Trending

ತೆರಿಗೆ ಹಂಚಿಕೆಯಲ್ಲಿ ಕಡೆಗಣಿಸಲು ಕರ್ನಾಟಕವೇನು ಅನ್ಯಾಯ ಮಾಡಿದೆ?: ಸಿಎಂ

Spread the love

ಬೆಂಗಳೂರು:  ಕೇಂದ್ರ ಸರ್ಕಾರದ ತೆರಿಗೆ ಹಂಚಿಕೆ ವಿಚಾರದಲ್ಲಿ ಕರ್ನಾಟಕಕ್ಕೆ ಅನ್ಯಾಯವಾಗುತ್ತಿದ್ದು, ಇದರ ವಿರುದ್ಧ ಹೋರಾಟಕ್ಕೆ ಕನ್ನಡಿಗರೆಲ್ಲರೂ ಧ್ವನಿ ಎತ್ತಬೇಕಾಗಿದೆ. ತೆರಿಗೆ ಹಂಚಿಕೆಯಲ್ಲಿ ಕೇಂದ್ರದ ಎನ್ಡಿಎ ಸರ್ಕಾರ ಕರ್ನಾಟಕಕ್ಕೆ ಮಾಡುತ್ತ ಬಂದಿರುವ ವಿವರಗಳೇ ಸಾಕ್ಷಿ  ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಆರೋಪಿಸಿದ್ದಾರೆ.

ಕರ್ನಾಟಕಕ್ಕೆ ಕೇವಲ 6,498 ಕೋಟಿ ರೂ. ಹಂಚಿಕೆ: 
ಈ ವಿಚಾರವಾಗಿ ಅಂಕಿ ಅಂಶಗಳ ಸಹಿತ ಮಾಧ್ಯಮ ಪ್ರಕಟಣೆ ಬಿಡುಗಡೆಗೊಳಿಸಿರುವ ಸಿಎಂ ಸಿದ್ದರಾಮಯ್ಯ  28 ರಾಜ್ಯಗಳಿಗೆ ಒಟ್ಟು 1,78,193 ಕೋಟಿ ರೂಪಾಯಿ ಬಿಡುಗಡೆಗೊಳಿಸಿರುವ ಕೇಂದ್ರ ಸರ್ಕಾರ, ಕರ್ನಾಟಕಕ್ಕೆ ನೀಡಿರುವುದು ಕೇವಲ 6,498 ಕೋಟಿ ರೂಪಾಯಿ. ಈ ಅನ್ಯಾಯದ ವಿರುದ್ಧ ಜಾತಿ ಧರ್ಮ, ಪಕ್ಷ – ಪಂಥದ ಭೇದವಿಲ್ಲದೆ ಧ್ವನಿ ಎತ್ತುವ ಶಪಥ ಪ್ರತಿಯೊಬ್ಬ ಕನ್ನಡಿಗನೂ ಮಾಡಬೇಕಾಗಿದೆ. ಇಂತಹದ್ದೊಂದು ಪ್ರಮಾಣ ವಚನ ಸ್ವೀಕಾರಕ್ಕೆ ಅನ್ಯಾಯದ ವಿರುದ್ಧ ನ್ಯಾಯದ ಗೆಲುವಿನ ಸಂಕೇತವಾದ ವಿಜಯದಶಮಿಯ ಶುಭ ದಿನ ಸಾಕ್ಷಿಯಾಗಲಿ ಎಂದು ಸಿದ್ದರಾಮಯ್ಯ ಹೇಳಿದ್ದಾರೆ.

