ಹೊನ್ನಾಳಿ: ದಾವಣಗೆರೆ ಜಿಲ್ಲೆಯ ಹೊನ್ನಾಳಿ ತಾಲೂಕಿನ ಅರಬಗಟ್ಟೆ ಗ್ರಾಮದ ಸರ್ಕಾರಿ ಪ್ರೌಢಶಾಲೆಯಲ್ಲಿ 1997-98ನೇ ಸಾಲಿನ ಎಸ್ಎಸ್ಎಲ್ಸಿ ವಿದ್ಯಾರ್ಥಿಗಳಿಂದ ನ.21ರಂದು ಗುರುವಂದನಾ ಹಾಗೂ ಸ್ನೇಹ ಸಮ್ಮಿಲನ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು.
1997-98ನೇ ಸಾಲಿನಲ್ಲಿ ಶಾಲೆಯಲ್ಲಿ ವ್ಯಾಸಂಗ ಮಾಡಿದ 40 ಮಂದಿ ಹಳೆಯ ವಿದ್ಯಾರ್ಥಿ-ವಿದ್ಯಾರ್ಥಿನಿಯರು ಒಗ್ಗೂಡಿ ತಮಗೆ ಅಕ್ಷರಾಭ್ಯಾಸ ಕಲಿಸಿ, ವಿದ್ಯಾದಾನ ಮಾಡಿದ ಎಂಟು ಮಂದಿ ಗುರುಗಳಿಗೆ ಗುರುವಂದನೆ ಸಲ್ಲಿಸಿದರು.
ಕಾರ್ಯಕ್ರಮದಲ್ಲಿ ಶಾಲೆಯ ಪ್ರಸ್ತುತ ಮುಖ್ಯೋಪಾಧ್ಯಾಯರು, ಸಹ ಶಿಕ್ಷಕರು, ಪ್ರೌಢಶಾಲೆಯ ವಿದ್ಯಾರ್ಥಿ-ವಿದ್ಯಾರ್ಥಿನಿಯರು, ಶಾಲಾ ಅಭಿವೃದ್ಧಿ ಸಮಿತಿ ಅಧ್ಯಕ್ಷರು ಹಾಗೂ ಸದಸ್ಯರು, ಗ್ರಾಮ ಪಂಚಾಯಿತಿ ಅಧ್ಯಕ್ಷರು ಮತ್ತು ಸದಸ್ಯರು ಭಾಗವಹಿಸಿದ್ದರು.
ಹಳೆಯ ವಿದ್ಯಾರ್ಥಿಗಳು ತಮ್ಮ ನೆನಪುಗಳನ್ನು ಮೆಲುಕು ಹಾಕಿ, ಗುರುಗಳೊಂದಿಗೆ ಸಂತಸ ಹಂಚಿಕೊಂಡರು. ಇಂತಹ ಕಾರ್ಯಕ್ರಮಗಳು ಪ್ರಸ್ತುತ ವಿದ್ಯಾರ್ಥಿಗಳಿಗೆ ಗುರುಗಳ ಮಹತ್ವ, ಶಿಕ್ಷಣದ ಮೌಲ್ಯ ಹಾಗೂ ಹಳೆಯ ವಿದ್ಯಾರ್ಥಿಗಳ ಸಾಧನೆಯ ಬಗ್ಗೆ ಪ್ರೇರಣೆ ನೀಡುವ ಉದ್ದೇಶ ಹೊಂದಿದ್ದವು.
ಹಳೆಯ ವಿದ್ಯಾರ್ಥಿಗಳು, ಗುರುಗಳು ಹಾಗೂ ಗ್ರಾಮಸ್ಥರ ಸಹಭಾಗಿತ್ವದಲ್ಲಿ ಕಾರ್ಯಕ್ರಮ ಅಭೂತಪೂರ್ವ ಯಶಸ್ಸು ಕಂಡಿತು.
