Trending

ಹೊಲಕ್ಕೆ ನುಗ್ಗಿದ ಸಾರಿಗೆ ಬಸ್‌: 40ಕ್ಕೂ ಹೆಚ್ಚು ಪ್ರಯಾಣಿಕರು ಪಾರು

Spread the love

ಕೊಪ್ಪಳ: ತಾಂತ್ರಿಕ ದೋಷದಿಂದ ಚಾಲಕನ ನಿಯಂತ್ರಣ ಕಳೆದುಕೊಂಡ ಸಾರಿಗೆ ಬಸ್‌ವೊಂದು ರಸ್ತೆ ಬದಿಯ ಹೊಲಕ್ಕೆ ನುಗ್ಗಿದ ಘಟನೆ ಜಿಲ್ಲೆಯ ಗಂಗನಾಳ ಗ್ರಾಮದ ಸಮೀಪ ನಡೆದಿದೆ.

ಚಾಲಕನ ಸಮಯಪ್ರಜ್ಞೆ ಹಾಗೂ ಚಾಕಚಕ್ಯತೆಯಿಂದ ಬಸ್‌ನಲ್ಲಿದ್ದ 40ಕ್ಕೂ ಹೆಚ್ಚು ಪ್ರಯಾಣಿಕರು ಪ್ರಾಣಾಪಾಯದಿಂದ ಪಾರಾಗಿದ್ದಾರೆ.

ಕನಕಗಿರಿ ಮಾರ್ಗದಿಂದ ಕೊಪ್ಪಳದತ್ತ ತೆರಳುತ್ತಿದ್ದ ಸಾರಿಗೆ ಬಸ್‌ನಲ್ಲಿ ಶಾಲಾ-ಕಾಲೇಜು ವಿದ್ಯಾರ್ಥಿಗಳು ಸೇರಿದಂತೆ 40ಕ್ಕೂ ಹೆಚ್ಚು ಪ್ರಯಾಣಿಕರಿದ್ದರು.

ಬಸ್ ಗಂಗನಾಳ ಗ್ರಾಮದ ಸಮೀಪ ಸಾಗುತ್ತಿದ್ದ ವೇಳೆ ಏಕಾಏಕಿ ಮುಂಭಾಗದ ಚಕ್ರದ ಕಮಾನ್ ಸ್ಪ್ರಿಂಗ್ ಪಟ್ಟಿಯ ನಟ್ ಕಳಚಿಬಿದ್ದಿದೆ. ಪರಿಣಾಮ ಬಸ್ ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿಯಿಂದ ಕೆಳಗಿಳಿದು ಪಕ್ಕದಲ್ಲಿದ್ದ ಹೊಲಕ್ಕೆ ನುಗ್ಗಿದೆ.

ಆದರೆ, ಬಸ್ ಕಡಿಮೆ ವೇಗದಲ್ಲಿ ಚಲಿಸುತ್ತಿದ್ದ ಕಾರಣ ಸಂಭವಿಸಬಹುದಾಗಿದ್ದ ಭಾರೀ ಅನಾಹುತವೊಂದು ಕೂದಲೆಳೆಯ ಅಂತರದಲ್ಲಿ ತಪ್ಪಿದಂತಾಗಿದೆ.

ಘಟನೆಯಲ್ಲಿ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ. ಬಸ್‌ನಲ್ಲಿದ್ದ ಮೂವರು ಪ್ರಯಾಣಿಕರಿಗೆ ಸಣ್ಣಪುಟ್ಟ ತರಚಿದ ಗಾಯಗಳಾಗಿವೆ ಎಂದು ತಿಳಿದುಬಂದಿದೆ.

ರಕ್ಷಣೆಗೆ ಧಾವಿಸಿದ ಸ್ಥಳೀಯರು

ಬಸ್ ಹೊಲಕ್ಕೆ ನುಗ್ಗುತ್ತಿದ್ದಂತೆ ಸ್ಥಳೀಯ ನಿವಾಸಿಗಳು ಹಾಗೂ ಅದೇ ಮಾರ್ಗದಲ್ಲಿ ಸಂಚರಿಸುತ್ತಿದ್ದ ವಾಹನ ಸವಾರರು ತಕ್ಷಣ ನೆರವಿಗೆ ಧಾವಿಸಿದ್ದಾರೆ. ಬಸ್‌ನಲ್ಲಿದ್ದ ವಿದ್ಯಾರ್ಥಿಗಳು ಹಾಗೂ ಪ್ರಯಾಣಿಕರನ್ನು ಸುರಕ್ಷಿತವಾಗಿ ಹೊರಗೆ ಕರೆತರುವಲ್ಲಿ ಸಹಕರಿಸಿದ್ದಾರೆ.

ತಾಂತ್ರಿಕ ದೋಷ ಕಾಣಿಸಿಕೊಂಡ ಸಂದರ್ಭದಲ್ಲಿ ಚಾಲಕ ತಕ್ಷಣವೇ ಸಮಯಪ್ರಜ್ಞೆಯಿಂದ ವಾಹನದ ವೇಗವನ್ನು ನಿಯಂತ್ರಿಸಿದ್ದರಿಂದ ದೊಡ್ಡ ಅನಾಹುತ ತಪ್ಪಿದೆ. ಚಾಲಕನ ಸಮಯೋಚಿತ ನಿರ್ಧಾರಕ್ಕೆ ಪ್ರಯಾಣಿಕರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

[pj-news-ticker]