ಬಿಮಾರು ಕುಖ್ಯಾತಿಗಳಿಗೇಕೆ ರಾಜ್ಯದ ತೆರಿಗೆ ಪಾಲು?’
ಕರ್ನಾಟಕವನ್ನು ಕಡೆಗಣಿಸುವಂತಹ ಅನ್ಯಾಯವನ್ನು ನಾವೇನು ಮಾಡಿದ್ದೇವೆ? ಎಂದು ಪ್ರತಿಯೊಬ್ಬ ಸ್ವಾಭಿಮಾನಿ ಕನ್ನಡಿಗನೂ ಕೇಂದ್ರ ಸರ್ಕಾರವನ್ನು ಕೇಳಬೇಕಾಗಿದೆ. ಬಿಮಾರು ರಾಜ್ಯಗಳೆಂದೇ ಕುಖ್ಯಾತಿ ಪಡೆದಿರುವ ರಾಜ್ಯಗಳಾದ ಉತ್ತರಪ್ರದೇಶಕ್ಕೆ 31,962 ಕೋಟಿ ರೂ, ಬಿಹಾರಕ್ಕೆ 17,921 ಕೋಟಿ ರೂ, ಮಧ್ಯಪ್ರದೇಶಕ್ಕೆ 13,987 ಕೋಟಿ ರೂ. ಮತ್ತು ರಾಜಸ್ಥಾನಕ್ಕೆ 10,737 ಕೋಟಿ ರೂಪಾಯಿಯಷ್ಟು ತೆರಿಗೆ ಪಾಲನ್ನು ನೀಡಲಾಗಿದೆ. ದುರಾಡಳಿತ ಮತ್ತು ಭ್ರಷ್ಟಾಚಾರದಿಂದಾಗಿ ಅಭಿವೃದ್ಧಿ ಪಥದಲ್ಲಿ ಹಿಮ್ಮುಖವಾಗಿ ಸಾಗುತ್ತಿರುವ ಈ ರಾಜ್ಯಗಳಿಗಾಗಿ ಕನ್ನಡಿಗನ ಬೆವರಗಳಿಕೆ ಯಾಕೆ ಪೋಲಾಗಬೇಕು ಎನ್ನುವುದು ನಮ್ಮ ಪ್ರಶ್ನೆಯಾಗಿದೆ ಎಂದು ಸಿದ್ದರಾಮಯ್ಯ ಉಲ್ಲೇಖಿಸಿದ್ದಾರೆ.

ರಾಜ್ಯಗಳಿಂದ ಸಂಗ್ರಹಿಸುವ ತೆರಿಗೆ ಹಣದಲ್ಲಿ ಉತ್ತರಪ್ರದೇಶಕ್ಕೆ ಶೇ 17.93, ಬಿಹಾರಕ್ಕೆ 10.05, ರಾಜಸ್ಥಾನಕ್ಕೆ 6.02 ಮತ್ತು ಮಧ್ಯಪ್ರದೇಶಕ್ಕೆ 7.85ರಷ್ಟು ಪಾಲು ನೀಡಿದರೆ, ಕರ್ನಾಟಕಕ್ಕೆ ನೀಡುತ್ತಿರುವ ತೆರಿಗೆ ಪಾಲು ಕೇವಲ ಶೇ 3.6. ತೆರಿಗೆ ಹಂಚಿಕೆಗಾಗಿ ನಿಗದಿ ಪಡಿಸಲಾಗಿರುವ ಮಾನದಂಡದಲ್ಲಿಯೇ ಕೇಂದ್ರ ಸರ್ಕಾರದ ಪ್ರಗತಿ ವಿರೋಧಿ ಧೋರಣೆ ಸ್ಪಷ್ಟವಾಗಿದೆ. ಅಭಿವೃದ್ಧಿಶೀಲ ರಾಜ್ಯವನ್ನು ಶಿಕ್ಷಿಸಿ, ದುರಾಡಳಿತ ನಡೆಸುತ್ತಿರುವ ರಾಜ್ಯಗಳನ್ನು ಪುರಸ್ಕರಿಸುವ ತೆರಿಗೆ ಹಂಚಿಕೆ ಮಾನದಂಡವನ್ನೇ ಬದಲಾಯಿಸಬೇಕೆಂದು ನಾವು ಒತ್ತಾಯಿಸುತ್ತಲೇ ಬಂದಿದ್ದರೂ ಕೇಂದ್ರ ಸರ್ಕಾರ ಕಿವುಡಾಗಿದೆ ಎಂದು ಸಿದ್ದರಾಮಯ್ಯ ಆಕ್ರೋಶ ವ್ಯಕ್ತಪಡಿಸಿದ್ದಾರೆ.

[pj-news-ticker]