು ಸಮಿತಿ ಅಧ್ಯಕ್ಷ ಬಿ.ಎಸ್. ಗಣೇಶ್ ಸೇರಿದಂತೆ ಹಲವು ಗಣ್ಯರು ಭಾಗವಹಿಸಲಿದ್ದಾರೆ.
ಸಮ್ಮೇಳನದಲ್ಲಿ ಸಾಹಿತ್ಯ ಮತ್ತು ಸಾಮಾಜಿಕ ವಿಚಾರಗಳಿಗೆ ಸಂಬಂಧಿಸಿದಂತೆ ಹಲವು ಗೋಷ್ಠಿಗಳನ್ನು ಆಯೋಜಿಸಲಾಗಿದೆ. ಮಧ್ಯಾಹ್ನ 12 ಗಂಟೆಗೆ ಸಾಹಿತಿ ಡಿ. ನಾಗೋಜಿರಾವ್ ಅಧ್ಯಕ್ಷತೆಯಲ್ಲಿ ಕವಿಗೋಷ್ಠಿ ನಡೆಯಲಿದೆ. ಮಧ್ಯಾಹ್ನ 1.30ಕ್ಕೆ ಮನೋವೈದ್ಯ ಡಾ. ಹರೀಶ್ ದೇಲಂತಬೆಟ್ಟು ಅಧ್ಯಕ್ಷತೆಯಲ್ಲಿ ಸಮ್ಮೇಳನಾಧ್ಯಕ್ಷರ ಬದುಕು ಮತ್ತು ಬರಹ ಕುರಿತ ಎರಡನೇ ಗೋಷ್ಠಿ ಜರುಗಲಿದೆ.
ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ತಾಲೂಕು ಘಟಕದ ಅಧ್ಯಕ್ಷ ಗಂಗಾನಾಯ್ಕ ಗೊಂದಿ ಅಧ್ಯಕ್ಷತೆಯಲ್ಲಿ ರೈತ, ಕಾರ್ಮಿಕ ಮತ್ತು ದಲಿತ ಚಳವಳಿಗಳ ಅವಲೋಕನ ಕುರಿತು ಮೂರನೇ ಗೋಷ್ಠಿ ನಡೆಯಲಿದೆ. ಈ ಗೋಷ್ಠಿಗಳ ಮೂಲಕ ಸಾಹಿತ್ಯ, ಸಾಮಾಜಿಕ ಬದಲಾವಣೆ, ರೈತರ ಬದುಕು, ಕಾರ್ಮಿಕರ ಹಕ್ಕುಗಳು ಹಾಗೂ ದಲಿತ ಚಳವಳಿಗಳ ಕುರಿತು ವಿಚಾರ ವಿನಿಮಯ ನಡೆಯಲಿದೆ.
ಸಂಜೆ 4.30ಕ್ಕೆ ಸಮಾರೋಪ ಸಮಾರಂಭ ನಡೆಯಲಿದ್ದು, ಎಮರಿಟಸ್ ಪ್ರೊಫೆಸರ್ ಡಾ. ವಿಜಯಾದೇವಿ ಹಾಗೂ ದೀಪ್ತಿ ಶ್ರೀಷರ್ಹ ಮುಖ್ಯ ಅತಿಥಿಗಳಾಗಿ ಪಾಲ್ಗೊಳ್ಳಲಿದ್ದಾರೆ.
ಪತ್ರಿಕಾಗೋಷ್ಠಿಯಲ್ಲಿ ಪರಿಷತ್ ಕಾರ್ಯದರ್ಶಿ ಡಿ. ನಾಗೋಜಿರಾವ್, ಸಂಘಟನಾ ಕಾರ್ಯದರ್ಶಿ ಬಿ. ಕಮಲಾಕರ, ಕೋಶಾಧ್ಯಕ್ಷ ಬಿ.ಎಚ್. ಪ್ರಶಾಂತ್, ಹೇಮಾವತಿ ವಿಶ್ವನಾಥ್, ಜೆ.ಎನ್. ಬಸವರಾಜಯ್ಯ, ಆಶಾ ಪುಟ್ಟಸ್ವಾಮಿ, ನಾಗೇಶ್ ಸೇರಿದಂತೆ ಪರಿಷತ್ ಪದಾಧಿಕಾರಿಗಳು ಉಪಸ್ಥಿತರಿದ್ದರು.
