ಭಾರತ ಮತ್ತು ಪಾಕಿಸ್ತಾನ ನಡುವೆ ಹೆಚ್ಚುತ್ತಿರುವ ಉದ್ವಿಗ್ನತೆಯನ್ನು ಗಮನಿಸಿದ ಬಿಸಿಸಿಐ, ಒಂದು ದೊಡ್ಡ ನಿರ್ಧಾರವನ್ನು ತೆಗೆದುಕೊಂಡಿದೆ. 2025 ರ ಐಪಿಎಲ್ ಅನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಿದೆ.
ಉಗ್ರ ಪೋಷಕ ಪಾಕಿಸ್ತಾನ, ಭಾರತದ ಹಲವಾರು ನಗರಗಳ ಮೇಲೆ ಡ್ರೋನ್ ದಾಳಿ ನಡೆಸಿತು. ಆದರೆ, ಭಾರತ ಪಾಕಿಸ್ತಾನಕ್ಕೆ ಸೂಕ್ತ ಪ್ರತ್ಯುತ್ತರ ನೀಡಿ ಅದರ ಕ್ಷಿಪಣಿಗಳು ಮತ್ತು ಡ್ರೋನ್‌ಗಳನ್ನು ಹೊಡೆದುರುಳಿಸಿತು. ಆದರೆ ಈ ದಾಳಿಯ ಪರಿಣಾಮದಿಂದಾಗಿ ಧರ್ಮಶಾಲಾದಲ್ಲಿ ನಡೆಯುತ್ತಿದ್ದ ಪಂಜಾಬ್ ಕಿಂಗ್ಸ್ ಮತ್ತು ಡೆಲ್ಲಿ ಕ್ಯಾಪಿಟಲ್ಸ್ ನಡುವಿನ ಐಪಿಎಲ್ ಪಂದ್ಯವನ್ನು ಅರ್ಧಕ್ಕೆ ನಿಲ್ಲಿಸಲಾಗಿತ್ತು. ಆದರೀಗ ಇಡೀ ಆವೃತ್ತಿಯನ್ನು ತಾತ್ಕಾಲಿಕವಾಗಿ ರದ್ದುಗೊಳಿಸಲಾಗಿದ್ದು, ಉಳಿದ ಪಂದ್ಯಗಳನ್ನು ಶೀಘ್ರದಲ್ಲೇ ಮರು ನಿಗದಿಪಡಿಸಬಹುದು ಎಂದು ವರದಿಯಾಗಿದೆ.
ಮುನ್ನೇಚ್ಚರಿಕೆಯ ಕ್ರಮವಾಗಿ ಐಪಿಎಲ್ ಪಂದ್ಯಾವಳಿಯನ್ನು ತಾತ್ಕಾಲಿಕವಾಗಿ ರದ್ದುಗೊಳಿಸಲಾಗಿದೆ. ಕೇಂದ್ರ ಮತ್ತು ಎಲ್ಲಾ ಫ್ರಾಂಚೈಸಿಗಳು ಮತ್ತು ಪಾಲುದಾರರೊಂದಿಗೆ ಸಮಾಲೋಚಿಸಿದ ನಂತರ, ಐಪಿಎಲ್ ಪಂದ್ಯಾವಳಿನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸುವ ನಿರ್ಧಾರ ತೆಗೆದುಕೊಳ್ಳಲಾಗಿದೆ. ಇದರರ್ಥ ಈ ಆವೃತ್ತಿಯಲ್ಲಿ ಉಳಿದ ಪಂದ್ಯಗಳನ್ನು ಮುಂದಿನ ದಿನಗಳಲ್ಲಿ ನಡೆಸಲಾಗುವುದು. ಆದರೆ ಉಳಿದ ಪಂದ್ಯಗಳನ್ನು ಯಾವಾಗ ಮತ್ತು ಎಲ್ಲಿ ನಡೆಸಲಾಗುವುದು ಎಂಬುದರ ಕುರಿತು ಇನ್ನೂ ನಿರ್ಧಾರ ತೆಗೆದುಕೊಳ್ಳಲಾಗಿಲ್ಲ.
