Trending

ಶಾಲೆಗಳಲ್ಲಿ ಮಕ್ಕಳಿಂದ ಶೌಚಗೃಹ ಸ್ವಚ್ಛ ಮಾಡಿಸಿದ್ರೆ ಬೀಳುತ್ತೆ ಎಫ್‌ಐಆರ್‌; ಶಿಕ್ಷಣ ಇಲಾಖೆ ಎಚ್ಚರಿಕೆ

Spread the love

ಬೆಂಗಳೂರು: ಶಾಲೆಗಳಲ್ಲಿ ಮಕ್ಕಳಿಂದ ಶೌಚಾಲಯ ಸ್ವಚ್ಛ ಮಾಡಿಸುವ ಪ್ರಕರಣಗಳನ್ನು ರಾಜ್ಯ ಸರ್ಕಾರ ಗಂಭೀರವಾಗಿ ಪರಿಗಣಿಸಿದೆ. ಬೆಂಗಳೂರಿನ ಯಲಹಂಕ ಸರ್ಕಾರಿ ಪ್ರೌಢಶಾಲೆಯಲ್ಲಿ ಮಕ್ಕಳಿಂದ ಶೌಚಗೃಹ ಸ್ವಚ್ಛ ಮಾಡಿಸಿದ ಆರೋಪ ಕೇಳಿಬಂದ ಬೆನ್ನಲ್ಲೇ ಶಿಕ್ಷಣ ಇಲಾಖೆ ಮಹತ್ವದ ಸುತ್ತೋಲೆ ಹೊರಡಿಸಿದೆ. ಶೌಚಗೃಹ ಸ್ವಚ್ಛಗೊಳಿಸುವಂತಹ  ಘಟನೆಗಳು ಮರುಕಳಿಸಿದಲ್ಲಿ ಶಿಕ್ಷಕರ ವಿರುದ್ಧ ಎಫ್‌ಐಆರ್‌ ದಾಖಲಿಸಿ, ಕಠಿಣ ಕ್ರಮ ಜರುಗಿಸುವ ಎಚ್ಚರಿಕೆಯನ್ನು ಇಲಾಖೆ ನೀಡಿದೆ.

ಈ ಬಗ್ಗೆ ಶಾಲಾ ಶಿಕ್ಷಣ ಇಲಾಖೆ ಸುತ್ತೋಲೆ ಹೊರಡಿಸಿದ್ದು, ರಾಜ್ಯದ ಎಲ್ಲಾ ಸರ್ಕಾರಿ ಶಾಲೆಗಳಲ್ಲಿ ವಿದ್ಯಾರ್ಥಿಗಳಿಂದ ಶೌಚಾಲಯಗಳ ಸ್ವಚ್ಛತೆಯನ್ನು ಮಾಡಿಸಬಾರದೆಂದು ಈ ಹಿಂದೆ ಸಂಬಂಧಿಸಿದ ಶಾಲಾ ಶಿಕ್ಷಣ ಇಲಾಖಾಧಿಕಾರಿಗಳು ಮತ್ತು ಸರ್ಕಾರಿ ಪ್ರಾಥಮಿಕ, ಪ್ರೌಢಶಾಲಾ ಮುಖ್ಯ ಶಿಕ್ಷಕರಿಗೆ ಈಗಾಗಲೇ ತಿಳಿಸಲಾಗಿದ್ದರೂ ವಿದ್ಯಾರ್ಥಿಗಳಿಂದ ಶೌಚಾಲಯಗಳ ಸ್ವಚ್ಛತೆಯಲ್ಲಿ ತೊಡಗಿಸಿಕೊಳ್ಳುತ್ತಿರುವ ಬಗ್ಗೆ ಇತ್ತೀಚೆಗೆ ಕೆಲವು ಪ್ರಕರಣಗಳು ಬೆಳಕಿಗೆ ಬಂದಿರುವುದನ್ನು ಇಲಾಖೆಯು ಗಮನಿಸಿದೆ.

ಸರ್ಕಾರದಿಂದ ಮತ್ತು ಇಲಾಖೆಯಿಂದ ಕಾಲ ಕಾಲಕ್ಕೆ ಹೊರಡಿಸಲಾಗುವ ಸೂಚನೆಗಳನ್ನು ಮತ್ತು ನಿರ್ದೇಶನಗಳನ್ನು ಚಾಚೂ ತಪ್ಪದೆ ಪಾಲಿಸುವಂತೆ ಸೂಚನೆಗಳನ್ನು ನೀಡಲಾಗುತ್ತಿದ್ದರೂ ಸೂಚನೆಗಳನ್ನು ಉಲ್ಲಂಘಿಸುತ್ತಿರುವುದು ಗಂಭೀರವಾಗಿ ಪರಿಗಣಿಸಲಾಗಿದೆ.

ಈ ಹಿನ್ನೆಲೆಯಲ್ಲಿ ಮತ್ತೆ ಇಂತಹ ಘಟನೆಗಳು ಮರುಕಳಿಸಿದಲ್ಲಿ ಅಂತವರ ವಿರುದ್ಧ ಇಲಾಖಾ ವತಿಯಿಂದ ನಿಯಮಾನುಸಾರ ಕಠಿಣ ಶಿಸ್ತು ಕ್ರಮಗಳನ್ನು ಜರುಗಿಸಲಾಗುವುದು. ಅಲ್ಲದೆ ಎಫ್‌ಐಆರ್‌ ದಾಖಲಿಸಲಾಗುವುದು ಮತ್ತು ಸಂಬಂಧಿಸಿದ ಶಾಲಾ ಶಿಕ್ಷಣ ಇಲಾಖಾಧಿಕಾರಿಗಳು ಮತ್ತು ಸರ್ಕಾರಿ ಪ್ರಾಥಮಿಕ/ಪ್ರೌಢ ಶಾಲಾ ಮುಖ್ಯ ಶಿಕ್ಷಕರನ್ನೇ ನೇರ ಹೊಣೆಗಾರರನ್ನಾಗಿ ಮಾಡಿ ಶಿಸ್ತು ಕ್ರಮಕ್ಕೆ ಶಿಫಾರಸು ಮಾಡಲಾಗುವುದು. ಇನ್ನು ಶೌಚಾಲಯ ಸ್ವಚ್ಛತೆಯನ್ನು ನಿರ್ವಹಿಸುವ ಕುರಿತು ತಿಳಿಸಿರುವ ಅಂಶಗಳನ್ನು ಕಡ್ಡಾಯವಾಗಿ ಪಾಲಿಸುವಂತೆ ಮತ್ತೊಮ್ಮೆ ಎಚ್ಚರಿಸಲಾಗಿದೆ ಎಂದು ಸುತ್ತೋಲೆಯಲ್ಲಿ ತಿಳಿಸಲಾಗಿದೆ.

[pj-news-ticker]