ಬೆಂಗಳೂರು: ಮಂಡ್ಯದಲ್ಲಿ ನಡೆಯುತ್ತಿರುವಂತ 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಅಧ್ಯಕ್ಷರಾಗಿ ಗೊ.ರು.ಚನ್ನಬಸಪ್ಪ ಅವರನ್ನು ಆಯ್ಕೆ ಮಾಡಲಾಗಿದೆ.
ಮಂಡ್ಯದಲ್ಲಿ ಡಿಸೆಂಬರ್.20, 21, 22ರಂದು ಮಂಡ್ಯದಲ್ಲಿ ಮೂರು ದಿನಗಳ ಕಾಲ 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ ನಡೆಯಲಿದೆ. ಈ ಸಮ್ಮೇಳನಾಧ್ಯಕ್ಷರಾಗಿ ಗೊ.ರು.ಚನ್ನಬಸಪ್ಪ ಅವರನ್ನು ಆಯ್ಕೆ ಮಾಡಲಾಗಿದೆ.
ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲ್ಲೂಕಿನ ಗೊಂಡೇದಹಳ್ಳಿಯಲ್ಲಿ ರುದ್ರಪ್ಪಗೌಡರು-ಅಕ್ಕಮ್ಮ ದಂಪತಿಗಳಿಗೆ ಪುತ್ರರಾಗಿ 18-05-1930ರಲ್ಲಿ ಹುಟ್ಟಿದರು. ವಿದ್ಯಾರ್ಥಿಯಾಗಿದ್ದಾಗಲೇ ಸ್ವಾತಂತ್ರ್ಯ ಹೋರಾಟಕ್ಕೆ ಧುಮುಕಿದ ಇವರು 18ನೇ ವಯಸ್ಸಿನಲ್ಲೇ ಸರ್ಕಾರಿ ಶಾಲೆಯಲ್ಲಿ ಶಿಕ್ಷಕರಾಗಿ ವೃತ್ತಿಗೆ ಸೇರಿದರು. ಸರ್ಕಾರಿ ಸೇವೆಯ ಜತೆಜತೆಗೇ ವಿವಿಧ ಸಂಘಸಂಸ್ಥೆಗಳಿಗಾಗಿ ದುಡಿದರು.
ಗಾಂಧೀ ಗ್ರಾಮದಲ್ಲಿ ಸಮಾಜ ಶಿಕ್ಷಣವನ್ನು ಪಡೆದ ಗೊರುಚ ಅವರು ಭೂದಾನ ಚಳವಳಿ, ವಯಸ್ಕರ ಶಿಕ್ಷಣ, ಸೇವಾದಳಗಳಲ್ಲಿ ಕೆಲಸ ಮಾಡಿದ್ದಾರೆ. ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ಗಳಿಗೆ ಹೆಡ್ಕ್ವಾರ್ಟರ್ಸ್ ಕಮೀಷನರ್ ಆಗಿ ದುಡಿದಿರುವ ಇವರು ಅಖಿಲ ಭಾರತ ಶರಣ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರಾಗಿ ದೀರ್ಘಕಾಲ ಸೇವೆ ಸಲ್ಲಿಸಿದ್ದಾರೆ.
ಪತ್ರಿಕಾವೃತ್ತಿ ಬಲ್ಲ ಇವರು ‘ಜಾನಪದ ಜಗತ್ತು’, `ಪಂಚಾಯತ್ ರಾಜ್ಯ’, `ಕನ್ನಡ ಸಾಹಿತ್ಯ ಪರಿಷತ್ಪತ್ರಿಕೆ’ ಮೊದಲಾದ ಪತ್ರಿಕೆಗಳಿಗೆ ಸಂಪಾದಕರಾಗಿ ವಿಶೇಷ ಸೇವೆ ಸಲ್ಲಿಸಿದ್ದಾರೆ.
1992 ರಿಂದ 1995ರವರೆಗೆ ಕನ್ನಡ ಸಾಹಿತ್ಯ ಪರಿಷತ್ತಿನ 18ನೇ ಅಧ್ಯಕ್ಷರಾಗಿ ಅಪಾರ ಸೇವೆ ಸಲ್ಲಿಸಿದ್ದಾರೆ. ಕೊಪ್ಪಳ (೧೯೯೩), ಮಂಡ್ಯ (೧೯೯೪), ಮುಧೋಳಗಳಲ್ಲಿ (೧೯೯೫) ೬೨, ೬೩, ೬೪ನೇ ಕನ್ನಡ ಸಾಹಿತ್ಯ ಸಮ್ಮೇಳನಗಳನ್ನು ಯಶಸ್ವಿಯಾಗಿ ನಡೆಸಿದ್ದಾರೆ. ಇವರ ಅವಧಿಯಲ್ಲಿ ಅನೇಕ ಮೌಲಿಕ ಗ್ರಂಥಗಳನ್ನು ಪ್ರಕಟಿಸಿದ್ದಾರೆ.
ಅನೇಕ ಸಾಹಿತ್ಯ ಕೃತಿಗಳನ್ನು ರಚಿಸಿರುವ ಇವರ ಕೆಲವು ಕೃತಿಗಳು ಹೀಗಿವೆ : ಕರ್ನಾಟಕ ಪ್ರಗತಿಪಥ, ಸಾಕ್ಷಿಕಲ್ಲು, ಬಾಗೂರು ನಾಗಮ್ಮ, ಗ್ರಾಮಗೀತೆಗಳು, ಕರ್ನಾಟಕ ಜನಪದ ಕಲೆಗಳು, ಹೊನ್ನ ಬಿತ್ತೇವು ನೆಲಕೆಲ್ಲ,ಇತ್ಯಾದಿ.
