Trending

ನ.16 ರಂದು ಭದ್ರಾ ಅಚ್ಚುಕಟ್ಟು ರೈತರ ಬೃಹತ್ ಪ್ರತಿಭಟನೆ

Spread the love

ಶಿವಮೊಗ್ಗ: ಭದ್ರಾ ಅಚ್ಚುಕಟ್ಟು ಪ್ರದೇಶದ ರೈತರ ಬೆಳೆಗಳು, ಜಾನುವಾರುಗಳು ಹಾಗೂ ಕೆರೆ-ಕುಂಟೆಗಳಿಗೆ ತಕ್ಷಣ ನೀರು ಹರಿಸುವಂತೆ ಆಗ್ರಹಿಸಿ ನ.16ರಂದು ಸೋಮವಾರ ಬೆಳಗ್ಗೆ 11 ಗಂಟೆಗೆ ಶಿವಮೊಗ್ಗ ಜಿಲ್ಲಾಧಿಕಾರಿ ಕಚೇರಿ ಎದುರು ಬೃಹತ್ ರೈತರ ಜಾಗೃತಿ ಸಭೆ ಹಾಗೂ ಧರಣಿ ಸತ್ಯಾಗ್ರಹ ಹಮ್ಮಿಕೊಳ್ಳಲಾಗಿದೆ ಎಂದು ರಾಜ್ಯ ರೈತ ಸಂಘದ ಮುಖಂಡ ಕೆ.ಟಿ.ಗಂಗಾಧರ್ ತಿಳಿಸಿದರು.

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಭದ್ರಾ ಎಡದಂಡೆ, ಬಲದಂಡೆ ಹಾಗೂ ಗೋಂದಿ ನಾಲೆಗಳ ವ್ಯಾಪ್ತಿಯಲ್ಲಿ ಬೇಸಿಗೆ ಹಂಗಾಮಿನ ಭತ್ತದ ಬೆಳೆ ಬೆಳೆಯಲು ಒಟ್ಟು 36 ಟಿಎಂಸಿ ನೀರಿನ ಅಗತ್ಯವಿದೆ. ಆದರೆ, ಜಲಾಶಯದ ಅಚ್ಚುಕಟ್ಟು ಪ್ರದೇಶದ ನಾಲೆಗಳಿಗೆ 120 ದಿನ ನೀರು ಹರಿಸಲು ಸುಮಾರು 7 ಟಿಎಂಸಿ ನೀರಿನ ಕೊರತೆಯಿದೆ.

ಇಂತಹ ಸಂದರ್ಭದಲ್ಲಿ ಭದ್ರಾ ಮೇಲ್ದಂಡೆ ಯೋಜನೆಗೆ ಪ್ರಾಯೋಗಿಕವಾಗಿ 3 ಟಿಎಂಸಿ ಹಾಗೂ ಹೆಚ್ಚುವರಿಯಾಗಿ 1 ಟಿಎಂಸಿ ನೀರು ಹರಿಸುವ ನಿರ್ಧಾರ ರೈತರ ಹಿತಾಸಕ್ತಿಗೆ ವಿರುದ್ಧವಾಗಿದೆ ಎಂದು ಆಕ್ಷೇಪಿಸಿದರು.

ಅ.30ರಿಂದ ಭದ್ರಾ ಮೇಲ್ದಂಡೆ ಯೋಜನೆಯ ಅಧೀಕ್ಷಕ ಎಂಜಿನಿಯರ್ ಕಚೇರಿ ಎದುರು ಹಲವು ದಿನಗಳ ಕಾಲ ಅಹೋರಾತ್ರಿ ಧರಣಿ ನಡೆಸಿದರೂ ಸರ್ಕಾರ ತನ್ನ ನಿರ್ಧಾರ ಬದಲಾಯಿಸಿಲ್ಲ. ಇದರಿಂದ ಆಕ್ರೋಶಗೊಂಡ ರೈತರು ಜಲಾಶಯದ ಗೇಟ್‌ಗಳನ್ನು ಮುಚ್ಚುವ ಕಾರ್ಯಕ್ಕೆ ಮುಂದಾಗಿದ್ದರು. ಈ ವೇಳೆ ಪೊಲೀಸರು ಚಳವಳಿಗಾರರನ್ನು ಬಂಧಿಸಿ ನಂತರ ಬಿಡುಗಡೆಗೊಳಿಸಿದ್ದರು ಎಂದು ತಿಳಿಸಿದರು.

ಸರ್ಕಾರದ ನಿರ್ಲಕ್ಷ್ಯ ಖಂಡಿಸಿ ಇದೀಗ ಚಳವಳಿಯನ್ನು ಮತ್ತಷ್ಟು ತೀವ್ರಗೊಳಿಸಲಾಗುತ್ತಿದೆ. ತಾಲೂಕು ಹಾಗೂ ಗ್ರಾಮ ಘಟಕಗಳಲ್ಲಿ ರೈತ ಜಾಗೃತಿ ಸಭೆಗಳನ್ನು ನಡೆಸಿ, ಭದ್ರಾ ಅಚ್ಚುಕಟ್ಟು ಪ್ರದೇಶದಲ್ಲಿ ಬೆಳೆದು ನಿಂತಿರುವ ಅಡಿಕೆ, ಬಾಳೆ, ತೆಂಗು ಸೇರಿದಂತೆ ಇತರೆ ಬೆಳೆಗಳ ರಕ್ಷಣೆ, ಜಾನುವಾರುಗಳ ಕುಡಿಯುವ ನೀರು ಹಾಗೂ ಕೆರೆ-ಕುಂಟೆಗಳನ್ನು ತುಂಬಿಸಲು ನವೆಂಬರ್ ತಿಂಗಳಲ್ಲಿ ಕನಿಷ್ಠ 20 ದಿನ ನೀರು ಹರಿಸಬೇಕೆಂದು ಒತ್ತಾಯಿಸಲಾಗುತ್ತಿದೆ ಎಂದರು.

ಈ ಪ್ರತಿಭಟನೆಯಲ್ಲಿ ಭದ್ರಾ ಅಚ್ಚುಕಟ್ಟು ಪ್ರದೇಶದ ರೈತರು, ಕೃಷಿ ಕೂಲಿ ಕಾರ್ಮಿಕರು, ಯುವಕರು, ಮಹಿಳೆಯರು ಸೇರಿದಂತೆ ಸಾರ್ವಜನಿಕರು ಪಕ್ಷಾತೀತವಾಗಿ ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಹೋರಾಟ ಯಶಸ್ವಿಗೊಳಿಸಬೇಕು ಎಂದು ಮನವಿ ಮಾಡಿದರು.

[pj-news-ticker]